ವಿಜಯನಗರ | ಗಣಿ ಇಲಾಖೆ ಅಧಿಕಾರಿಗಳಿಂದ ದಾಳಿ: 7 ಲಾರಿಗಳು ವಶ

ಹೊಸಪೇಟೆ: ನಗರದ ಹೊರವಲಯದ ಟಿಬಿ ಡ್ಯಾಂ ಚೆಕ್ ಪೋಸ್ಟ್‌ನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಮಂಗಳವಾರ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಮರಳು, ಮಣ್ಣು (ಗ್ರಾವೆಲ್) ಹಾಗೂ ಬಿಳಿ ಕಲ್ಲುಗಳನ್ನು ಸಾಗಿಸುತ್ತಿದ್ದ 7 ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು ವಾಹನಗಳನ್ನು ತಪಾಸಣೆ ನಡೆಸಿದಾಗ, ಒಂದು ಲಾರಿಯಲ್ಲಿ ಪರವಾನಗಿ ಇಲ್ಲದೆ ಅಕ್ರಮವಾಗಿ ಮರಳು ಸಾಗಿಸುತ್ತಿರುವುದು ಪತ್ತೆಯಾಗಿದೆ. ಇನ್ನುಳಿದ ಆರು ಲಾರಿಗಳಲ್ಲಿ ನಿಗದಿಗಿಂತ ಹೆಚ್ಚಿನ ಭಾರ (ಓವರ್ ಲೋಡ್) ಸಾಗಿಸುತ್ತಿರುವುದು ಕಂಡುಬಂದಿದೆ. "ನೈಸರ್ಗಿಕ ಸಂಪನ್ಮೂಲಗಳನ್ನು ಲೂಟಿ ಮಾಡುತ್ತಿರುವವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲು ಸಾರಿಗೆ ಇಲಾಖೆಗೆ ಶಿಫಾರಸು ಮಾಡಲಾಗುವುದು" ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಆಡಳಿತರೂಢ ಸರ್ಕಾರದ ರಾಜಕೀಯ ಪ್ರಭಾವಿಗಳ ಬೆಂಗಾವಲಿನಿಂದ ಈ ಅಕ್ರಮ ಮರಳು, ಮಣ್ಣು,ಹಾಗೂ ಕಲ್ಲು ದಂಧೆ ನಡೆಯುತ್ತಿದೆ ಇದಕ್ಕೆ ಕಡಿವಾಣ ಹಾಕುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂಬ ಮಾತು ಸಾರ್ವಜನಿಕರ ಚರ್ಚೆಗೆ ಗ್ರಾಸವಾಯಿತು.
"ಜಿಲ್ಲೆಯಲ್ಲಿ ರಾಜಕೀಯ ಪ್ರಭಾವಿಗಳ ಬೆಂಗಾವಲಿನಿಂದಲೇ ಅಕ್ರಮ ಮರಳು ಮತ್ತು ಕಲ್ಲು ದಂಧೆ ಎಗ್ಗಿಲ್ಲದೆ ನಡೆಯುತ್ತಿದೆ. ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಆಡಳಿತ ಇಂತಹ ದಂಧೆಗಳಿಗೆ ಕಡಿವಾಣ ಹಾಕುವಲ್ಲಿ ವಿಫಲವಾಗಿದೆ" ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.







