ವಿಜಯನಗರ | ಜಿಲ್ಲೆಯಲ್ಲಿ ನೋಂದಣಿಯಿಲ್ಲದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ವಿಜಯನಗರ (ಹೊಸಪೇಟೆ): ಕೆಪಿಎಂಇ ಕಾಯ್ದೆಯಡಿ ನೋಂದಣಿ ಮಾಡಿಸದ ಖಾಸಗಿ ಆಸ್ಪತ್ರೆಗಳು ಮತ್ತು ಕ್ಲಿನಿಕ್‌ಗಳನ್ನು ನಕಲಿ ಎಂದು ಪರಿಗಣಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ನಿರ್ದೇಶಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ತಾಯಿ ಮತ್ತು ಶಿಶು ಮರಣ ಪರಿಶೀಲನೆ ಸಭೆ ಹಾಗೂ ರಾಷ್ಟ್ರೀಯ ಕಾರ್ಯಕ್ರಮಗಳ ಅಂತರ್ ಇಲಾಖೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳು ಮತ್ತು ಕ್ಲಿನಿಕ್‌ಗಳು ಕಡ್ಡಾಯವಾಗಿ ಕೆಪಿಎಂಇ ಕಾಯ್ದೆಯಡಿ ನೋಂದಾಯಿಸಿಕೊಳ್ಳಬೇಕು. ಸಾರ್ವಜನಿಕ ಹಾಗೂ ಆರೋಗ್ಯ ಸೇವೆಯಲ್ಲಿ ನಿರತರಾದ ವೈದ್ಯರು ಕೂಡ ಈ ಕಾಯ್ದೆಯಡಿ ನೋಂದಣಿ ಮಾಡಿಸದಿದ್ದರೆ, ಅಂತಹ ವೈದ್ಯರು ಹಾಗೂ ಆಸ್ಪತ್ರೆಗಳನ್ನು ನಕಲಿ ಎಂದು ಪರಿಗಣಿಸಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ನಕಲಿ ವೈದ್ಯರ ಹಾವಳಿ ತಡೆಗಟ್ಟಲು ವಿಶೇಷ ತಂಡಗಳನ್ನು ರಚಿಸಿ ಕಾನೂನು ಕ್ರಮ ವಹಿಸುವಂತೆ ಅವರು ಹೇಳಿದರು. ಹೆಣ್ಣು ಭ್ರೂಣಲಿಂಗ ಪತ್ತೆ ಅಥವಾ ಭ್ರೂಣ ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದ ಮಾಹಿತಿ ನೀಡುವ ಗುಪ್ತ ಮಾಹಿತಿದಾರರಿಗೆ 1 ಲಕ್ಷ rṲ ಬಹುಮಾನ ನೀಡಲಾಗುವುದು ಮತ್ತು ಅವರ ಗುರುತು ಗೌಪ್ಯವಾಗಿರಲಿದೆ ಎಂದು ತಿಳಿಸಿದರು.
ಭ್ರೂಣ ಲಿಂಗ ಪತ್ತೆಗೆ ಒತ್ತಾಯಿಸುವವರು ಅಥವಾ ದಲ್ಲಾಳಿಗಳು ಪತ್ತೆಯಾದಲ್ಲಿ, ಮೊದಲ ಅಪರಾಧಕ್ಕೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ 50,000 ರೂ. ದಂಡ ವಿಧಿಸಬಹುದು. ನಂತರದ ಅಪರಾಧಕ್ಕೆ ಐದು ವರ್ಷಗಳ ಜೈಲು ಶಿಕ್ಷೆ ಮತ್ತು 1 ಲಕ್ಷ ರೂ. ದಂಡ ವಿಧಿಸಲಾಗುತ್ತದೆ ಎಂದು ಎಚ್ಚರಿಸಿದರು.
ಪಿಸಿಪಿಎನ್‌ಡಿಟಿ ಕಾಯ್ದೆಯಡಿ ನಿಗದಿಪಡಿಸಿರುವ ಎಲ್ಲಾ ದಾಖಲೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಜಿಲ್ಲಾಧಿಕಾರಿ ಹೇಳಿದರು. ಉಲ್ಲಂಘನೆ ಕಂಡುಬಂದರೆ ಯಾವುದೇ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕೆ. ತಿಮ್ಮಪ್ಪ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಲ್.ಆರ್. ಶಂಕರನಾಯ್ಕ, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಜಂಬಯ್ಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಷಣ್ಮುಖ ನಾಯ್ಕ, ಡಾ. ಹರಿಪ್ರಸಾದ್, ಡಾ. ರಾಧಿಕಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.







