ವಿಜಯನಗರ | ಕೌಟುಂಬಿಕ ಕಲಹ: ಪೂಜೆ ವೇಳೆ ಪತ್ನಿಯ ಕತ್ತು ಕೊಯ್ದು ಹತ್ಯೆ ಮಾಡಿದ ಪತಿ

ವಿಜಯನಗರ: ಕೌಟುಂಬಿಕ ಕಲಹದ ಹಿನ್ನೆಲೆ ಪತಿಯೊಬ್ಬ ತನ್ನ ಪತ್ನಿಯನ್ನು ಪೂಜೆ ಮಾಡುತ್ತಿದ್ದ ವೇಳೆಯೇ ಚಾಕುವಿನಿಂದ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ಪಟ್ಟಣದ ಆಗಸರ ಓಣಿಯಲ್ಲಿ ಶುಕ್ರವಾರ ನಡೆದಿದೆ.
ಪ್ರಭಾವತಿ (50) ಮೃತ ಮಹಿಳೆಯಾಗಿದ್ದು, ಪತಿ ರಾಮಮೂರ್ತಿ (55) ಹತ್ಯೆ ನಡೆಸಿದ ಆರೋಪಿಯಾಗಿದ್ದಾನೆ.
ಮಾಹಿತಿಯ ಪ್ರಕಾರ, ಬೆಳಗ್ಗೆ ಸುಮಾರು 11 ಗಂಟೆ ವೇಳೆಗೆ ಪ್ರಭಾವತಿ ಮನೆಯ ಪೂಜಾ ಕೋಣೆಯಲ್ಲಿ ಪೂಜೆ ಸಲ್ಲಿಸುತ್ತಿದ್ದಾಗ, ರಾಮಮೂರ್ತಿ ಚಾಕುವಿನಿಂದ ಏಕಾಏಕಿ ಹಲ್ಲೆ ನಡೆಸಿದ್ದಾನೆ. ಕುತ್ತಿಗೆಗೆ ತೀವ್ರ ಗಾಯವಾಗಿದ್ದ ಪರಿಣಾಮ ಪ್ರಭಾವತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಜಯನಗರ ಜಿಲ್ಲಾ ಪೊಲೀಸ್ ಅಧೀಕ್ಷಕಿ ಎಸ್. ಜಾಹ್ನವಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಮಂಜುನಾಥ್ ಹಾಗೂ ಡಿವೈಎಸ್ಪಿ ಮುರುಳಿಧರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನಾ ಸ್ಥಳದಲ್ಲಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ತನಿಖೆ ಕೈಗೊಂಡಿದ್ದಾರೆ.
ಹತ್ಯೆ ನಡೆದ ಬಳಿಕ ಆರೋಪಿ ರಾಮಮೂರ್ತಿಯನ್ನು ಹೊಸಪೇಟೆ ಪಟ್ಟಣ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಕೌಟುಂಬಿಕ ಕಲಹವೇ ಕೃತ್ಯಕ್ಕೆ ಕಾರಣ ಎಂಬ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.






