ವಿಜಯನಗರ | ದೇಶದ ರಕ್ಷಣೆಯಲ್ಲಿ ಪೊಲೀಸರ ಸೇವೆ ಅವಿಸ್ಮರಣೀಯ: ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ

ವಿಜಯನಗರ (ಹೊಸಪೇಟೆ): ನಮ್ಮ ದೇಶದ ರಕ್ಷಣೆಯಲ್ಲಿ ಸೈನಿಕರು ಮತ್ತು ಪೊಲೀಸರ ಸೇವೆ ಅವಿಸ್ಮರಣೀಯವಾಗಿದ್ದು, ಅವರ ತ್ಯಾಗ ಮತ್ತು ಸಮರ್ಪಣೆ ಸದಾ ಸ್ಮರಣೀಯವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು.
ಜಿಲ್ಲಾ ಪೊಲೀಸ್ ಕಾರ್ಯಾಲಯದ ಆವರಣದಲ್ಲಿ ನಡೆದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಪೊಲೀಸರು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು, ನಾಗರಿಕರ ಸುರಕ್ಷತೆಗಾಗಿ ತಮ್ಮ ಜೀವವನ್ನು ಪಣಕ್ಕಿಟ್ಟು ಕೆಲಸ ಮಾಡುತ್ತಾರೆ. ಸೈನಿಕರು ಗಡಿಯಲ್ಲಿ ದೇಶವನ್ನು ರಕ್ಷಿಸಿದರೆ, ಪೊಲೀಸರು ಜನರ ಮಧ್ಯೆಯೇ ನಿಂತು ಸಮಾಜವನ್ನು ರಕ್ಷಿಸುತ್ತಾರೆ ಎಂದು ಹೇಳಿದರು.
ಪೊಲೀಸರು ಪ್ರವಾಹ, ಭಯೋತ್ಪಾದನೆ ಸೇರಿದಂತೆ ಅನೇಕ ಆಪತ್ತು ಸಂದರ್ಭಗಳಲ್ಲಿ ತಮ್ಮ ಜೀವದ ಹಂಗು ತೊರೆದು ಕಾರ್ಯನಿರ್ವಹಿಸುತ್ತಾರೆ. ಅವರ ಧೈರ್ಯ, ಶೌರ್ಯ ಮತ್ತು ಸಮರ್ಪಣೆಗೆ ನಾವು ಸದಾ ಕೃತಜ್ಞರಾಗಿರಬೇಕು. ಹುತಾತ್ಮರ ಕುಟುಂಬಗಳಿಗೆ ಆತ್ಮಸ್ಥೈರ್ಯ ತುಂಬುವುದು, ಅವರಿಗೆ ಬೆಂಬಲವಾಗಿ ನಿಲ್ಲುವುದು ನಮ್ಮ ಎಲ್ಲರ ಕರ್ತವ್ಯ ಎಂದು ಅಭಿಪ್ರಾಯಪಟ್ಟರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ ಮಾತನಾಡಿ, ಪೊಲೀಸ್ ಹುತಾತ್ಮರ ದಿನವನ್ನು ಪ್ರತಿ ವರ್ಷ ಅಕ್ಟೋಬರ್ 21 ರಂದು ಆಚರಿಸಲಾಗುತ್ತದೆ. 1959ರಲ್ಲಿ ಲಡಾಖ್‌ನ ಹಾಟ್ಸ್‌ಪ್ರಿಂಗ್‌ನಲ್ಲಿ ನಡೆದ ಭಾರತ–ಚೀನಾ ಘರ್ಷಣೆಯಲ್ಲಿ ಸಿಆರ್‌ಪಿಎಫ್‌ನ ಹತ್ತು ಮಂದಿ ಜವಾನರು ವೀರಮರಣವನ್ನಪ್ಪಿದ ಸ್ಮರಣಾರ್ಥವಾಗಿ ಈ ದಿನವನ್ನು ಆಚರಿಸಲಾಗುತ್ತದೆ. ಕಳೆದ ಒಂದು ವರ್ಷದಲ್ಲಿ ದೇಶದಾದ್ಯಂತ 191 ಮಂದಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಕರ್ತವ್ಯದಲ್ಲಿ ಹುತಾತ್ಮರಾಗಿದ್ದಾರೆ. ಅವರಲ್ಲಿ ಕರ್ನಾಟಕದ ಎಂಟು ಮಂದಿ ಸಹ ಸೇರಿದ್ದಾರೆ ಎಂದು ವಿವರಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ, ಡಿ.ವೈ.ಎಸ್.ಪಿ.ಗಳು, ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಹಲವು ಗಣ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಆರಂಭದಲ್ಲಿ ಜಿಲ್ಲಾಧಿಕಾರಿ, ಪೊಲೀಸ್ ಅಧಿಕಾರಿಗಳು ಹಾಗೂ ಗಣ್ಯರು ಪೊಲೀಸ್ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು. ಹುತಾತ್ಮರಿಗೆ ಗೌರವ ಸಲ್ಲಿಸುವ ಸಲುವಾಗಿ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಮತ್ತು ಮೌನಾಚರಣೆ ನಡೆಸಲಾಯಿತು.







