ವಿಜಯನಗರ ಜಿಲ್ಲೆಯ ಆರು ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ: ರೈತ ಸಂಘ–ಹಸಿರು ಸೇನೆ ಆಗ್ರಹ

ಹೊಸಪೇಟೆ/ವಿಜಯನಗರ: ಜಿಲ್ಲೆಯ ಹೊಸಪೇಟೆ, ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಹೂವಿನಹಡಗಲಿ, ಕೊಟ್ಟೂರು ಹಾಗೂ ಹರಪನಹಳ್ಳಿ ಸೇರಿದಂತೆ ಜಿಲ್ಲೆಯ ಆರು ತಾಲೂಕುಗಳನ್ನು ತಕ್ಷಣವೇ ಬರಪೀಡಿತ ಪ್ರದೇಶಗಳೆಂದು ಘೋಷಿಸಿ, ಜಂಟಿ ಸಮೀಕ್ಷೆ ನಡೆಸಿ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿಜಯನಗರ ಜಿಲ್ಲಾ ಘಟಕ ಒತ್ತಾಯಿಸಿದೆ.
ಜಿಲ್ಲಾಧಿಕಾರಿಗಳ ಮೂಲಕ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿ ಅವರಿಗೆ ಸಲ್ಲಿಸಿದ ಮನವಿಯಲ್ಲಿ, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಕೇವಲ ಶೇ.30ರಷ್ಟು ಮಾತ್ರ ಬಿತ್ತನೆಯಾಗಿದ್ದು, ಜೂನ್ ಮೊದಲ ವಾರ ಸುರಿದ ಮಳೆಯ ನಂತರ ಜುಲೈ ತಿಂಗಳವರೆಗೆ ಮಳೆಯಾಗದ ಕಾರಣ ರೈತರು ಬಿತ್ತನೆ ಮಾಡಿದ್ದ ಜೋಳ, ಮೆಕ್ಕೆಜೋಳ, ತೊಗರಿ, ಹೆಸರು ಸೇರಿದಂತೆ ವಿವಿಧ ಬೆಳೆಗಳು ಮೊಳಕೆಯೊಡೆಯದೆ ಒಣಗಿ ಹೋಗಿವೆ ಎಂದು ತಿಳಿಸಿದೆ.
ಮಳೆ ಕೊರತೆಯಿಂದ ಜನ–ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಮೇವು ಅಭಾವ ಉಂಟಾಗಿದ್ದು, ರೈತರು ಕೃಷಿಗಾಗಿ ಪಡೆದ ಸಾಲ ತೀರಿಸಲಾಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಕೂಲಿ ಕಾರ್ಮಿಕರು ಜೀವನೋಪಾಯಕ್ಕಾಗಿ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಮಕ್ಕಳ ಶಿಕ್ಷಣಕ್ಕೂ ತೊಂದರೆ ಉಂಟಾಗಿದೆ ಎಂದು ಮನವಿಯಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.
ರೈತ ಸಂಘವು ಸರ್ಕಾರದ ಮುಂದೆ ಹಲವು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟಿದ್ದು, ಆರು ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವುದು, ರೈತರ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡುವುದು, ಬೆಳೆನಷ್ಟಕ್ಕೆ ಸಮರ್ಪಕ ಪರಿಹಾರ ನೀಡುವುದು, ಕೃಷಿ ಕಾರ್ಮಿಕರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ನಿರಂತರ ಕೆಲಸ ಕಲ್ಪಿಸುವುದು, ಬ್ಯಾಂಕ್ ಹಾಗೂ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಬಲವಂತದ ಸಾಲ ವಸೂಲಾತಿ ನಡೆಸದಂತೆ ಕ್ರಮ ಕೈಗೊಳ್ಳುವುದು, ಕೊಳವೆಬಾವಿ ಅವಲಂಬಿತ ರೈತರಿಗೆ ನಿರಂತರ ವಿದ್ಯುತ್ ಪೂರೈಕೆ, ಗುಣಮಟ್ಟದ ಬಿತ್ತನೆ ಬೀಜ ಮತ್ತು ಗೊಬ್ಬರ ಲಭ್ಯತೆ, ಕೃಷಿ ಉತ್ಪನ್ನಗಳಿಗೆ ನ್ಯಾಯಯುತ ಬೆಂಬಲ ಬೆಲೆ ನಿಗದಿ, ಪ್ರತಿ ಹೋಬಳಿಯಲ್ಲಿ ಗೋಶಾಲೆ ಹಾಗೂ ಮೇವು ಬ್ಯಾಂಕ್ ಸ್ಥಾಪನೆ ಸೇರಿದಂತೆ ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿದೆ.
ಸರ್ಕಾರ ತಕ್ಷಣ ಜಂಟಿ ಸಮೀಕ್ಷೆ ನಡೆಸಿ ಬೆಳೆನಷ್ಟದ ವಾಸ್ತವ ಸ್ಥಿತಿ ಪರಿಶೀಲಿಸಿ ರೈತರ ಸಂಕಷ್ಟಕ್ಕೆ ಸ್ಪಂದಿಸಿ ಸೂಕ್ತ ಪರಿಹಾರ ಘೋಷಿಸಬೇಕು. ಇಲ್ಲದಿದ್ದರೆ ರೈತ ಸಂಘದ ನೇತೃತ್ವದಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವರ ಮನೆ ಮಹೇಶ್, ವಿಜಯನಗರ ಜಿಲ್ಲಾ ಅಧ್ಯಕ್ಷ ಬಣಕರ್ ಬಸವರಾಜ, ಹೊಸಪೇಟೆ ತಾಲೂಕು ಅಧ್ಯಕ್ಷ ಶೇಖಪ್ಪ, ಹರಪನಹಳ್ಳಿ ತಾಲೂಕು ಅಧ್ಯಕ್ಷ ನಾಗಪ್ಪ, ಮರಿಯಮ್ಮಹಳ್ಳಿ ಸ್ವಾಮಿ ಸೇರಿದಂತೆ ಸಂಘದ ಮುಖಂಡರು ಉಪಸ್ಥಿತರಿದ್ದರು.






