ಮುಂದಿನ ಮೂರೂವರೆ ತಿಂಗಳಲ್ಲಿ ಸಾರ್ವಜನಿಕರ ಸೇವೆಗೆ ವಿಜಯನಗರ ಜಿಲ್ಲಾ ಆಸ್ಪತ್ರೆ ಮುಕ್ತ : ಸಚಿವ ಯು.ಟಿ.ಖಾದರ್
250 ಹಾಸಿಗೆ ಸಾಮರ್ಥ್ಯದ ಜಿಲ್ಲಾ ಆಸ್ಪತ್ರೆ ಉದ್ಘಾಟನೆ

ಹೊಸಪೇಟೆ (ವಿಜಯನಗರ): ಸುಮಾರು 104 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ವಿಜಯನಗರ ಜಿಲ್ಲಾ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ನೇಮಕಾತಿ ಸೇರಿದಂತೆ ಅಗತ್ಯವಿರುವ ಎಲ್ಲ ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ ಬಳಿಕ ಮುಂದಿನ ಮೂರರಿಂದ ಮೂರೂವರೆ ತಿಂಗಳೊಳಗೆ ಆಸ್ಪತ್ರೆಯನ್ನು ಪೂರ್ಣ ಪ್ರಮಾಣದಲ್ಲಿ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಸಚಿವ ಯು.ಟಿ.ಖಾದರ್ ತಿಳಿಸಿದರು.
ನಗರದ ಹೊರವಲಯದ ಜಂಬುನಾಥ ಹಳ್ಳಿ ವ್ಯಾಪ್ತಿಯಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ 250 ಹಾಸಿಗೆ ಸಾಮರ್ಥ್ಯದ ನೂತನ ಜಿಲ್ಲಾ ಆಸ್ಪತ್ರೆ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದ ಸರ್ಕಾರಿ ಜಿಲ್ಲಾ ಆಸ್ಪತ್ರೆಗಳ ಪೈಕಿ ವಿಜಯನಗರ ಜಿಲ್ಲಾ ಆಸ್ಪತ್ರೆಯು ಅತ್ಯುತ್ತಮ ಕಟ್ಟಡಗಳಲ್ಲಿ ಒಂದಾಗಿದೆ. ಕಟ್ಟಡ ಉದ್ಘಾಟನೆಯಾಗಿದ್ದರೂ ವೈದ್ಯಕೀಯ ಉಪಕರಣಗಳ ಸ್ಥಳಾಂತರ ಹಾಗೂ ಅಗತ್ಯ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳಬೇಕಿದೆ. ಹೀಗಾಗಿ ಆಸ್ಪತ್ರೆಯನ್ನು ಪೂರ್ಣ ಪ್ರಮಾಣದಲ್ಲಿ ಸಾರ್ವಜನಿಕ ಸೇವೆಗೆ ಸಜ್ಜುಗೊಳಿಸಲು ಸುಮಾರು ಮೂರು ತಿಂಗಳ ಕಾಲಾವಕಾಶ ಬೇಕಾಗುತ್ತದೆ ಎಂದು ಹೇಳಿದರು.
ಜಿಲ್ಲೆಯ ಭವಿಷ್ಯದ ದೃಷ್ಟಿಯಿಂದ ಸುಮಾರು 53 ಎಕರೆ ಪ್ರದೇಶದಲ್ಲಿ ಆಸ್ಪತ್ರೆಯ ವ್ಯವಸ್ಥೆ ರೂಪಿಸಲಾಗಿದೆ. ಮುಂದಿನ ದಿನಗಳಲ್ಲಿ ಆಯುರ್ವೇದ ಆಸ್ಪತ್ರೆ, ಕ್ಯಾನ್ಸರ್ ಘಟಕ, ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜು ಹಾಗೂ ವೈದ್ಯಕೀಯ ಕಾಲೇಜು ಸೇರಿದಂತೆ ವಿವಿಧ ಸೌಲಭ್ಯಗಳು ಇಲ್ಲಿ ಆರಂಭವಾಗುವ ನಿರೀಕ್ಷೆಯಿದೆ. ಸದ್ಯ ತಾಲೂಕು ಆಸ್ಪತ್ರೆ ಎಂದಿನಂತೆ ಕಾರ್ಯನಿರ್ವಹಿಸಲಿದೆ. ಇದರಿಂದ ಸಣ್ಣಪುಟ್ಟ ತಪಾಸಣೆಗಳಿಗಾಗಿ ಜನರು ಅನಗತ್ಯವಾಗಿ ದೂರದ ಆಸ್ಪತ್ರೆಗೆ ಅಲೆಯುವುದು ತಪ್ಪಲಿದೆ ಎಂದರು.
ನಕಲಿ ವೈದ್ಯರ ವಿರುದ್ಧ ಕ್ರಮ :
ನಕಲಿ ವೈದ್ಯರ ಹಾವಳಿಗೆ ಕಡಿವಾಣ ಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಸಂಬಂಧ ಕಾನೂನು ಬದಲಾವಣೆ ಹಾಗೂ ಕಠಿಣ ಶಿಕ್ಷೆ ವಿಧಿಸುವ ಬಗ್ಗೆಯೂ ಕ್ರಮ ಕೈಗೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ ಎದುರಾಗಿರುವ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ವಿಶೇಷ ಕ್ಯಾಬಿನೆಟ್ ಸಭೆ ನಡೆಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಈ ಶೈಕ್ಷಣಿಕ ವರ್ಷದಲ್ಲಿ ಹೊಸ ಶಾಲೆಗಳು, ಹಾಸ್ಟೆಲ್‌ಗಳು ಹಾಗೂ ವೃತ್ತಿಪರ ಕಾಲೇಜುಗಳ ಆರಂಭಕ್ಕೆ ಮಂಜೂರಾತಿ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಲಾಗುತ್ತಿದೆ ಎಂದರು.
ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಬಸವಂತಪ್ಪ ಮಾತನಾಡಿ, ವಿಜಯನಗರ ಹೊಸ ಜಿಲ್ಲೆಯಾಗಿದ್ದು, ಇಲ್ಲಿನ ಸಾರ್ವಜನಿಕರ ಆರೋಗ್ಯ ಸುಧಾರಣೆಗೆ ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಜಿಲ್ಲಾ ಆಸ್ಪತ್ರೆಯ ಆರಂಭದೊಂದಿಗೆ ಆರೋಗ್ಯ, ಉದ್ಯೋಗ ಹಾಗೂ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದರು.
ವಿಜಯನಗರ ಜಿಲ್ಲಾ ಆಸ್ಪತ್ರೆಯನ್ನು 104 ಕೋಟಿ ರೂ. ವೆಚ್ಚದಲ್ಲಿ ಸುಂದರವಾಗಿ ಹಾಗೂ ಅತ್ಯಾಧುನಿಕ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ನಿರ್ಮಿಸಲಾಗಿದೆ. ಹೊರರೋಗಿ ವಿಭಾಗ, ಶಸ್ತ್ರಚಿಕಿತ್ಸಾ ವಿಭಾಗ, ಔಷಧಾಲಯ ಸೇರಿದಂತೆ 17ಕ್ಕೂ ಹೆಚ್ಚು ವಿಭಾಗಗಳನ್ನು ಆಸ್ಪತ್ರೆಯಲ್ಲಿ ಆರಂಭಿಸಲಾಗಿದೆ ಎಂದು ತಿಳಿಸಿದರು.
ಈಗಾಗಲೇ ಮೊದಲ ಹಂತದಲ್ಲಿ 90 ಸಿಬ್ಬಂದಿಯನ್ನು ಪೂರ್ಣಾವಧಿಗೆ ನೇಮಕ ಮಾಡಲಾಗಿದೆ. ಎರಡನೇ ಹಂತದಲ್ಲಿ ಉಳಿದ ಅಗತ್ಯ ವೈದ್ಯರು ಹಾಗೂ ಶುಶ್ರೂಷಕ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲು ಅನುಮೋದನೆ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಕ್ರಮ ಕೈಗೊಳ್ಳಲಾಗಿದೆ ಎಂದರು.
ರಾಜ್ಯ ಸರ್ಕಾರ ಹಾಗೂ ಆರೋಗ್ಯ ಸಚಿವರು ಬಡವರು, ಅಸಹಾಯಕರು ಮತ್ತು ಅಗತ್ಯವಿರುವವರಿಗೆ ಚಿಕಿತ್ಸೆ ಒದಗಿಸಲು ಬದ್ಧರಾಗಿದ್ದಾರೆ. ಜಿಲ್ಲಾ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆ, ಎಕ್ಸ್‌ರೇ, ಎಂಆರ್‌ಐ, ಶವಾಗಾರ ಸೇರಿದಂತೆ ಅಗತ್ಯ ಸೌಲಭ್ಯಗಳು ಸಾರ್ವಜನಿಕರಿಗೆ ಲಭ್ಯವಾಗಬೇಕು. ಆಸ್ಪತ್ರೆಯಲ್ಲಿ ಕೇಂದ್ರೀಕೃತ ಪ್ರಯೋಗಾಲಯ ಸ್ಥಾಪನೆಯಾಗಬೇಕು. ಜಿಲ್ಲಾಡಳಿತ ಅಗತ್ಯ ಪ್ರಸ್ತಾವನೆ ಸಲ್ಲಿಸಿದಲ್ಲಿ ಪರಿಶೀಲಿಸಿ, ಜಿಲ್ಲೆಯ ಎಲ್ಲ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಹಾಗೂ ಸರ್ಕಾರದ ಅನುದಾನದಲ್ಲಿ ಸೌಲಭ್ಯಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಕೆ.ಎಸ್. ಬಸವಂತಪ್ಪ ಹೇಳಿದರು.
ಸರ್ಕಾರಿ ಆಸ್ಪತ್ರೆಗಳು ಬಡವರ ಬದುಕಿನ ಆರೋಗ್ಯ ಸಂಜೀವಿನಿಗಳಾಗಿವೆ. ಜಿಲ್ಲಾ ಆಸ್ಪತ್ರೆ ಸೇರಿದಂತೆ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ನಿರ್ಲಕ್ಷ್ಯ ಅಥವಾ ಭ್ರಷ್ಟಾಚಾರ ಕಂಡುಬಂದರೆ ವೈದ್ಯರು ಹಾಗೂ ಸಿಬ್ಬಂದಿ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಸರ್ಕಾರದ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಅಧಿಕಾರಿಗಳು, ವೈದ್ಯರು ಮತ್ತು ಸಿಬ್ಬಂದಿಯ ಪ್ರಾಮಾಣಿಕ ಸೇವೆ ಹಾಗೂ ಕಾಳಜಿ ಮುಖ್ಯವಾಗಿದೆ ಎಂದರು.
ಜಿಲ್ಲಾ ಆಸ್ಪತ್ರೆಯಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕು. ಆಸ್ಪತ್ರೆ ಸಿಬ್ಬಂದಿ ಚಿಕಿತ್ಸೆಗೆ ಬರುವ ರೋಗಿಗಳೊಂದಿಗೆ ಸೌಜನ್ಯದಿಂದ ವರ್ತಿಸಿ, ಅವರ ನೋವಿಗೆ ತಕ್ಷಣ ಸ್ಪಂದಿಸಬೇಕು. ಆಗ ಮಾತ್ರ ಜಿಲ್ಲಾ ಆಸ್ಪತ್ರೆ ಆರಂಭವಾದ ಉದ್ದೇಶ ಸಾರ್ಥಕವಾಗುತ್ತದೆ ಎಂದು ಹೇಳಿದರು.
ಹೊಸಪೇಟೆಯಲ್ಲಿಯೇ ಹೃದಯ ಚಿಕಿತ್ಸೆಗೆ ಸೌಲಭ್ಯ:
ಹೃದಯ ಸಂಬಂಧಿ ಕಾಯಿಲೆಗಳಿಗೆ ಚಿಕಿತ್ಸೆ ಹಾಗೂ ಶಸ್ತ್ರಚಿಕಿತ್ಸೆ ಪಡೆಯಲು ಮಣಿಪಾಲ, ಬಳ್ಳಾರಿ, ದಾವಣಗೆರೆ ಸೇರಿದಂತೆ ದೂರದ ನಗರಗಳಿಗೆ ತೆರಳುವ ಅನಿವಾರ್ಯತೆಯನ್ನು ತಪ್ಪಿಸಲು ಹೊಸಪೇಟೆಯಲ್ಲಿಯೇ ಅಗತ್ಯ ಉಪಕರಣಗಳು ಹಾಗೂ ಹೃದಯ ಶಸ್ತ್ರಚಿಕಿತ್ಸಾ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಜಿಲ್ಲೆಗೆ ಕ್ಯಾನ್ಸರ್ ಆಸ್ಪತ್ರೆ :
ಜಿಲ್ಲಾ ಆಸ್ಪತ್ರೆಗೆ ಸಾಕಷ್ಟು ಭೂಮಿ ಲಭ್ಯವಿದೆ. ಇದು ಗಣಿ ನಾಡಾಗಿರುವುದರಿಂದ ಇಲ್ಲಿನ ಕಾರ್ಮಿಕರು ಶ್ವಾಸಕೋಶ ಸೇರಿದಂತೆ ವಿವಿಧ ಕಾಯಿಲೆಗಳಿಂದ ಬಳಲುವ ಸಾಧ್ಯತೆ ಇದೆ. ಆದ್ದರಿಂದ ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳ ಸಹಕಾರದೊಂದಿಗೆ ಹೊಸಪೇಟೆಯಲ್ಲಿ ಶೀಘ್ರ ಕ್ಯಾನ್ಸರ್ ಆಸ್ಪತ್ರೆ ಆರಂಭಿಸಲು ಪ್ರಯತ್ನಿಸಲಾಗುತ್ತಿದೆ. ಇದರಿಂದ ವಿಶೇಷವಾಗಿ ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಯ ಜನರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.
ಸಕ್ಕರೆ ಕಾರ್ಖಾನೆ, ಉದ್ಯೋಗ ಸೃಷ್ಟಿಗೆ ಆದ್ಯತೆ:
ಜನರ ಬೇಡಿಕೆಗೆ ಅನುಗುಣವಾಗಿ ಸೂಕ್ತ ಸ್ಥಳದಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡಲಿದೆ. ಜನರಿಗೆ ಅಗತ್ಯವಿರುವಷ್ಟು ಉದ್ಯೋಗಗಳನ್ನು ಸೃಷ್ಟಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಇದಕ್ಕೆ ಸಾರ್ವಜನಿಕರ ಸಹಕಾರವೂ ಮುಖ್ಯವಾಗಿದೆ. ಜನರ ಆಶೀರ್ವಾದದಿಂದ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಸರ್ಕಾರ ಉತ್ತಮ ಕಾರ್ಯಗಳನ್ನು ಮಾಡುತ್ತಿವೆ ಎಂದು ಕೆ.ಎಸ್. ಬಸವಂತಪ್ಪ ಹೇಳಿದರು.
ಬಳ್ಳಾರಿ ಸಂಸದ ಈ. ತುಕಾರಾಮ್ ಮಾತನಾಡಿ, ವಿಜಯನಗರ ಸಾಮ್ರಾಜ್ಯದ ಐತಿಹಾಸಿಕ ಪರಂಪರೆ, ತುಂಗಭದ್ರಾ ಜಲಾಶಯದ ನೀರಾವರಿ ಕೊಡುಗೆ, ಸಂಡೂರಿನ ಖನಿಜ ಸಂಪತ್ತು ಹಾಗೂ ಕೈಗಾರಿಕಾ ಬೆಳವಣಿಗೆಗಳು ವಿಜಯನಗರ ಮತ್ತು ಅಖಂಡ ಬಳ್ಳಾರಿ ಜಿಲ್ಲೆಗಳ ಪ್ರಗತಿಗೆ ಮಹತ್ವದ ಕೊಡುಗೆ ನೀಡಿವೆ ಎಂದರು.
ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಪ್ರಗತಿಗೆ ಒತ್ತು ನೀಡಿದ ಅವರು, ಆಸ್ಪತ್ರೆಗಳು, ಡಯಾಲಿಸಿಸ್ ಘಟಕಗಳು, ಸಿಟಿ ಮತ್ತು ಎಂಆರ್‌ಐ ಸ್ಕ್ಯಾನ್, ನವೋದಯ ಶಾಲೆ, ಇಎಸ್‌ಐ ಆಸ್ಪತ್ರೆ ಹಾಗೂ ಕ್ರಿಟಿಕಲ್ ಕೇರ್ ಸೌಲಭ್ಯಗಳ ಮಹತ್ವವನ್ನು ವಿವರಿಸಿದರು. ಆರೋಗ್ಯಕರ ಜೀವನಕ್ಕೆ ವೈದ್ಯಕೀಯ ಸೌಲಭ್ಯಗಳ ಜೊತೆಗೆ ಪೌಷ್ಟಿಕ ಆಹಾರ, ನಿಯಮಿತ ದೈಹಿಕ ಚಟುವಟಿಕೆ, ಉತ್ತಮ ಮನೋಭಾವ ಹಾಗೂ ಒತ್ತಡರಹಿತ ಜೀವನಶೈಲಿಯೂ ಅಗತ್ಯ ಎಂದು ಸಲಹೆ ನೀಡಿದರು.
ಕೂಡ್ಲಗಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ ಮಾತನಾಡಿ, ಆಸ್ಪತ್ರೆಗೆ ಚಿಕಿತ್ಸೆಗೆ ಬರುವ ಯಾವುದೇ ರೋಗಿಯನ್ನು ನಿರಾಕರಿಸದೆ ಅಗತ್ಯವಿರುವ ಎಲ್ಲ ವೈದ್ಯಕೀಯ ಸೇವೆಗಳನ್ನು ಒದಗಿಸಬೇಕು. ವೈದ್ಯರು ಮತ್ತು ಸಿಬ್ಬಂದಿ ಯಾವುದೇ ನಿರ್ಲಕ್ಷ್ಯ ಅಥವಾ ತಾರತಮ್ಯವಿಲ್ಲದೆ ಸೇವಾ ಮನೋಭಾವದಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.
ರಕ್ತನಿಧಿ, ಪ್ರಯೋಗಾಲಯ, ಔಷಧಾಲಯ, ರೇಡಿಯಾಲಜಿ, ಸಿಟಿ ಸ್ಕ್ಯಾನ್, ಎಂಆರ್‌ಐ, ಯುರಾಲಜಿ ಹಾಗೂ ಡಯಾಲಿಸಿಸ್ ಸೇರಿದಂತೆ ಅಗತ್ಯ ವೈದ್ಯಕೀಯ ಸೌಲಭ್ಯಗಳು ದಿನದ 24 ಗಂಟೆಯೂ ಲಭ್ಯವಿರಬೇಕು. ಸಣ್ಣಪುಟ್ಟ ಚಿಕಿತ್ಸೆಗೂ ರೋಗಿಗಳನ್ನು ಬೇರೆ ಆಸ್ಪತ್ರೆಗಳಿಗೆ ಕಳುಹಿಸದೆ, ಪ್ರತಿಯೊಬ್ಬರಿಗೂ ಇಲ್ಲಿಯೇ ಗುಣಮಟ್ಟದ ಚಿಕಿತ್ಸೆ ದೊರೆಯುವಂತಾಗಬೇಕು ಎಂದು ಸೂಚಿಸಿದರು.
ಕೂಡ್ಲಗಿ ಸೇರಿದಂತೆ ಜಿಲ್ಲೆಯ ಜನರಿಗೆ ಈ ಆಸ್ಪತ್ರೆ ಉಪಯುಕ್ತವಾಗಲಿದೆ. ವಿಶೇಷವಾಗಿ ಕಣ್ಣಿನ ಚಿಕಿತ್ಸೆಗಾಗಿ ಬರುವ ರೋಗಿಗಳಿಗೆ ತಾವೇ ವೈದ್ಯರಾಗಿ ಸೇವೆ ಸಲ್ಲಿಸುವುದಾಗಿ ತಿಳಿಸಿದರು. ಆಸ್ಪತ್ರೆಯ ಮೂಲಕ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಿ ಇತಿಹಾಸ ನಿರ್ಮಿಸೋಣ ಎಂದ ಅವರು, ಆಸ್ಪತ್ರೆಯಲ್ಲಿನ ಯಾವುದೇ ಕೊರತೆ ಅಥವಾ ಸಮಸ್ಯೆಗಳನ್ನು ತಮ್ಮ ಗಮನಕ್ಕೆ ತಂದರೆ ತಕ್ಷಣ ಪರಿಹರಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ನಗರಸಭೆ ಅಧ್ಯಕ್ಷ ರೂಪೇಶ ಕುಮಾರ ಎನ್. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹೊಸಪೇಟೆ ಶಾಸಕ ಹೆಚ್.ಆರ್. ಗವಿಯಪ್ಪ ಮಾತನಾಡಿ, ಜಿಲ್ಲಾ ಆಸ್ಪತ್ರೆಯ ಉನ್ನತೀಕರಣ ಹಾಗೂ ಆಧುನಿಕ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ. ಪ್ರತಿ ಜಿಲ್ಲಾ ಆಸ್ಪತ್ರೆಗೆ ಪೂರಕವಾಗಿ ಆಯಾ ಜಿಲ್ಲೆಯಲ್ಲಿ ವೈದ್ಯಕೀಯ ಮಹಾವಿದ್ಯಾಲಯ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಅದು ಹೊಸಪೇಟೆ ನಗರಕ್ಕೂ ಬರಲಿದೆ ಎಂದು ತಿಳಿಸಿದರು.
ಜಿಲ್ಲಾ ಆಸ್ಪತ್ರೆಯಲ್ಲಿ ಈಗಾಗಲೇ ರಕ್ತನಿಧಿ, ಪ್ರಯೋಗಾಲಯ ಸೇರಿದಂತೆ ಹಲವು ವೈದ್ಯಕೀಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಕ್ಯಾಥ್ ಲ್ಯಾಬ್ ಸೇರಿದಂತೆ ಬಾಕಿ ಉಳಿದಿರುವ ಸೌಲಭ್ಯಗಳು ಶೀಘ್ರದಲ್ಲೇ ಆರಂಭವಾಗಲಿವೆ. ಮುಂದಿನ ಆರು ತಿಂಗಳಲ್ಲಿ ಹೃದ್ರೋಗ, ಕ್ಯಾನ್ಸರ್ ಸೇರಿದಂತೆ ವಿವಿಧ ಚಿಕಿತ್ಸಾ ವಿಭಾಗಗಳನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗುವುದು ಎಂದರು.
ಪ್ರಸ್ತುತ ಪ್ರತಿದಿನ ಸುಮಾರು 500 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು, ಮುಂದಿನ ದಿನಗಳಲ್ಲಿ 2,000 ರೋಗಿಗಳಿಗೆ ಸೇವೆ ಒದಗಿಸುವ ಗುರಿ ಹೊಂದಲಾಗಿದೆ. ಸಿಬ್ಬಂದಿ ನೇಮಕಾತಿಗೂ ಸರ್ಕಾರ ಅನುಮತಿ ನೀಡಿದೆ ಎಂದು ಹೇಳಿದರು.
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎಲ್.ಆರ್. ಶಂಕರ ನಾಯ್ಕ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶಿವಮೂರ್ತಿ ಕೆ., ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎನ್.ಎಫ್. ಇಮಾಮ್ ನಿಯಾಜಿ, ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ, ಅಪರ ಜಿಲ್ಲಾಧಿಕಾರಿ ಲೋಕೇಶ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎಲ್.ಆರ್. ಶಂಕರ್ ನಾಯ್ಕ್, ಡಿಎಚ್‌ಒ ಡಾ. ಲಿಂಗರಾಜು ಟಿ. ಸೇರಿದಂತೆ ಇತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಜಿಲ್ಲಾ ಆಸ್ಪತ್ರೆಗೆ ಸಂಪರ್ಕ ರಸ್ತೆ ನಿರ್ಮಿಸಲು ಒಂದು ಎಕರೆ ಭೂಮಿಯನ್ನು ದಾನವಾಗಿ ನೀಡಿದ ಮಹಾದಾನಿ ವಿದ್ಯಾಬಾಯಿ ಅವರನ್ನು ಹಾಗೂ ಸುಸಜ್ಜಿತ ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ಶ್ರಮಿಸಿದ ಅಧಿಕಾರಿಗಳು, ಸಿಬ್ಬಂದಿ ಮತ್ತು ಗುತ್ತಿಗೆದಾರರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ನಂತರ ಹೊಸಪೇಟೆ ವಿಧಾನಸಭಾ ಕ್ಷೇತ್ರದ ಫಲಾನುಭವಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಹಾಗೂ ಶಾಸಕರು ನಿವೇಶನದ ಹಕ್ಕುಪತ್ರಗಳನ್ನು ವಿತರಿಸಿದರು.






