Vijayanagara | ಹಿಂಗಾರು ಹಂಗಾಮಿನಲ್ಲಿ ಪರ್ಯಾಯ ಬೆಳೆಗಳಿಗೆ ಆದ್ಯತೆ ನೀಡಿ: ಡಿಸಿ ಕವಿತಾ ಎಸ್.ಮನ್ನಿಕೇರಿ

ವಿಜಯನಗರ (ಹೊಸಪೇಟೆ) : ಜಿಲ್ಲೆಯಲ್ಲಿ ಮಳೆಯ ಕೊರತೆ ಹಾಗೂ ಮಣ್ಣಿನಲ್ಲಿ ತೇವಾಂಶದ ಅಭಾವದಿಂದ ಬರ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ, ರೈತರು ಹಿಂಗಾರು ಹಂಗಾಮಿನಲ್ಲಿ ಕಡಿಮೆ ನೀರು ಬಳಸಿ, ಕಡಿಮೆ ಅವಧಿಯಲ್ಲಿ ಕಟಾವಿಗೆ ಬರುವ ಹಾಗೂ ಬರವನ್ನು ತಡೆದುಕೊಳ್ಳುವ ಸಾಮರ್ಥ್ಯವಿರುವ ಪರ್ಯಾಯ ಬೆಳೆಗಳನ್ನು ಬೆಳೆಯಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಕರೆ ನೀಡಿದರು.
ನಗರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕೃಷಿ ಇಲಾಖೆ ವತಿಯಿಂದ ಹಿಂಗಾರು ಹಂಗಾಮಿನಲ್ಲಿ ಪರ್ಯಾಯ ಬೆಳೆಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪೋಸ್ಟರ್ ಬಿಡುಗಡೆ ಮಾಡಿ ಅವರು ಮಾತನಾಡಿದರು.
ರೈತರು ಬೆಳೆ ಆಯ್ಕೆ ಮಾಡುವ ಮುನ್ನ ಪ್ರಸ್ತುತ ಮಳೆಯ ಪ್ರಮಾಣ, ಮುಂದಿನ ಮಳೆಯ ಮುನ್ಸೂಚನೆ ಹಾಗೂ ಬಿತ್ತನೆಗೆ ಉಳಿದಿರುವ ಅವಧಿಯನ್ನು ಗಮನಿಸಬೇಕು. ತೀವ್ರ ಬರ ಪರಿಸ್ಥಿತಿಯಲ್ಲಿ ಬೆಳೆ ನಷ್ಟವನ್ನು ಕಡಿಮೆ ಮಾಡಲು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆಯನ್ನು ಕಾಪಾಡಲು ಕಡಲೆ, ಜೋಳ, ಕುಸುಬೆ, ಹುರಳಿ, ಸೂರ್ಯಕಾಂತಿ ಮತ್ತು ಅಲಸಂದಿ ಬೆಳೆಗಳನ್ನು ಪರ್ಯಾಯವಾಗಿ ಬೆಳೆಯುವುದು ಸೂಕ್ತವಾಗಿದೆ ಎಂದು ತಿಳಿಸಿದರು.
ನೀರಾವರಿ ಸೌಲಭ್ಯವಿರುವ ರೈತರು ರಾಗಿ ಹಾಗೂ ಶೇಂಗಾ ಬೆಳೆಯಬಹುದು. ಬಿತ್ತನೆಗೂ ಮುನ್ನ ಬೀಜ ಮೊಳಕೆಯೊಡೆಯಲು ಮತ್ತು ಸಸಿಗಳ ಬೆಳವಣಿಗೆಗೆ ಅಗತ್ಯವಾದ ತೇವಾಂಶ ಮಣ್ಣಿನಲ್ಲಿ ಇದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಬೀಜೋಪಚಾರ, ತೇವಾಂಶ ಸಂರಕ್ಷಣೆ, ನೀರಿನ ಉಳಿತಾಯ ಹಾಗೂ ಮೇವು ನಿರ್ವಹಣಾ ಪದ್ಧತಿಗಳನ್ನು ಅನುಸರಿಸುವ ಮೂಲಕ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಬೇಕು ಎಂದು ಸಲಹೆ ನೀಡಿದರು.
ಸರ್ಕಾರದ ಯೋಜನೆಗಳ ಸೌಲಭ್ಯ ಪಡೆಯಲು ನೋಂದಣಿ ಕಡ್ಡಾಯ :
ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಗಳ ವಿವರಗಳನ್ನು ರೈತರ ಬೆಳೆ ಸಮೀಕ್ಷೆ ತಂತ್ರಾಂಶದಲ್ಲಿ ಕಡ್ಡಾಯವಾಗಿ ದಾಖಲಿಸಬೇಕು. ಫ್ರೂಟ್ಸ್ ತಂತ್ರಾಂಶದಲ್ಲಿ ರೈತ ಗುರುತಿನ ಸಂಖ್ಯೆ (ಎಫ್ಐಡಿ) ಮಾಡಿಸಿ, ಬಾಕಿ ಉಳಿದಿರುವ ಸರ್ವೆ ನಂಬರ್ಗಳನ್ನು ಸೇರ್ಪಡೆಗೊಳಿಸಬೇಕು. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಮುಂದಿನ ಕಂತಿನ ಹಣ ಪಡೆಯಲು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ. ಅಲ್ಲದೆ, ಆಯಾ ಗ್ರಾಮ ಪಂಚಾಯಿತಿ ಹಾಗೂ ಹೋಬಳಿ ವ್ಯಾಪ್ತಿಗೆ ನಿಗದಿಪಡಿಸಿರುವ ಬೆಳೆಗಳಿಗೆ ರೈತರು ಬೆಳೆ ವಿಮೆ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಪರ್ಯಾಯ ಬೆಳೆಗಳ ಕುರಿತು ಜಾಗೃತಿ ಮೂಡಿಸುವ ಭಿತ್ತಿಪತ್ರಗಳನ್ನು ಸಾರ್ವಜನಿಕರು ಹೆಚ್ಚಾಗಿ ಭೇಟಿ ನೀಡುವ ಬಸ್ ನಿಲ್ದಾಣಗಳು, ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ತಾಲೂಕು ಕಚೇರಿಗಳು ಸೇರಿದಂತೆ ಸ್ಥಳೀಯ ಆಡಳಿತ ಸಂಸ್ಥೆಗಳು ಹಾಗೂ ಜನವಸತಿ ಪ್ರದೇಶಗಳಲ್ಲಿ ಪ್ರದರ್ಶಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ ಹಾಗೂ ಉಪನಿರ್ದೇಶಕ ವಾಮದೇವ್ ಕೊಳ್ಳಿ ಉಪಸ್ಥಿತರಿದ್ದರು.






