Vijayanagara | ಕಬ್ಬಿಗೆ ಪ್ರತಿ ಟನ್‌ಗೆ 3,600 ರೂ. ಬೆಲೆ ನಿಗದಿಗೆ ಆಗ್ರಹಿಸಿ ರೈತರಿಂದ ಬೈಕ್ ರ‍್ಯಾಲಿ

ಹೊಸಪೇಟೆ/ವಿಜಯನಗರ: ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ 3,600 ರೂ. ಬೆಲೆ ಘೋಷಿಸಬೇಕು ಹಾಗೂ ಸರ್ಕಾರ ನಿಗದಿಪಡಿಸಿರುವ ಬೆಂಬಲ ಬೆಲೆಯನ್ನು ವಿಜಯನಗರ ಜಿಲ್ಲೆಯಲ್ಲಿ ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಅಖಿಲ ಕರ್ನಾಟಕ ರೈತ ಸಂಘದ ಹಗರಿಬೊಮ್ಮನಹಳ್ಳಿ ತಾಲೂಕು ಘಟಕದ ವತಿಯಿಂದ ಬೈಕ್ ರ‍್ಯಾಲಿ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಉಪನಾಯಕನಹಳ್ಳಿಯಿಂದ ಹೊಸಪೇಟೆಯ ಜಿಲ್ಲಾಧಿಕಾರಿ ಕಚೇರಿವರೆಗೆ ಬೈಕ್ ರ‍್ಯಾಲಿ ನಡೆಸಿದ ರೈತರು, ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿದರು.
ಕಬ್ಬು ಬೆಳೆಯಲು ಬೀಜ, ಗೊಬ್ಬರ, ಕೀಟನಾಶಕ, ನೀರಾವರಿ, ಕಾರ್ಮಿಕರ ಕೂಲಿ ಹಾಗೂ ಸಾಗಣೆ ವೆಚ್ಚ ಹೆಚ್ಚಾಗಿದ್ದು, ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಆದ್ದರಿಂದ ಪ್ರತಿ ಟನ್ ಕಬ್ಬಿಗೆ 3,600 ರೂ. ಬೆಲೆ ನಿಗದಿಪಡಿಸಬೇಕು. ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಬರಬೇಕಾದ ಬಾಕಿ ಹಣವನ್ನು ತಕ್ಷಣ ಪಾವತಿಸಬೇಕು ಹಾಗೂ ಉತ್ಪಾದನಾ ವೆಚ್ಚಕ್ಕೆ ಅನುಗುಣವಾಗಿ ವೈಜ್ಞಾನಿಕ ಬೆಲೆ ನಿಗದಿಪಡಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಜಿಲ್ಲಾಧಿಕಾರಿಗಳು ಸಕ್ಕರೆ ಕಾರ್ಖಾನೆಗಳ ಮಾಲೀಕರು, ರೈತ ಮುಖಂಡರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಒಂದು ವಾರದೊಳಗೆ ಕಬ್ಬಿನ ಬೆಲೆ ಘೋಷಣೆಗೆ ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಎಲ್ಲ ಕಬ್ಬು ಬೆಳೆಗಾರರಿಗೆ ಸರ್ಕಾರದ ಬೆಂಬಲ ಬೆಲೆ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ರೈತ ಸಂಘದ ಜಿಲ್ಲಾ ಅಧ್ಯಕ್ಷ ಕೆ. ಬಣಕಾರ ಬಸವರಾಜ, ಬಂಗಾರಪ್ಪ, ನಾಗಪ್ಪ, ಮಲ್ಲಿಕಾರ್ಜುನ, ರಾಮಣ್ಣ, ಹಾಲೇಶ, ಎಸ್. ಬಸವರಾಜ ಸೇರಿದಂತೆ ರೈತ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ರೈತರು ಉಪಸ್ಥಿತರಿದ್ದರು.






