ವಿಜಯನಗರ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಸಂಸದಿಂದ ಬೃಹತ್ ಪ್ರತಿಭಟನೆ

ಕೂಡ್ಲಿಗಿ: ಹಳ್ಳಿಗಳಲ್ಲಿನ ದಲಿತ ಕೇರಿಗಳಿಗೆ ಮೂಲಸೌಲಭ್ಯ ಕಲ್ಪಿಸುವುದು, ದಲಿತರು ಶತಮಾನಗಳಿಂದ ಸಾಗುವಳಿ ಮಾಡುತ್ತಿರುವ ಸರಕಾರಿ ಭೂಮಿಯನ್ನು ರಕ್ಷಿಸುವುದು ಹಾಗೂ ದಲಿತರ ಮೇಲಿನ ದೌರ್ಜನ್ಯಗಳನ್ನು ತಡೆಯುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಸ್ಥಾಪಿತ) ನೇತೃತ್ವದಲ್ಲಿ ಸೋಮವಾರ ಕೂಡ್ಲಿಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.
ಪಟ್ಟಣದ ಗಾಂಧೀಜಿ ಚಿತಾಭಸ್ಮವಿರುವ ಹುತಾತ್ಮರ ಸ್ಮಾರಕದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಮುಖ್ಯರಸ್ತೆ, ಡಾ. ಬಿ.ಆರ್. ಅಂಬೇಡ್ಕರ್ ವೃತ್ತ, ರಾಜವೀರ ಮದಕರಿನಾಯಕ ವೃತ್ತ, ಹಳೆ ಸಂತೆ ಮೈದಾನ ಹಾಗೂ ಕೊತ್ತಲ ಆಂಜನೇಯ ದೇವಸ್ಥಾನ ಮಾರ್ಗವಾಗಿ ತಹಶೀಲ್ದಾರ್ ಕಚೇರಿವರೆಗೆ ಸಾಗಿತು. ಬಳಿಕ ಪ್ರತಿಭಟನಾಕಾರರು ತಹಶೀಲ್ದಾರ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ದಸಂಸ ವಿಜಯನಗರ ಜಿಲ್ಲಾ ಸಂಚಾಲಕ ಎಸ್. ದುರುಗೇಶ್, ತಾಲೂಕಿನಲ್ಲಿ ಪರಿಶಿಷ್ಟ ಜಾತಿಯವರು ಸಾಗುವಳಿ ಮಾಡುತ್ತಿರುವ ಸರಕಾರಿ ಭೂಮಿಗಳನ್ನು ಬೇರೆ ಸಮುದಾಯದವರು ದಬ್ಬಾಳಿಕೆ ಮೂಲಕ ಕಬಳಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು. ದಲಿತರಿಗೆ ಸ್ಮಶಾನಗಳ ಕೊರತೆ, ಗಡ್ಡದಬೋರಯ್ಯನಹಟ್ಟಿ ದಲಿತ ಕಾಲೊನಿಯಲ್ಲಿ ಮಳೆನೀರು ನಿಂತು ಉಂಟಾಗಿರುವ ಸಮಸ್ಯೆ ಹಾಗೂ ಪರಿಶಿಷ್ಟ ಜಾತಿಯ ಅಧಿಕಾರಿಗಳ ವಿರುದ್ಧ ನಡೆಯುತ್ತಿರುವ ಕುತಂತ್ರಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಎಸ್ಸಿ-ಎಸ್ಟಿ ಜಮೀನುಗಳನ್ನು ದಲ್ಲಾಳಿಗಳ ಮೂಲಕ ಖಾಸಗಿ ವಿಂಡ್‌ಫ್ಯಾನ್ ಕಂಪೆನಿಗಳಿಗೆ ನೀಡಲಾಗುತ್ತಿದ್ದು, ಅಧಿಕಾರಿಗಳು ಮೌನ ವಹಿಸಿದ್ದಾರೆ ಎಂದು ದೂರಿದರು. ಸಮಸ್ಯೆಗಳಿಗೆ ಶೀಘ್ರ ಪರಿಹಾರ ದೊರೆಯದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
ದಸಂಸ ತಾಲೂಕು ಸಂಚಾಲಕ ಬಡೇಲಡುಕು ದುರುಗೇಶ್ ಮಾತನಾಡಿ, ದಲಿತ ಕಾಲೊನಿಗಳಲ್ಲಿ ಚರಂಡಿ, ರಸ್ತೆ, ಕುಡಿಯುವ ನೀರು ಹಾಗೂ ವಿದ್ಯುತ್ ಸೇರಿದಂತೆ ಮೂಲಸೌಲಭ್ಯಗಳ ಕೊರತೆ ತೀವ್ರವಾಗಿದೆ ಎಂದರು. ತಾಯಕನಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ದಲಿತರು ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದು, ಸಂವಿಧಾನಾತ್ಮಕ ಹಕ್ಕುಗಳನ್ನು ಒದಗಿಸುವಲ್ಲಿ ಸರಕಾರ ಹಾಗೂ ಜನಪ್ರತಿನಿಧಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿದರು.
ಜಿಲ್ಲಾ ಸಂಘಟನಾ ಸಂಚಾಲಕ ಕಂದಗಲ್ಲು ಪರಶುರಾಮ ಮಾತನಾಡಿ, ಮಾದಿಗ ಸಮುದಾಯ ಇನ್ನೂ ಸಾಮಾಜಿಕ ಮತ್ತು ಆರ್ಥಿಕವಾಗಿ ಹಿಂದುಳಿದ ಸ್ಥಿತಿಯಲ್ಲಿದ್ದು, ಅನೇಕ ಕುಟುಂಬಗಳು ಸಣ್ಣ ಮನೆಗಳಲ್ಲಿ ಒಟ್ಟಾಗಿ ಜೀವನ ನಡೆಸುವ ಪರಿಸ್ಥಿತಿ ಎದುರಿಸುತ್ತಿವೆ ಎಂದರು. ದಲಿತರ ಮನೆಗಳ ಮೇಲೆ ಅಪಾಯಕಾರಿಯಾಗಿ ವಿದ್ಯುತ್ ತಂತಿಗಳು ಹಾದುಹೋಗುತ್ತಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ದೂರಿದರು. ಬೇಡಿಕೆಗಳನ್ನು ಈಡೇರಿಸದಿದ್ದರೆ ತಾಲೂಕು ಕಚೇರಿ ಎದುರು ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ದಸಂಸ ಮುಖಂಡರು ಹಾಗೂ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಸಾವಿರಕ್ಕೂ ಅಧಿಕ ಜನರು ಭಾಗವಹಿಸಿದ್ದರು.






