ಎಸ್‌ಐಆರ್ ಪ್ರಕ್ರಿಯೆ ವಿರೋಧಿಸಿ ವಿಜಯನಗರ ಜಿಲ್ಲಾ ಕಾಂಗ್ರೆಸ್‌ನಿಂದ ಪ್ರತಿಭಟನೆ

ಹೊಸಪೇಟೆ/ವಿಜಯನಗರ: ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಎಸ್‌ಐಆರ್ ಪ್ರಕ್ರಿಯೆಯ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ವಿಜಯನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಸೋಮವಾರ ಹೊಸಪೇಟೆ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿರಾಜ್ ಶೇಖ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಭಾಗವಹಿಸಿದರು. ಪ್ರತಿಭಟನಾಕಾರರು ಜ್ಞಾನೇಶ್ ಕುಮಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿರಾಜ್ ಶೇಖ್, ಎಸ್‌ಐಆರ್ ಪ್ರಕ್ರಿಯೆಯ ಮೂಲಕ ದೇಶಾದ್ಯಂತ 13 ಕೋಟಿಗೂ ಹೆಚ್ಚು ಮತದಾರರನ್ನು ಮತದಾರರ ಪಟ್ಟಿಯಿಂದ ಹೊರಗಿಡುವ ಪ್ರಯತ್ನ ನಡೆಯುತ್ತಿದೆ ಎಂದು ಕಾಂಗ್ರೆಸ್ ಆರೋಪಿಸುತ್ತಿದೆ ಎಂದು ಹೇಳಿದರು.
ಕರ್ನಾಟಕದಲ್ಲಿಯೂ ಒಂದು ಕೋಟಿಗೂ ಅಧಿಕ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಹೊರಗಿಡುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ ಅವರು, ಈ ಪ್ರಕ್ರಿಯೆಯಲ್ಲಿ ದಲಿತರು, ಮುಸ್ಲಿಮರು ಹಾಗೂ ಇತರೆ ಅಲ್ಪಸಂಖ್ಯಾತ ಸಮುದಾಯಗಳ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಬಾಧಿತರಾಗುವ ಸಾಧ್ಯತೆಯಿದೆ ಎಂದು ದೂರಿದರು.
ಎಸ್‌ಐಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ಕಾರ್ಯವೈಖರಿಯ ಬಗ್ಗೆ ಪ್ರಶ್ನೆಗಳು ಉದ್ಭವಿಸಿವೆ ಎಂದು ಹೇಳಿದ ಅವರು, ಈ ವಿಚಾರದಲ್ಲಿ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಎಸ್‌ಐಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳ ಕುರಿತು ಇತ್ತೀಚೆಗೆ ಕೆಲವು ಮಾಧ್ಯಮ ವರದಿಗಳು ಪ್ರಕಟವಾಗಿವೆ ಎಂದು ಸಿರಾಜ್ ಶೇಖ್ ಹೇಳಿದರು. ಕೆಲವು ವರದಿಗಳಲ್ಲಿ ಚುನಾವಣಾ ಆಯುಕ್ತರಾದ ಸುಖ್ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ಎಸ್‌ಐಆರ್‌ಗೆ ಸಂಬಂಧಿಸಿದ ಕೆಲವು ನಿರ್ಧಾರಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವುದಾಗಿ ಉಲ್ಲೇಖಿಸಲಾಗಿದೆ ಎಂದು ತಿಳಿಸಿದರು.
ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಮಾತನಾಡಿ, ಮತದಾರರ ಹಕ್ಕುಗಳಿಗೆ ಧಕ್ಕೆಯಾಗುವ ಯಾವುದೇ ಕ್ರಮವನ್ನು ಕಾಂಗ್ರೆಸ್ ವಿರೋಧಿಸುತ್ತದೆ ಎಂದು ಹೇಳಿದರು.
ಎಸ್‌ಐಆರ್ ಪ್ರಕ್ರಿಯೆಯ ಕುರಿತು ಗಂಭೀರ ಅನುಮಾನಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಕಾನೂನು ಕ್ರಮ ಕೈಗೊಂಡು ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದರು.
“ಈ ಹಿಂದೆಯೇ ನಮ್ಮ ನಾಯಕ ರಾಹುಲ್ ಗಾಂಧಿ ‘ವೋಟ್ ಚೋರಿ’ ಕುರಿತು ಧ್ವನಿ ಎತ್ತಿದ್ದರು. ಈಗ ಎಸ್‌ಐಆರ್ ಪ್ರಕ್ರಿಯೆಯ ಬಗ್ಗೆ ಕಾಂಗ್ರೆಸ್ ದೇಶಾದ್ಯಂತ ಹೋರಾಟ ನಡೆಸುತ್ತಿದೆ. ಈ ವಿಷಯದಲ್ಲಿ ಸ್ಪಷ್ಟತೆ ಬರುವವರೆಗೆ ಹೋರಾಟ ಮುಂದುವರಿಯಲಿದೆ,” ಎಂದು ಅವರು ಹೇಳಿದರು.
ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿಯೂ ಎಸ್‌ಐಆರ್ ಪ್ರಕ್ರಿಯೆ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದ ವಿಷಯಗಳ ಕುರಿತು ಜನಜಾಗೃತಿ ಅಭಿಯಾನ ನಡೆಸಲಾಗುವುದು ಎಂದು ತಿಳಿಸಿದರು.
ಪ್ರತಿಭಟನೆಯ ಬಳಿಕ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿ, ಎಸ್‌ಐಆರ್ ಪ್ರಕ್ರಿಯೆಯನ್ನು ಪರಿಶೀಲಿಸಬೇಕು, ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿತು.
ಪ್ರತಿಭಟನೆಯಲ್ಲಿ ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎನ್. ಮಹಮ್ಮದ್ ಇಮಾಮ್ ನಿಯಾಜಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಂಬಗಲ್ ರಾಮಕೃಷ್ಣ, ಸಮಾಜಸೇವಕ ಎನ್.ಟಿ. ತಮ್ಮಣ್ಣ ಸೇರಿದಂತೆ ಜಿಲ್ಲಾ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಮುಂಚೂಣಿ ಘಟಕಗಳ ಪದಾಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.






