Vijayanagara | ಎಸ್‌ಸಿಪಿ-ಟಿಎಸ್‌ಪಿ ಯೋಜನೆಗಳು ಅರ್ಹ ಶೋಷಿತ ವರ್ಗದ ಫಲಾನುಭವಿಗಳಿಗೆ ತಲುಪಲಿ : ಡಾ.ಎಲ್.ಮೂರ್ತಿ

ಹೊಸಪೇಟೆ (ವಿಜಯನಗರ) : ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆ ಅನುದಾನ ಮತ್ತು ಯೋಜನೆಗಳು ಯಾವುದೇ ಕಾರಣಕ್ಕೂ ದುರುಪಯೋಗವಾಗಬಾರದು ಎಂದು ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು ಆಯೋಗದ ಅಧ್ಯಕ್ಷ ಡಾ. ಎಲ್. ಮೂರ್ತಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆದ ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸಮಾಜದ ಅತ್ಯಂತ ಹಿಂದುಳಿದ ಹಾಗೂ ಶೋಷಿತ ವರ್ಗದ ಕಟ್ಟಕಡೆಯ ಫಲಾನುಭವಿಗೂ ಯೋಜನೆಗಳ ಸೌಲಭ್ಯ ತಲುಪುವಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಹೇಳಿದರು.
ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳ ಸಾಂವಿಧಾನಿಕ ಹಕ್ಕುಗಳಿಗೆ ಧಕ್ಕೆ ತರುವುದನ್ನು ಸಹಿಸಲಾಗುವುದಿಲ್ಲ. ಯೋಜನೆಗಳ ಅನುಷ್ಠಾನದಲ್ಲಿ ವಿಳಂಬ ಅಥವಾ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಯೋಜನೆಗಳು ಕಾಗದದ ಲೆಕ್ಕಗಳಿಗೆ ಸೀಮಿತವಾಗದೇ, ಶೋಷಿತರ ಬದುಕಿನಲ್ಲಿ ಬದಲಾವಣೆ ತರಬೇಕು. ಮಧ್ಯವರ್ತಿಗಳ ಹಾವಳಿಯನ್ನು ತಡೆದು ನಿಜವಾದ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸುವತ್ತ ಅಧಿಕಾರಿಗಳು ಗಮನಹರಿಸಬೇಕು ಎಂದು ಸೂಚಿಸಿದರು.
ಇಲಾಖೆಗಳ ಟೆಂಡರ್ ಹಾಗೂ ಕಾಮಗಾರಿಗಳಲ್ಲಿ ಸ್ಥಳೀಯ ಶೋಷಿತ ವರ್ಗದ ಕಾರ್ಮಿಕರಿಗೆ ಮೊದಲ ಆದ್ಯತೆ ನೀಡಬೇಕು. ಇದರಿಂದ ಸಮಾಜದ ಆರ್ಥಿಕ ಹಾಗೂ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗಲಿದೆ ಎಂದರು.
ಸಭೆಯಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಪ್ರತಿಕ್ರಿಯಿಸಿ, ಕೂಡ್ಲಿಗಿ ತಾಲೂಕಿನ ಗೋವಿಂದಗಿರಿ ತಾಂಡಾದ ಸಮಗ್ರ ಅಭಿವೃದ್ಧಿಗಾಗಿ ವಿವಿಧ ಯೋಜನೆಗಳಡಿ 3.5 ಕೋಟಿ ರೂ. ಪ್ಯಾಕೇಜ್ ಮಂಜೂರಾಗಿದ್ದು, ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಕಾಮಗಾರಿ ಗುತ್ತಿಗೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಜನವಸತಿ ಪ್ರದೇಶಗಳಿಂದ ಕನಿಷ್ಠ 500 ಮೀಟರ್ ದೂರದಲ್ಲಿರಬೇಕಾದ ವಿಂಡ್ ಮಿಲ್‌ಗಳು ನಿಯಮಬಾಹಿರವಾಗಿ 70 ರಿಂದ 100 ಮೀಟರ್ ಅಂತರದಲ್ಲಿ ನಿರ್ಮಾಣವಾಗಿರುವ ಬಗ್ಗೆ ದೂರುಗಳು ಬಂದಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸಬೇಕು ಎಂದು ಡಾ. ಮೂರ್ತಿ ಸೂಚಿಸಿದರು.
ಎಸ್‌ಸಿ, ಎಸ್‌ಟಿ ಸಮುದಾಯಗಳ ಪಟ್ಟಾ ಜಮೀನು ಮತ್ತು ಮಂಜೂರಾತಿ ಭೂಮಿಗಳನ್ನು ಬಲವಂತವಾಗಿ ಕಬಳಿಸಲಾಗುತ್ತಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ರಿಯಲ್ ಎಸ್ಟೇಟ್ ಮಾಫಿಯಾ ವಿರುದ್ಧ ದೌರ್ಜನ್ಯ ತಡೆ ಕಾಯ್ದೆಯಡಿ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.
ಹೊಸಪೇಟೆಯ 253 ಪೌರಕಾರ್ಮಿಕರಿಗೆ ಸಕಾಲದಲ್ಲಿ ವೇತನ ಪಾವತಿಸಲಾಗುತ್ತಿದ್ದು, ಇಎಸ್‌ಐ, ಪಿಎಫ್ ಹಾಗೂ ಗೃಹಭಾಗ್ಯ ಯೋಜನೆಯಡಿ 88 ಮನೆಗಳನ್ನು ವಿತರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಆದರೆ ಮರಿಯಮ್ಮನಹಳ್ಳಿಯಲ್ಲಿ 11 ತಿಂಗಳ ವೇತನ ಬಾಕಿ ಉಳಿಸಿಕೊಂಡಿರುವುದಕ್ಕೆ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಡಾ. ಮೂರ್ತಿ, ತಕ್ಷಣವೇ ವೇತನ ಬಿಡುಗಡೆ ಮಾಡಲು ಸೂಚಿಸಿದರು.
ಜಿಂದಾಲ್ ಸೇರಿದಂತೆ ಜಿಲ್ಲೆಯ ಪ್ರಮುಖ ಖಾಸಗಿ ಕಂಪನಿಗಳಲ್ಲಿ ಭೂಮಿ ಕಳೆದುಕೊಂಡ ಸ್ಥಳೀಯ ಶೋಷಿತ ವರ್ಗದ 200-300 ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಲು ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಜಂಟಿಯಾಗಿ ವಿಶೇಷ ಉದ್ಯೋಗ ಮೇಳ ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯತ್ ಸಿಇಒ ಅವರಿಗೆ ಸೂಚಿಸಿದರು.
ಮೊರಾರ್ಜಿ ಹಾಗೂ ಸರ್ಕಾರಿ ವಸತಿ ಶಾಲೆಗಳಿಗೆ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರವೇಶಾವಕಾಶ ಕಲ್ಪಿಸುವಂತೆ ಹಾಗೂ ಸಣ್ಣ ಲೋಪದೋಷಗಳ ಕಾರಣದಿಂದ ಪ್ರವೇಶ ನಿರಾಕರಿಸಬಾರದು ಎಂದು ತಿಳಿಸಿದರು.
ಅರಣ್ಯ ಪ್ರದೇಶಗಳಲ್ಲಿ ವಾಸಿಸುವ ಅಲೆಮಾರಿ ಹಾಗೂ ಅರೆ ಅಲೆಮಾರಿ ಎಸ್‌ಸಿ-ಎಸ್‌ಟಿ ಕುಟುಂಬಗಳನ್ನು ಸುಪ್ರೀಂ ಕೋರ್ಟ್ ಅಂತಿಮ ಆದೇಶ ಬರುವವರೆಗೆ ತೆರವುಗೊಳಿಸದಂತೆ ಅರಣ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ವೇಳೆ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಪ್ರತಿಕ್ರಿಯಿಸಿ, ಆಯೋಗ ಸೂಚಿಸಿದ ಎಲ್ಲಾ ಯೋಜನೆಗಳನ್ನು ಶೇ.100ರಷ್ಟು ಅನುಷ್ಠಾನಗೊಳಿಸಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸೌಲಭ್ಯ ತಲುಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.
ಸಭೆಯಲ್ಲಿ ಆಯೋಗದ ಕಾರ್ಯದರ್ಶಿ ಡಾ.ಹೆಚ್.ಎಸ್.ಶಿವರಾಮ್, ಸದಸ್ಯರಾ ಗೀತಾ ಥಾವಂಶಿ, ಎನ್.ದಿನಕರ್, ಸುನೀಲ್ ಎಂ ಉಕ್ಕಲಿ, ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ, ಜಿಲ್ಲಾ ಪಂಚಾಯತ್ ಸಿ ಇ ಓ ನೊಂಗ್ಜಾಯ್ ಮಹ್ಮದ್ ಅಲಿ ಅಕ್ರಮ್ ಷಾ, ಅರಣ್ಯ ಇಲಾಖೆ ಉಪ ಸಂರಕ್ಷಣಾಧಿಕಾರಿ ಅನುಪಮ ಸೇರಿದಂತೆ ವಿವಿಧ ಇಲಾಖೆಯ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.






