ವಿಜಯನಗರ | ಎಸೆಸೆಲ್ಸಿ ಪರೀಕ್ಷೆ; ಅಕ್ರಮಗಳಿಗೆ ಅವಕಾಶ ಕೊಡದೆ ಸುಗಮವಾಗಿ ನಡೆಸಿ : ಡಿಸಿ ಕವಿತಾ ಮನ್ನಿಕೇರಿ

ವಿಜಯನಗರ (ಹೊಸಪೇಟೆ) ಮಾ.07: ಇದೇ ಮಾರ್ಚ್ 18ರಿಂದ ಏಪ್ರಿಲ್ 2ರವರೆಗೆ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ–1 ನಡೆಯಲಿದ್ದು, ಪರೀಕ್ಷೆ ವೇಳೆ ಯಾವುದೇ ಅಕ್ರಮಗಳಿಗೆ ಅವಕಾಶ ಕೊಡದೆ ಪಾರದರ್ಶಕವಾಗಿ ಹಾಗೂ ಸುಗಮವಾಗಿ ನಡೆಸಲು ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸೂಚಿಸಿದರು.
ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾದ ಎಸೆಸೆಲ್ಸಿ ಪರೀಕ್ಷೆ–1ರ ಪೂರ್ವ ಸಿದ್ಧತಾ ಸಭೆಗೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ಕೇಂದ್ರದಲ್ಲಿ 16, ತಾಲ್ಲೂಕು ಕೇಂದ್ರಗಳಲ್ಲಿ 15, ಹೋಬಳಿ ಮಟ್ಟದಲ್ಲಿ 14 ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 28 ಕೇಂದ್ರಗಳನ್ನು ಸೇರಿಸಿ ಒಟ್ಟು 73 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ವರ್ಷ ಜಿಲ್ಲೆಯಲ್ಲಿ ಒಟ್ಟು 22,041 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.
ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಅವಧಿಯೊಳಗೆ ಪ್ರಶ್ನೆ ಪತ್ರಿಕೆಗಳನ್ನು ರವಾನಿಸಬೇಕು. ವಿದ್ಯಾರ್ಥಿಗಳಿಗೆ ಪೂರಕವಾದ ವಾತಾವರಣ ಕಲ್ಪಿಸಿ, ಕೊಠಡಿಗಳು, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ಆರೋಗ್ಯ ಇಲಾಖೆ ವತಿಯಿಂದ ಪ್ರಥಮ ಚಿಕಿತ್ಸಾ ಕಿಟ್‌ನೊಂದಿಗೆ ಸಿಬ್ಬಂದಿಯನ್ನು ನಿಯೋಜಿಸಬೇಕು. ಪರೀಕ್ಷೆಯ ಸಮಯದಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಜೆಸ್ಕಾಂ ಇಲಾಖೆ ಎಚ್ಚರವಹಿಸಬೇಕು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಹೆಚ್ಚುವರಿ ಬಸ್ ಸೇವೆ ಕಲ್ಪಿಸಬೇಕು ಎಂದು ಅವರು ಹೇಳಿದರು.
ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಲಾಗಿದ್ದು, ಪರೀಕ್ಷಾ ಪ್ರಕ್ರಿಯೆಯನ್ನು ಜಿಲ್ಲಾ ಪಂಚಾಯತ್ ಕೆಸ್ವಾನ್ ಕೇಂದ್ರದಿಂದ ವೆಬ್ ಕಾಸ್ಟಿಂಗ್ ಮೂಲಕ ತಂಡದೊಂದಿಗೆ ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುವುದು ಎಂದು ತಿಳಿಸಿದರು.
ಪ್ರಶ್ನೆ ಪತ್ರಿಕೆಗಳನ್ನು ಜಿಲ್ಲಾ ಮತ್ತು ತಾಲ್ಲೂಕು ಖಜಾನೆಗಳಲ್ಲಿ ಪೊಲೀಸ್ ಭದ್ರತೆಯೊಂದಿಗೆ ರವಾನಿಸಬೇಕು. ಪರೀಕ್ಷೆ ಮುಗಿದ ನಂತರ ಪ್ರತಿದಿನ ಉತ್ತರ ಪತ್ರಿಕೆಗಳನ್ನು ಜಿಲ್ಲಾ ಕೇಂದ್ರದ ಭದ್ರತಾ ಕೊಠಡಿಯಲ್ಲಿ ಸುರಕ್ಷಿತವಾಗಿ ಸಂಗ್ರಹಿಸಬೇಕು ಎಂದು ಸೂಚಿಸಿದರು. ಅಧಿಕಾರಿಗಳಿಗೆ ಪರೀಕ್ಷೆ ನಡೆಸುವ ಅನುಭವ ಇದ್ದರೂ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಿ ಜಿಲ್ಲೆಗೆ ಕೀರ್ತಿ ತರುವಂತೆ ಅವರು ಸಲಹೆ ನೀಡಿದರು.
ಜಿಲ್ಲಾ ಪಂಚಾಯತ್ ಸಿಇಓ ನೋಂಗ್ಜಾಯ್ ಮಹ್ಮದ್ ಅಲಿ ಅಕ್ರಂ ಷಾ ಮಾತನಾಡಿ, ಕಲಿಕೆಯಲ್ಲಿ ಹಿಂದುಳಿದಿರುವ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ ಹೆಚ್ಚಿನ ಅಂಕ ಗಳಿಸಲು ಪ್ರೋತ್ಸಾಹಿಸಬೇಕು. ಈ ಮೂಲಕ ಫಲಿತಾಂಶವನ್ನು ಹೆಚ್ಚಿಸಲು ಅಧಿಕಾರಿಗಳು ಶ್ರಮಿಸಬೇಕು ಎಂದು ಹೇಳಿದರು.
ಪರೀಕ್ಷಾ ವೇಳೆ ಯಾವುದೇ ರೀತಿಯ ಸಮಸ್ಯೆ ಅಥವಾ ಗೊಂದಲ ಉಂಟಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಅಥವಾ ಮೇಲಾಧಿಕಾರಿಗಳನ್ನು ಸಂಪರ್ಕಿಸಿ ಪರಿಹಾರ ಕಂಡುಕೊಳ್ಳಬಹುದು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ, ಡಿಡಿಪಿಐ ವೆಂಕಟೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಶೇಖರಪ್ಪ ಹೊರಪೇಟೆ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.







