ವಿಜಯನಗರ | ಜನಸ್ಪಂದನಾ ಕಾರ್ಯಕ್ರಮಕ್ಕೆ ಸಚಿವ ಝಮೀರ್ ಅಹ್ಮದ್ ಚಾಲನೆ

ವಿಜಯನಗರ (ಹೊಸಪೇಟೆ): ಜನಸ್ಪಂದನಾ ಕಾರ್ಯಕ್ರಮವು ಕೇವಲ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸುವ ವೇದಿಕೆಯಷ್ಟೇ ಅಲ್ಲ, ಅವುಗಳಿಗೆ ಆದಷ್ಟು ಶೀಘ್ರದಲ್ಲಿ ಪರಿಹಾರ ಒದಗಿಸುವ ವ್ಯವಸ್ಥೆಯಾಗಿದೆ. ಇದರಿಂದ ಜನರಲ್ಲಿ ಆಡಳಿತದ ಮೇಲಿನ ವಿಶ್ವಾಸ ಹೆಚ್ಚಲಿದೆ ಎಂದು ವಸತಿ, ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಝಮೀರ್ ಅಹ್ಮದ್ ಖಾನ್ ಹೇಳಿದರು.
ಶನಿವಾರ, ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿಯಿಂದ ಆಯೋಜಿಸಲಾದ ‘ಜನಸ್ಪಂದನಾ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಈ ವೇಳೆ ಸಾರ್ವಜನಿಕರಿಂದ ಸಲ್ಲಿಸಲಾದ ಅಹವಾಲುಗಳನ್ನು ಐಪಿಜಿಆರ್‌ಎಸ್ ತಂತ್ರಾಂಶದಲ್ಲಿ ದಾಖಲಿಸಿ, ಅರ್ಜಿದಾರರಿಗೆ ಮೊಬೈಲ್ ಮೂಲಕ ತಕ್ಷಣ ಮಾಹಿತಿ ನೀಡುವ ವ್ಯವಸ್ಥೆ ಕಲ್ಪಿಸಲಾಗಿದೆ. ಕೆಲ ಅರ್ಜಿಗಳನ್ನು ಸ್ಥಳದಲ್ಲಿಯೇ ಪರಿಹರಿಸಲಾಯಿತು.
ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ನಾಗರಿಕರು ಇಲಾಖೆಗಳ ಕೌಂಟರ್‌ಗಳಲ್ಲಿ ಹಾಗೂ ನೇರವಾಗಿ ಸಚಿವರು ಮತ್ತು ಜಿಲ್ಲಾಧಿಕಾರಿಗಳಿಗೆ ಅರ್ಜಿಗಳನ್ನು ಸಲ್ಲಿಸಿದರು. ಒಟ್ಟು 105 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, 25 ಅರ್ಜಿಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸಲಾಯಿತು.
ಕಂದಾಯ, ಆಹಾರ ಮತ್ತು ನಾಗರಿಕ ಸರಬರಾಜು, ಕೃಷಿ, ತೋಟಗಾರಿಕೆ, ಅಬಕಾರಿ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಜೆಸ್ಕಾಂ, ಸಾರಿಗೆ, ಆರೋಗ್ಯ, ಕಾರ್ಮಿಕ, ಸಾರ್ವಜನಿಕ ಶಿಕ್ಷಣ, ಅಂಗವಿಕಲ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ, ರೇಷ್ಮೆ ಹಾಗೂ ಸ್ಥಳೀಯ ಸಂಸ್ಥೆಗಳ ಕೌಂಟರ್‌ಗಳು ತೆರೆಯಲ್ಪಟ್ಟಿದ್ದವು. ಇಲಾಖಾವಾರು ಸಿಬ್ಬಂದಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ, ಕಂಪ್ಯೂಟರ್‌ನಲ್ಲಿ ದಾಖಲಿಸಿ, ಸ್ವೀಕೃತಿ ರಶೀದಿ ನೀಡಿದರು.
ಕಾರ್ಯಕ್ರಮದಲ್ಲಿ ಕೂಡ್ಲಿಗಿ ಶಾಸಕರಾದ ಡಾ.ಎನ್.ಟಿ.ಶ್ರೀನಿವಾಸ್, ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನೋಂಗ್ಜಾಯ್ ಮೊಹಮ್ಮದ್ ಅಲಿ ಅಕ್ರಂ ಷಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಟಿ. ಮಂಜುನಾಥ, ಸಹಾಯಕ ಆಯುಕ್ತರು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.







