Vijayanagara | ಪರಿಸರ ಸ್ನೇಹಿ ಮಣ್ಣಿನ ಗಣೇಶ ಪ್ರತಿಷ್ಠಾಪನೆಗೆ ಜಿಲ್ಲಾಧಿಕಾರಿ ಮನವಿ
ಪಿಒಪಿ ಗಣೇಶ ವಿಗ್ರಹಗಳಿಗೆ ಸಂಪೂರ್ಣ ನಿಷೇಧ; ಉಲ್ಲಂಘಿಸಿದರೆ ಕಾನೂನು ಕ್ರಮ

ವಿಜಯನಗರ (ಹೊಸಪೇಟೆ), ಸೆ. 9: ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿಒಪಿ) ಹಾಗೂ ರಾಸಾಯನಿಕ ಬಣ್ಣ ಲೇಪಿತ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಪಿಒಪಿ ಹಾಗೂ ರಾಸಾಯನಿಕ ಬಣ್ಣಗಳಿಂದ ತಯಾರಿಸಿದ ವಿಗ್ರಹಗಳನ್ನು ನದಿ, ಕೆರೆ, ಕಾಲುವೆ ಸೇರಿದಂತೆ ಜಲಮೂಲಗಳಲ್ಲಿ ವಿಸರ್ಜಿಸುವುದರಿಂದ ನೀರು ಮಾಲಿನ್ಯಗೊಳ್ಳುತ್ತದೆ. ಇದರಿಂದ ಜಲಚರಗಳ ಜೀವಕ್ಕೆ ಅಪಾಯ ಉಂಟಾಗುವುದಲ್ಲದೆ ಪರಿಸರದ ಮೇಲೂ ದುಷ್ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.
ಆದ್ದರಿಂದ ಸಾರ್ವಜನಿಕರು ಮಣ್ಣು ಹಾಗೂ ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಪರಿಸರ ಸ್ನೇಹಿ, ನೈಸರ್ಗಿಕ ಬಣ್ಣ ಲೇಪಿತ ಗಣೇಶ ವಿಗ್ರಹಗಳನ್ನು ಪ್ರತಿಷ್ಠಾಪಿಸಿ ಪೂಜಿಸಬೇಕು. ವಿಸರ್ಜನೆಯನ್ನು ಸ್ಥಳೀಯ ಆಡಳಿತ ಸಂಸ್ಥೆಗಳು ಗುರುತಿಸಿರುವ ನಿಗದಿತ ಸ್ಥಳಗಳಲ್ಲಿಯೇ ಸಾಮೂಹಿಕವಾಗಿ ನಡೆಸಬೇಕು ಎಂದು ಸೂಚಿಸಿದ್ದಾರೆ.
ಪರವಾನಗಿ ಪಡೆಯದೆ ಪಿಒಪಿ ವಿಗ್ರಹಗಳನ್ನು ಅನಧಿಕೃತವಾಗಿ ತಯಾರಿಸುವುದು ಅಥವಾ ಮಾರಾಟ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.
ಗಣೇಶೋತ್ಸವದ ಸಂದರ್ಭದಲ್ಲಿ ಪರಿಸರಕ್ಕೆ ಹಾನಿ ಉಂಟು ಮಾಡುವ ಒಮ್ಮೆ ಬಳಸಿ ಬಿಸಾಡುವ ಪ್ಲಾಸ್ಟಿಕ್ ವಸ್ತುಗಳನ್ನು ಬಳಸಬಾರದು. ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ಮುನ್ನ ಸಂಬಂಧಪಟ್ಟ ಸ್ಥಳೀಯ ಆಡಳಿತ ಸಂಸ್ಥೆ ಹಾಗೂ ಪೊಲೀಸ್ ಇಲಾಖೆಯಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಎಂದು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.






