ವಿಜಯನಗರ | ಮಕ್ಕಳ ಬಾಲ್ಯ ಉಳಿಸೋಣ, ದುಡಿತ ತಪ್ಪಿಸೋಣ : ಡಿಸಿ ಕವಿತಾ ಮನ್ನಿಕೇರಿ

ವಿಜಯನಗರ: ಮಕ್ಕಳು ರಾಷ್ಟ್ರದ ಸಂಪತ್ತು. ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ ಪದ್ಧತಿ ಮಕ್ಕಳನ್ನು ದೈಹಿಕ, ನೈತಿಕ, ಮಾನಸಿಕ ಮತ್ತು ಆರ್ಥಿಕವಾಗಿ ಶೋಷಣೆಗೆ ಒಳಪಡಿಸುತ್ತದೆ. ಜೊತೆಗೆ ಮಕ್ಕಳನ್ನು ಶಿಕ್ಷಣದ ಅವಕಾಶಗಳಿಂದ ವಂಚಿತರನ್ನಾಗಿಸುತ್ತದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾರ್ಮಿಕ ಯೋಜನಾ ಸೊಸೈಟಿ ಹಾಗೂ ಸಂಪಿಗೆ ಸಾಂಸ್ಕೃತಿಕ ಕಲಾ ಟ್ರಸ್ಟ್ ಸಹಯೋಗದಲ್ಲಿ ಬಾಲ್ಯ ಹಾಗೂ ಕಿಶೋರ ಕಾರ್ಮಿಕರ ನಿಷೇಧ ಕುರಿತು ಬೀದಿ ನಾಟಕ ಮತ್ತು ಜಾಗೃತಿ ಹಾಡುಗಳ ಮೂಲಕ ಜನಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು.
ಬಾಲ್ಯ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ತಿದ್ದುಪಡಿ ಕಾಯ್ದೆ 1986ರ ಪ್ರಕಾರ, ಎಲ್ಲಾ ಉದ್ಯೋಗ ಮತ್ತು ಪ್ರಕ್ರಿಯೆಗಳಲ್ಲಿ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಸಂಪೂರ್ಣ ನಿಷೇಧ. 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರನ್ನು ಅಪಾಯಕಾರಿ ಉದ್ಯೋಗಗಳಲ್ಲಿ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ. ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗದಂತೆ ಕೇವಲ ಕುಟುಂಬದ ಸ್ವಂತ ಉದ್ಯೋಗ ಅಥವಾ ಬಾಲನಟರಾಗಿ ಸೀಮಿತ ಅವಕಾಶವಿದೆ. ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಿ, ವಿದ್ಯಾವಂತರನ್ನಾಗಿಸಲು ಕಾಳಜಿ ವಹಿಸಬೇಕು. ಬಾಲಕಾರ್ಮಿಕ ಪದ್ಧತಿಗೆ ಕಡಿವಾಣ ಹಾಕಲು ಸರ್ಕಾರ ಮಾತ್ರವಲ್ಲ, ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳೂ ಕೈಜೋಡಿಸಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ನಿರ್ದೇಶಕ ಎ. ಮೌನೇಶ್ ಮಾತನಾಡಿ, 6 ರಿಂದ 14 ವರ್ಷದೊಳಗಿನ ಮಕ್ಕಳು ಯಾವುದೇ ಉದ್ಯೋಗದಲ್ಲಿ, 18 ವರ್ಷದೊಳಗಿನವರು ಅಪಾಯಕಾರಿ ಉದ್ಯೋಗಗಳಲ್ಲಿ ಕಂಡುಬಂದರೆ ತಕ್ಷಣವೇ ಮಕ್ಕಳ ಸಹಾಯವಾಣಿ 1098, ತುರ್ತುಸಹಾಯ 112 ಅಥವಾ ಕಾರ್ಮಿಕ ಸಹಾಯವಾಣಿ 155214 ಗೆ ಕರೆ ಮಾಡಿ ಮಾಹಿತಿ ನೀಡಬಹುದು. ಜೊತೆಗೆ ಜಿಲ್ಲಾಡಳಿತ, ಪೊಲೀಸ್, ಜಿಲ್ಲಾ ಪಂಚಾಯತ್ ಹಾಗೂ ಶಿಕ್ಷಣ ಇಲಾಖೆಯ ದೂರವಾಣಿ ಸಂಖ್ಯೆಗಳಿಗೂ ನೇರ ದೂರು ನೀಡಬಹುದಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವೈ.ಎ. ಕಾಳೆ, ಹೊಸಪೇಟೆ ಬಿಇಒ ಶೇಖರಪ್ಪ ಹೊರಪೇಟೆ, ಕಾರ್ಮಿಕ ಇಲಾಖೆ ನಿರೀಕ್ಷಕರಾದ ಶಿವಶಂಕರ್ ತಳವಾರ, ಗೋಪಾಲ ದೂಪದ್, ಸಂಪಿಗೆ ಸಾಂಸ್ಕೃತಿಕ ಕಲಾ ಟ್ರಸ್ಟ್‌ನ ಕಲಾವಿದರಾದ ಅನುಮಯ್ಯ, ಎಸ್.ಎಮ್. ಹುಲುಗಪ್ಪ, ಬಿ. ಆನಂದ, ಹೇಮಂತ್, ಸುಂಕಪ್ಪ, ದಿವ್ಯ, ಸರ್ವಮಂಗಳಮ್ಮ, ಕೊಟ್ರೇಶ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.







