Vijayanagara | ಕೊಟ್ಟೂರು ಪಟ್ಟಣ ಪಂಚಾಯತ್‌ಗೆ ಲೋಕಾಯುಕ್ತ ಅಧಿಕಾರಿಗಳಿಂದ ದಿಢೀರ್ ಭೇಟಿ : ದಾಖಲೆಗಳ ಪರಿಶೀಲನೆ

ಕೊಟ್ಟೂರು (ವಿಜಯನಗರ): ಪಟ್ಟಣ ಪಂಚಾಯಿತಿಯ ವಿವಿಧ ಕಡತಗಳಿಗೆ ಸಂಬಂಧಿಸಿದಂತೆ ದೂರು ಸಲ್ಲಿಕೆಯಾಗಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಬುಧವಾರ ಕೊಟ್ಟೂರು ಪಟ್ಟಣ ಪಂಚಾಯಿತಿಗೆ ದಿಢೀರ್ ಭೇಟಿ ನೀಡಿ, ಸುಮಾರು ನಾಲ್ಕು ಗಂಟೆಗಳ ಕಾಲ ದಾಖಲೆಗಳು ಹಾಗೂ ಕಡತಗಳನ್ನು ಪರಿಶೀಲಿಸಿತು.
ಲೋಕಾಯುಕ್ತ ಎಸ್‌ಪಿ ಎಂ.ಎಸ್. ಕೌಲಪುರ ಅವರ ನೇತೃತ್ವದಲ್ಲಿ ಇಬ್ಬರು ಡಿವೈಎಸ್‌ಪಿಗಳು ಸೇರಿದಂತೆ ಒಟ್ಟು 10 ಮಂದಿ ಅಧಿಕಾರಿಗಳ ತಂಡ ಬೆಳಿಗ್ಗೆ 10.15ಕ್ಕೆ ಪಟ್ಟಣ ಪಂಚಾಯತ್ ಕಚೇರಿಗೆ ಆಗಮಿಸಿತು. ಮಧ್ಯಾಹ್ನ 2 ಗಂಟೆಯವರೆಗೆ ವಿವಿಧ ವಿಭಾಗಗಳ ಕಡತಗಳು, ದಾಖಲೆಗಳು ಹಾಗೂ ಸಂಬಂಧಿತ ಮಾಹಿತಿಯನ್ನು ಪರಿಶೀಲಿಸಲಾಯಿತು.
ಪರಿಶೀಲನೆ ವೇಳೆ ದಾಖಲೆಗಳನ್ನು ಶಿಸ್ತುಬದ್ಧವಾಗಿ ನಿರ್ವಹಿಸುವಂತೆ ಅಧಿಕಾರಿಗಳು ಸಿಬ್ಬಂದಿಗೆ ಸೂಚನೆ ನೀಡಿದರು. ಪ್ರತಿಯೊಬ್ಬ ಸಿಬ್ಬಂದಿಯೂ ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ತಿಳಿಸಲಾಯಿತು. ಕೆಲವು ದಾಖಲೆಗಳಿಗೆ ಸಂಬಂಧಿಸಿದಂತೆ ಸಂಪೂರ್ಣ ವಿವರಣೆ ಹಾಗೂ ಅಗತ್ಯ ಮಾಹಿತಿಯನ್ನು ಒದಗಿಸುವಂತೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗೆ ಸೂಚಿಸಲಾಯಿತು.
ಸೊಮೊಟೊ ಪ್ರಕರಣದಡಿ ತನಿಖೆ :
ಕೊಟ್ಟೂರು ಪಟ್ಟಣ ಪಂಚಾಯಿತಿಯ ಕಡತಗಳಿಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ದೂರಿನ ಹಿನ್ನೆಲೆಯಲ್ಲಿ ಸೊಮೊಟೊ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಲಾಗಿದೆ. ದೂರಿನಲ್ಲಿರುವ ಅಂಶಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸುವ ಉದ್ದೇಶದಿಂದ ಕೊಟ್ಟೂರು ಹಾಗೂ ಕೂಡ್ಲಿಗಿ ವ್ಯಾಪ್ತಿಯಲ್ಲಿ ತನಿಖೆ ಮುಂದುವರಿಸಲಾಗಿದೆ ಎಂದು ಲೋಕಾಯುಕ್ತ ಎಸ್‌ಪಿ ಎಂ.ಎಸ್. ಕೌಲಪುರ ಸುದ್ದಿಗಾರರಿಗೆ ತಿಳಿಸಿದ್ದಾರೆ.






