Vijayanagara | ಸ್ವಚ್ಛತೆ ಪ್ರತಿಯೊಬ್ಬರ ವೈಯಕ್ತಿಕ, ಸಾಮಾಜಿಕ ಜವಾಬ್ದಾರಿ: ಎಂ. ಉಮೇಶ್

ವಿಜಯನಗರ (ಹೊಸಪೇಟೆ) : ಸ್ವಚ್ಛತಾ ಹಿ ಸೇವಾ–2026 ಅಭಿಯಾನದ ಅಂಗವಾಗಿ ಹೊಸಪೇಟೆ ತಾಲೂಕು ಪಂಚಾಯಿತಿ ವ್ಯಾಪ್ತಿಯ ಮಲಪನಗುಡಿ ಗ್ರಾಮ ಪಂಚಾಯಿತಿಯ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಐತಿಹಾಸಿಕ ದೇವಸ್ಥಾನ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ “ಏಕ್ ದಿನ್, ಏಕ್ ಘಂಟಾ, ಏಕ್ ಸಾಥ್” ಕಾರ್ಯಕ್ರಮದಡಿ ಸ್ವಚ್ಛತಾ ಶ್ರಮದಾನ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯಿತಿಯ ಸಹಾಯಕ ಯೋಜನಾಧಿಕಾರಿ ಎಂ. ಉಮೇಶ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಸ್ವಚ್ಛತೆ ಪ್ರತಿಯೊಬ್ಬ ನಾಗರಿಕನ ವೈಯಕ್ತಿಕ ಹಾಗೂ ಸಾಮಾಜಿಕ ಜವಾಬ್ದಾರಿಯಾಗಿದ್ದು, ಸ್ವಚ್ಛತೆಯನ್ನು ದೈನಂದಿನ ಜೀವನದ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಳ್ಳಬೇಕು ಎಂದರು.
ಸ್ವಚ್ಛತೆ ಒಂದು ದಿನದ ಕಾರ್ಯಕ್ರಮಕ್ಕೆ ಸೀಮಿತವಾಗಬಾರದು. ಮನೆ, ಶಾಲೆ, ದೇವಸ್ಥಾನ ಹಾಗೂ ಸಾರ್ವಜನಿಕ ಸ್ಥಳಗಳ ಸ್ವಚ್ಛತೆಯನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ. ಸಾರ್ವಜನಿಕರ ಸಕ್ರಿಯ ಸಹಭಾಗಿತ್ವದಿಂದ ಮಾತ್ರ ಸ್ವಚ್ಛ ಹಾಗೂ ಆರೋಗ್ಯಕರ ಗ್ರಾಮಗಳ ನಿರ್ಮಾಣ ಸಾಧ್ಯ ಎಂದು ಹೇಳಿದರು.
“ಏಕ್ ದಿನ್, ಏಕ್ ಘಂಟಾ, ಏಕ್ ಸಾಥ್” ಕಾರ್ಯಕ್ರಮದ ಮಹತ್ವವನ್ನು ವಿವರಿಸಿದ ಅವರು, ಸಮುದಾಯದ ಎಲ್ಲ ವರ್ಗದ ಜನರನ್ನು ಸ್ವಚ್ಛತಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸುವುದು ಹಾಗೂ ಸ್ವಚ್ಛತೆಯನ್ನು ಜನಾಂದೋಲನವಾಗಿ ರೂಪಿಸುವುದು ಅಭಿಯಾನದ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಂಗವಾಗಿ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಐತಿಹಾಸಿಕ ದೇವಸ್ಥಾನ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಸ್ವಚ್ಛತಾ ಶ್ರಮದಾನ ಕೈಗೊಳ್ಳಲಾಯಿತು. ಸಾರ್ವಜನಿಕ ಸ್ಥಳಗಳ ಸ್ವಚ್ಛತೆ, ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯದಿರುವುದು, ತ್ಯಾಜ್ಯವನ್ನು ಮೂಲದಲ್ಲಿಯೇ ವಿಂಗಡಿಸುವುದು ಹಾಗೂ ಗ್ರಾಮ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಕುರಿತು ಜಾಗೃತಿ ಮೂಡಿಸಲಾಯಿತು.
ಒಂದು ಗಂಟೆಯ ಶ್ರಮದಾನವು ಸ್ವಚ್ಛತೆಯ ಮಹತ್ವವನ್ನು ಸಾರುವ ಸಾಮೂಹಿಕ ಸಂಕಲ್ಪವಾಗಿದೆ. ಪ್ರತಿಯೊಬ್ಬರೂ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಸ್ವಚ್ಛ ಗ್ರಾಮ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂಬ ಸಂದೇಶವನ್ನು ಕಾರ್ಯಕ್ರಮದ ಮೂಲಕ ಸಾರಲಾಯಿತು.
ಜಿಲ್ಲಾ ಪಂಚಾಯಿತಿಯ ಸ್ವಚ್ಛ ಭಾರತ್ ಮಿಷನ್ (ಗ್ರಾ) ಐಇಸಿ ಸಮಾಲೋಚಕ ಹನುಮಂತ ನಾಯಕ ಕಾರ್ಯಕ್ರಮ ನಿರ್ವಹಿಸಿ, ಸ್ವಚ್ಛತಾ ಹಿ ಸೇವಾ–2026 ಅಭಿಯಾನದ ಉದ್ದೇಶ ಹಾಗೂ ಸ್ವಚ್ಛತಾ ಚಟುವಟಿಕೆಗಳಲ್ಲಿ ಸಾರ್ವಜನಿಕರ ಸಹಭಾಗಿತ್ವದ ಮಹತ್ವದ ಕುರಿತು ಮಾಹಿತಿ ನೀಡಿದರು. “ಸ್ವಚ್ಛ ಗ್ರಾಮ, ಆರೋಗ್ಯಕರ ಸಮಾಜ; ಸ್ವಚ್ಛತೆ ನಮ್ಮೆಲ್ಲರ ಜವಾಬ್ದಾರಿ” ಎಂಬ ಆಶಯದೊಂದಿಗೆ ಕಾರ್ಯಕ್ರಮವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಮಲಪನಗುಡಿ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹನುಮಂತಪ್ಪ, ಗ್ರಾಮ ಪಂಚಾಯಿತಿ ಸಿಬ್ಬಂದಿ, ಸ್ವಚ್ಛತಾ ಸಿಬ್ಬಂದಿ, ಜಿಲ್ಲಾ ಪಂಚಾಯಿತಿಯ ಸ್ವಚ್ಛ ಭಾರತ್ ಮಿಷನ್ (ಗ್ರಾ) ಜಿಲ್ಲಾ ಸಮಾಲೋಚಕರು ಹಾಗೂ ಮಲಪನಗುಡಿ ಗ್ರಾಮದ ಸಾರ್ವಜನಿಕರು ಉಪಸ್ಥಿತರಿದ್ದರು.






