Vijayanagara | ತಾಯಿ-ಶಿಶು ಮರಣ ಶೂನ್ಯಕ್ಕೆ ತರಲು ಅಧಿಕಾರಿಗಳಿಗೆ ಡಿಸಿ ಕವಿತಾ ಮನ್ನಿಕೇರಿ ಸೂಚನೆ

ವಿಜಯನಗರ (ಹೊಸಪೇಟೆ): ಗರ್ಭಿಣಿಯರು ಹಾಗೂ ನವಜಾತ ಶಿಶುಗಳ ಆರೋಗ್ಯ ರಕ್ಷಣೆಗೆ ವೈದ್ಯಾಧಿಕಾರಿಗಳು ಮತ್ತು ಆರೋಗ್ಯ ಸಿಬ್ಬಂದಿ ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ತಾಯಿ ಮತ್ತು ಶಿಶು ಮರಣ ಪ್ರಮಾಣವನ್ನು ಶೂನ್ಯಕ್ಕೆ ತರುವ ನಿಟ್ಟಿನಲ್ಲಿ ಎಲ್ಲರೂ ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆರೋಗ್ಯ ಇಲಾಖೆ ಆಯೋಜಿಸಿದ್ದ ತಾಯಿ ಮರಣ ಮತ್ತು ಶಿಶು ಮರಣ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಲ್ಲಿ 9 ತಾಯಿ ಮರಣ ಹಾಗೂ 3 ಶಿಶು ಮರಣ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿ ಎಂದು ಹೇಳಿದರು.
ಆರೋಗ್ಯ ಸೇವೆಯಲ್ಲಿ ಸಣ್ಣ ನಿರ್ಲಕ್ಷ್ಯವೂ ದೊಡ್ಡ ಅನಾಹುತಕ್ಕೆ ಕಾರಣವಾಗಬಹುದು. ರೋಗಿಗಳಿಗೆ ಚಿಕಿತ್ಸೆ ನೀಡುವ ಮುನ್ನ ಔಷಧಗಳ ಗುಣಮಟ್ಟ ಹಾಗೂ ಅವಧಿ ಮುಕ್ತಾಯ (ಎಕ್ಸ್‌ಪೈರಿ) ದಿನಾಂಕವನ್ನು ಕಡ್ಡಾಯವಾಗಿ ಪರಿಶೀಲಿಸಬೇಕು. ಗರ್ಭಿಣಿಯರ ಆರೋಗ್ಯ ಸ್ಥಿತಿಯನ್ನು ತಕ್ಷಣ ಮೌಲ್ಯಮಾಪನ ಮಾಡಿ ಚಿಕಿತ್ಸೆ ಆರಂಭಿಸಬೇಕು. ಸ್ಥಳೀಯ ಮಟ್ಟದಲ್ಲಿ ಚಿಕಿತ್ಸೆ ಸಾಧ್ಯವಾಗದಿದ್ದರೆ ವಿಳಂಬ ಮಾಡದೆ ಉನ್ನತ ಆಸ್ಪತ್ರೆಗೆ ರವಾನಿಸಬೇಕು ಎಂದು ಸೂಚಿಸಿದರು.
ಹೆರಿಗೆಯಂತಹ ಸೂಕ್ಷ್ಮ ಸಂದರ್ಭಗಳಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯಕ್ಕೆ ಅವಕಾಶ ನೀಡಬಾರದು. ಲಭ್ಯವಿರುವ ಆಧುನಿಕ ವೈದ್ಯಕೀಯ ಸೌಲಭ್ಯಗಳನ್ನು ಬಳಸಿಕೊಂಡು ಜೀವ ಉಳಿಸುವ ಕಾರ್ಯಕ್ಕೆ ಆದ್ಯತೆ ನೀಡಬೇಕು ಎಂದು ಹೇಳಿದರು.
ಗರ್ಭಿಣಿಯರು ಸಹ ನಿಯಮಿತ ಆರೋಗ್ಯ ತಪಾಸಣೆ, ಪೌಷ್ಟಿಕ ಆಹಾರ ಸೇವನೆ ಹಾಗೂ ವೈದ್ಯರ ಸಲಹೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಆರೋಗ್ಯ ಸಮಸ್ಯೆಗಳನ್ನು ಮುಚ್ಚಿಡುವುದು ಅಥವಾ ಚಿಕಿತ್ಸೆ ವಿಳಂಬ ಮಾಡುವುದು ಅಪಾಯಕಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಎಚ್ಚರಿಸಿದರು.
ಜಿಲ್ಲೆಯ ಎಲ್ಲ ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳಲ್ಲಿ ಅಗತ್ಯ ಮೂಲಸೌಕರ್ಯ, ಔಷಧ ಮತ್ತು ಆಂಬುಲೆನ್ಸ್ ಸೌಲಭ್ಯಗಳು ಸದಾ ಸಿದ್ಧವಾಗಿರಬೇಕು. ಆಶಾ ಕಾರ್ಯಕರ್ತೆಯರು ಹಾಗೂ ಎಎನ್‌ಎಂಗಳು ಹೈ-ರಿಸ್ಕ್ ಗರ್ಭಿಣಿಯರನ್ನು ಗುರುತಿಸಿ ಸಕಾಲಕ್ಕೆ ಆಸ್ಪತ್ರೆಗೆ ದಾಖಲಿಸುವ ಪ್ರಕ್ರಿಯೆಯನ್ನು ಮತ್ತಷ್ಟು ಚುರುಕುಗೊಳಿಸಬೇಕು ಎಂದು ಸೂಚಿಸಿದರು.
“ಪ್ರತಿಯೊಂದು ಜೀವವೂ ಅಮೂಲ್ಯ. ಸಾರ್ವಜನಿಕರಿಗೆ ಗುಣಮಟ್ಟದ ಹಾಗೂ ಸುರಕ್ಷಿತ ಚಿಕಿತ್ಸೆ ದೊರೆಯಬೇಕು. ಈ ವಿಚಾರದಲ್ಲಿ ಯಾವುದೇ ಲೋಪ ಕಂಡುಬಂದರೆ ಸಂಬಂಧಪಟ್ಟ ವೈದ್ಯಾಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಿ ಶಿಸ್ತು ಕ್ರಮ ಜರುಗಿಸಲಾಗುವುದು” ಎಂದು ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ ಎಚ್ಚರಿಕೆ ನೀಡಿದರು.






