ವಿಜಯನಗರ| ಡಿ.21ರಿಂದ ಪೋಲಿಯೋ ಲಸಿಕಾ ಕಾರ್ಯಕ್ರಮ: ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ

ವಿಜಯನಗರ: ಜಿಲ್ಲೆಯಾದ್ಯಂತ ಡಿ.21 ರಿಂದ 24ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಐದು ವರ್ಷದೊಳಗಿನ ಯಾವುದೇ ಮಗುವು ಲಸಿಕೆಯಿಂದ ವಂಚಿತವಾಗದಂತೆ ನಿಗಾ ವಹಿಸಬೇಕೆಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಏರ್ಪಡಿಸಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಪೂರ್ವ ಸಿದ್ದತಾ ಸಭೆ, ಡಿಟಿಎಫ್‌ಐ ದಡಾರ ಮತ್ತು ರುಬೆಲ್ಲಾ ನಿರ್ಮೂಲನ ಕಾರ್ಯಕ್ರಮದ ಅಂತರ ಇಲಾಖಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕವಿತಾ ಎಸ್.ಮನ್ನಿಕೇರಿ, ಪೊಲೀಯೋ ಮುಕ್ತ ಭಾರತ ನಿರ್ಮಾಣಕ್ಕೆ ಸರ್ಕಾರಗಳು ಹೆಚ್ಚಿನ ಉತ್ತೇಜನ ನೀಡಿದ ಹಿನ್ನಲೆಯಲ್ಲಿ ಸದ್ಯಕ್ಕೆ ದೇಶದಲ್ಲಿ ಪೋಲಿಯೋ ಪ್ರಕರಣಗಳು ದಾಖಲಾಗದಿರುವುದು ಹೆಮ್ಮೆಯ ವಿಷಯ. ಅದರೂ ನೆರೆಯ ದೇಶಗಳಲ್ಲಿ ಪೊಲೀಯೋ ಹಾವಳಿ ಇರುವುದರಿಂದ ನಮ್ಮಲ್ಲಿ ನಿರ್ಲಕ್ಷ್ಯ ಸಲ್ಲದು. ವಿವಿಧ ಇಲಾಖೆಗಳ ಸಹಕಾರ ತೆಗೆದುಕೊಂಡು ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದ ಬಗ್ಗೆ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಲಸಿಕೆಯ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಶಂಕರ್ ನಾಯ್ಕ್ ಎಲ್.ಆರ್ ಮಾತನಾಡಿ, ಜಿಲ್ಲೆಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ 5 ವರ್ಷದೊಳಗಿನ ಮಕ್ಕಳ ಸಂಖ್ಯೆ 1,21,585 ಇದ್ದು, ಜಿಲ್ಲೆಯಲ್ಲಿ ಒಟ್ಟು 1040 ಕೇಂದ್ರಗಳಲ್ಲಿ ಲಸಿಕೆ ಹಾಕಲಾಗುತ್ತದೆ. ಒಟ್ಟು 923 ತಂಡಗಳನ್ನು ರಚಿಸಲಾಗಿದೆ. 4 ಮೊಬೈಲ್ ತಂಡಗಳು ಹಾಗೂ ಬಸ್ ನಿಲ್ದಾಣ, ರೈಲ್ವೇ ಸ್ಟೆಷನ್ ಮತ್ತು ಪ್ರಮುಖ ವೃತ್ತಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ 50 ಟ್ರಾನ್ಸಿಟ್ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ. 2170 ಲಸಿಕಾ ಕಾರ್ಯಕರ್ತರನ್ನು ನಿಯೋಜನೆ ಮಾಡಲಾಗಿದೆ. ಮೊದಲ ದಿನ ಬೂತ್ ಮಟ್ಟದಲ್ಲಿ ನಂತರ ಮೂರು ದಿನಗಳ ಕಾಲ ಮನೆ ಮನೆಗೆ ಭೇಟಿ ನೀಡಿ ಲಸಿಕೆ ಹಾಕಲಾಗುತ್ತದೆ ಎಂದು ಹೇಳಿದರು.







