ವಿಜಯನಗರ | ವಾರ್ತಾಭಾರತಿ ವರದಿ ಫಲಶ್ರುತಿ : ಬೇಸಿಗೆ ನೀರಿನ ಸಂಕಷ್ಟಕ್ಕೆ ಮುನ್ನೆಚ್ಚರಿಕೆ ; 24/7 ಸಹಾಯವಾಣಿ ಆರಂಭ

ವಿಜಯನಗರ (ಹೊಸಪೇಟೆ) : ಬೇಸಿಗೆ ಆರಂಭವಾಗಿರುವುದರಿಂದ ಜಿಲ್ಲೆಯಾದ್ಯಂತ ಸಾರ್ವಜನಿಕರಿಗೆ, ವಿಶೇಷವಾಗಿ ಗ್ರಾಮೀಣ ಭಾಗದ ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನೋಂಗ್ಜಾಯ್ ಮಹ್ಮದ್ ಅಲಿ ಅಕ್ರಮ್ ಷಾ ಸೂಚಿಸಿದರು.
ಅಂತರ್ಜಲ ಮಟ್ಟ ಕುಸಿದಿರುವ ಹಳ್ಳಿಗಳನ್ನು ಗುರುತಿಸಿ, ಅಲ್ಲಿ ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆಗೆ ಪಡೆದು ಅಥವಾ ಟ್ಯಾಂಕರ್ ಮೂಲಕ ನೀರು ಪೂರೈಸುವಂತೆ ಹಾಗೂ ದುರಸ್ತಿಗೆ ಬಂದ ಕೈಪಂಪುಗಳನ್ನು ತಕ್ಷಣ ಸರಿಪಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಇದೇ ವೇಳೆ, ಮಾ.24ರಂದು “ತೀವ್ರಗೊಳ್ಳುತ್ತಿರುವ ನೀರಿನ ಸಂಕಷ್ಟ: 183 ಹಳ್ಳಿಗಳಲ್ಲಿ ಜೀವಜಲಕ್ಕಾಗಿ ಹಾಹಾಕಾರ” ಎಂಬ ವಾರ್ತಾಭಾರತಿ ಬೈಲೈನ್ ವರದಿ ಪ್ರಕಟವಾಗಿರುವುದನ್ನೂ ಅವರು ಉಲ್ಲೇಖಿಸಿದರು.
ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸ್ಥಾಪಿಸಲಾದ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸುಸ್ಥಿತಿಯಲ್ಲಿ ಇರಿಸಬೇಕು. ತಾಂತ್ರಿಕ ದೋಷದಿಂದ ಸ್ಥಗಿತಗೊಂಡ ಘಟಕಗಳ ಸ್ಥಿತಿಗತಿ ಪರಿಶೀಲಿಸಿ ವರದಿ ನೀಡಬೇಕು. ದುರಸ್ತಿ ಅಗತ್ಯವಿರುವ ಘಟಕಗಳನ್ನು ತಕ್ಷಣ ಸರಿಪಡಿಸಿ ಜನರಿಗೆ ಶುದ್ಧ ನೀರು ಒದಗಿಸಬೇಕು ಎಂದು ಸೂಚಿಸಿದರು.
ಮಳೆಗಾಲ ಸಮೀಪಿಸುತ್ತಿರುವುದರಿಂದ ಸಾಂಕ್ರಾಮಿಕ ರೋಗಗಳ ಹರಡುವಿಕೆ ಸಾಧ್ಯತೆ ಹೆಚ್ಚಿರುವ ಹಿನ್ನೆಲೆ, ನೀರಿನ ಮೂಲಗಳ ಸ್ವಚ್ಛತೆ ಮತ್ತು ಶುಚಿತ್ವ ಕಾಪಾಡಿಕೊಳ್ಳಬೇಕು. ಗ್ರಾಮ ಮಟ್ಟದಲ್ಲಿ ನೀರಿನ ಗುಣಮಟ್ಟ ಪರೀಕ್ಷೆಗೆ ನೀಡಿರುವ ಫೀಲ್ಡ್ ಟೆಸ್ಟ್ ಕಿಟ್ ಬಳಸಿ ನಿಯಮಿತವಾಗಿ ಪರೀಕ್ಷೆ ನಡೆಸಿ ದಾಖಲೆ ನಿರ್ವಹಣೆ ಮಾಡಬೇಕು. ಕರ್ತವ್ಯ ಲೋಪ ಎಸಗುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಸಹಾಯವಾಣಿ ಆರಂಭ :
ಜಿಲ್ಲೆಯ 6 ತಾಲ್ಲೂಕುಗಳಲ್ಲಿ ನೀರಿನ ಸಮಸ್ಯೆ ಎದುರಾದಲ್ಲಿ ತಕ್ಷಣ ಪರಿಹಾರ ಕಲ್ಪಿಸಲು ಜಿಲ್ಲಾ ಪಂಚಾಯಿತಿಯಲ್ಲಿ 24/7 ಕಂಟ್ರೋಲ್ ರೂಮ್ ತೆರೆಯಲಾಗಿದೆ. ಸಾರ್ವಜನಿಕರು ನೀರಿನ ಸಮಸ್ಯೆ ಕುರಿತು ದೂರು ಸಲ್ಲಿಸಲು ದೂರವಾಣಿ ಸಂಖ್ಯೆ 9480837823ಕ್ಕೆ ಕರೆ ಮಾಡಬಹುದು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕೆ. ತಿಮ್ಮಪ್ಪ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಎಸ್. ದೀಪಾ, ಡಿಡಿಪಿಐ ವೆಂಕಟೇಶ್ ರಾಮಚಂದ್ರಪ್ಪ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.






