Vijayanagara | ಡೆಂಗ್ಯೂ, ಮಲೇರಿಯಾ ಮುಕ್ತ ಜಿಲ್ಲೆಗೆ ಅಧಿಕಾರಿಗಳು ಕಾರ್ಯನಿರ್ವಹಿಸಲಿ: ಜಿಲ್ಲಾಧಿಕಾರಿ

ವಿಜಯನಗರ (ಹೊಸಪೇಟೆ), ಮೇ.16: ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಹಾಗೂ ಕಾಲರಾದಂತಹ ಮಾರಣಾಂತಿಕ ಸಾಂಕ್ರಾಮಿಕ ರೋಗಗಳಿಂದ ಶೇ.100ರಷ್ಟು ಮುಕ್ತ ಜಿಲ್ಲೆ ನಿರ್ಮಿಸಲು ಅಧಿಕಾರಿಗಳು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡು ಕಾರ್ಯನಿರ್ವಹಿಸಬೇಕು ಎಂದು ಕವಿತಾ ಎಸ್. ಮನ್ನಿಕೇರಿ ಸೂಚನೆ ನೀಡಿದರು.
ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಅಂತರ ಇಲಾಖೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮುಂಗಾರು ಮಳೆ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕಲುಷಿತ ನೀರು ಹಾಗೂ ಹವಾಮಾನ ವೈಪರೀತ್ಯದಿಂದ ಡೆಂಗ್ಯೂ, ಮಲೇರಿಯಾ, ಕಾಲರಾದಂತಹ ಸಾಂಕ್ರಾಮಿಕ ರೋಗಗಳು ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಸ್ಥಳೀಯ ಆಡಳಿತ ಸಂಸ್ಥೆಗಳು ಶುದ್ಧ ಕುಡಿಯುವ ನೀರು ಪೂರೈಕೆಗೆ ಆದ್ಯತೆ ನೀಡಬೇಕು ಎಂದು ಸೂಚಿಸಿದರು.
ಪೈಪ್‌ಲೈನ್ ದುರಸ್ತಿ ಅಥವಾ ಇತರ ಕಾರಣಗಳಿಂದ ಕಲುಷಿತ ನೀರು ಸರಬರಾಜಾಗಿ ಸಾರ್ವಜನಿಕರ ಆರೋಗ್ಯದಲ್ಲಿ ಏರುಪೇರು ಉಂಟಾದರೆ ಸಂಬಂಧಪಟ್ಟ ಅಧಿಕಾರಿಗಳನ್ನು ನೇರ ಹೊಣೆಗಾರರನ್ನಾಗಿ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಚರಂಡಿ ಸ್ವಚ್ಛತೆ, ಸೊಳ್ಳೆ ನಿಯಂತ್ರಣ ಹಾಗೂ ಫಾಗಿಂಗ್ ಕಾರ್ಯವನ್ನು ಪರಿಣಾಮಕಾರಿಯಾಗಿ ಕೈಗೊಳ್ಳಬೇಕು. ಆಶಾ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಮನೆ-ಮನೆಗೆ ಭೇಟಿ ನೀಡಿ ಸೊಳ್ಳೆ ಉತ್ಪತ್ತಿ ತಾಣಗಳನ್ನು ಗುರುತಿಸಿ ಲಾರ್ವಾ ನಿರ್ಮೂಲನೆಗೆ ಕ್ರಮವಹಿಸಬೇಕು ಎಂದು ಸೂಚಿಸಿದರು.
ಶಾಲಾ-ಕಾಲೇಜುಗಳಲ್ಲಿ ಪ್ರತಿದಿನ ಪ್ರಾರ್ಥನೆ ಬಳಿಕ ಸಾಂಕ್ರಾಮಿಕ ರೋಗಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಸಾರ್ವಜನಿಕರು ಮನೆ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಮತ್ತು ಕುದಿಸಿ ಆರಿಸಿದ ನೀರನ್ನೇ ಕುಡಿಯಬೇಕು ಎಂದು ಸಲಹೆ ನೀಡಿದರು.
ಡೆಂಗ್ಯೂ ನಿಯಂತ್ರಣದಲ್ಲಿ ವಿಜಯನಗರ ಜಿಲ್ಲೆ ರಾಜ್ಯಕ್ಕೆ ಮಾದರಿ
ಕಳೆದ ವರ್ಷಗಳಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. 2023-24ರಲ್ಲಿ 323 ಪ್ರಕರಣಗಳು ದಾಖಲಾಗಿದ್ದರೆ, ಪ್ರಸಕ್ತ ಸಾಲಿನಲ್ಲಿ ಕೇವಲ 14 ಪ್ರಕರಣಗಳು ಮಾತ್ರ ದಾಖಲಾಗಿವೆ. ಆರೋಗ್ಯ ಇಲಾಖೆ ಕೈಗೊಂಡ ಕಟ್ಟುನಿಟ್ಟಿನ ಮುಂಜಾಗ್ರತಾ ಕ್ರಮಗಳು ರಾಜ್ಯಕ್ಕೆ ಮಾದರಿಯಾಗಿವೆ ಎಂದು ಜಿಲ್ಲಾಧಿಕಾರಿ ಶ್ಲಾಘಿಸಿದರು.
ಹೆಚ್‌ಪಿವಿ ಲಸಿಕಾ ಅಭಿಯಾನಕ್ಕೆ ಸಹಕಾರ ಕೋರಿಕೆ
ಜಿಲ್ಲಾದ್ಯಂತ 15 ವರ್ಷದೊಳಗಿನ, ವಿಶೇಷವಾಗಿ 8 ಮತ್ತು 9ನೇ ತರಗತಿ ವಿದ್ಯಾರ್ಥಿನಿಯರನ್ನು ಒಳಗೊಂಡಂತೆ 15 ಸಾವಿರ ಮಕ್ಕಳಿಗೆ ಹೆಚ್‌ಪಿವಿ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಪ್ರಸ್ತುತ ಶೇ.35ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ತಿಳಿಸಿದರು.
ಪೋಷಕರಲ್ಲಿ ಇನ್ನೂ ಭೀತಿ ಇರುವುದರಿಂದ ಗ್ರಾಮ ಹಾಗೂ ವಾರ್ಡ್‌ವಾರು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು. ಕ್ಯಾನ್ಸರ್‌ನಂತಹ ಗಂಭೀರ ಕಾಯಿಲೆ ತಡೆಗಟ್ಟಲು ಈ ಲಸಿಕೆ ಅಗತ್ಯ ಎಂಬುದನ್ನು ಪೋಷಕರಿಗೆ ಮನವರಿಕೆ ಮಾಡಿಕೊಡಬೇಕು ಎಂದರು.
ಈ ವೇಳೆ ಡಾ. ಜಂಬಯ್ಯ ಮಾತನಾಡಿ, ಕೆಲವು ಸಮುದಾಯಗಳಲ್ಲಿ ಲಸಿಕೆ ಬಗ್ಗೆ ಹಿಂಜರಿಕೆ ಇರುವ ಹಿನ್ನೆಲೆಯಲ್ಲಿ, ಲಸಿಕೆ ಪಡೆದ ಮಕ್ಕಳ ಮೂಲಕ ಸ್ಥಳೀಯ ಭಾಷೆಯಲ್ಲಿ ಕಿರು ವಿಡಿಯೋ ಸಂದೇಶಗಳನ್ನು ಸಿದ್ಧಪಡಿಸಿ ಪೋಷಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
ಸಭೆಯಲ್ಲಿ ನೋಂಗ್ಜಯ್ ಮಹ್ಮದ್ ಅಲಿ ಅಕ್ರಂ ಷಾ, ಡಾ. ಎಲ್.ಆರ್. ಶಂಕರ್ ನಾಯ್ಕ್, ರವಿ, ಷಣ್ಮುಖ ನಾಯ್ಕ ಸೇರಿದಂತೆ ವಿವಿಧ ತಾಲೂಕುಗಳ ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು.






