Vijayanagara | ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಆಗ್ರಹಿಸಿ ಅ.18ರಂದು ರೈತರಿಂದ ಉಪವಾಸ ಸತ್ಯಾಗ್ರಹ

ಹೊಸಪೇಟೆ/ವಿಜಯನಗರ: ನೂತನ ವಿಜಯನಗರ ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪಿಸುವುದಾಗಿ ನೀಡಿದ್ದ ಭರವಸೆ ಈಡೇರಿಲ್ಲ ಎಂದು ಆರೋಪಿಸಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಜಿಲ್ಲೆಯ ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಆಗ್ರಹಿಸಿ ಅಕ್ಟೋಬರ್ 18ರಂದು ಶಾಸಕರ ನಿವಾಸದ ಮುಂದೆ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲು ರೈತ ಮುಖಂಡರು ನಿರ್ಧರಿಸಿದ್ದಾರೆ.
ನಗರದ ರೈತ ಭವನದಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಆಗ್ರಹಿಸಿ ರೈತ ಪರ ಹೋರಾಟಗಾರರು, ರೈತ ಮುಖಂಡರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ನಿರ್ಧಾರ ಪ್ರಕಟಿಸಿದರು.
ನೂತನ ವಿಜಯನಗರ ಜಿಲ್ಲೆ ರಚನೆಯಾದ ಸಂದರ್ಭದಲ್ಲಿ ಜಿಲ್ಲೆಯ ರೈತರ ಅನುಕೂಲಕ್ಕಾಗಿ ಸಕ್ಕರೆ ಕಾರ್ಖಾನೆ ಸ್ಥಾಪಿಸುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣಾ ಪ್ರಚಾರದ ವೇಳೆ ಭರವಸೆ ನೀಡಿದ್ದರು. ಆದರೆ, ಕಳೆದ ಮೂರೂವರೆ ನಾಲ್ಕು ವರ್ಷಗಳು ಕಳೆದರೂ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾದರೂ ಭರವಸೆ ಈಡೇರಿಲ್ಲ. ರೈತರಿಗೆ ನೀಡಿದ ಮಾತಿಗೆ ಸರ್ಕಾರ ಬೆಲೆ ನೀಡುತ್ತಿಲ್ಲ ಎಂದು ರೈತ ಮುಖಂಡರು ಆರೋಪಿಸಿದರು.
ಜಿಲ್ಲೆಯಲ್ಲಿ ಸಕ್ಕರೆ ಕಾರ್ಖಾನೆ ಸ್ಥಾಪನೆಯಾದರೆ ಕಬ್ಬು ಬೆಳೆಗಾರರಿಗೆ ಅನುಕೂಲವಾಗುವುದರ ಜೊತೆಗೆ ಕೃಷಿ ಚಟುವಟಿಕೆಗಳಿಗೂ ಉತ್ತೇಜನ ದೊರೆಯಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಕೂಡಲೇ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಕ್ರಮ ಕೈಗೊಂಡು ಭೂಮಿಪೂಜೆ ನೆರವೇರಿಸಬೇಕು ಎಂದು ಅವರು ಒತ್ತಾಯಿಸಿದರು.
ಅಕ್ಟೋಬರ್ 18ರಂದು ಶಾಸಕರ ನಿವಾಸದ ಮುಂದೆ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲಾಗುವುದು. ಇದಾದ ಬಳಿಕವೂ ಸರ್ಕಾರ ರೈತರ ಬೇಡಿಕೆಗೆ ಸ್ಪಂದಿಸದಿದ್ದರೆ ಹಾಗೂ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಕ್ರಮ ಕೈಗೊಳ್ಳದಿದ್ದರೆ, ಜಿಲ್ಲೆಯ ರೈತರು ಮತ್ತು ವಿವಿಧ ಸಂಘಟನೆಗಳ ಸಹಯೋಗದಲ್ಲಿ ರಾಜ್ಯಾದ್ಯಂತ ತೀವ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ರೈತ ಮುಖಂಡರು ಎಚ್ಚರಿಕೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ರೈತ ಸಂಘದ ಅಧ್ಯಕ್ಷ ಸಣ್ಣಕ್ಕಿ ರುದ್ರಪ್ಪ, ಖಾಜಾ ಹುಸೇನ್ ನಿಯಾಜಿ, ಬಿ.ವಿ. ಗೌಡ, ಜಂಬಯ್ಯ, ಎಚ್.ಎಂ.ಎಫ್. ಇಮಾಮ್ ನಿಯಾಜಿ, ಕೆಂಪಣ್ಣ, ಸಂತೋಷ್ ಸೇರಿದಂತೆ ಹಲವು ರೈತ ಮುಖಂಡರು, ಪ್ರಗತಿಪರ ಹೋರಾಟಗಾರರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.






