Vijayanagara | ಜಿಲ್ಲೆಯ ಎಲ್ಲ ಶಾಸಕರ ವಿಶ್ವಾಸ ಪಡೆದು ಅಭಿವೃದ್ಧಿಗೆ ಆದ್ಯತೆ: ಸಚಿವ ಕೆ.ಎಸ್.ಬಸವಂತಪ್ಪ

ಹರಪನಹಳ್ಳಿ: ವಿಜಯನಗರ ಜಿಲ್ಲೆಯ ಎಲ್ಲ ಶಾಸಕರನ್ನು ವಿಶ್ವಾಸಕ್ಕೆ ಪಡೆದು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಮುಜರಾಯಿ, ಮೀನುಗಾರಿಕೆ ಹಾಗೂ ಒಳನಾಡು ಬಂದರು ಇಲಾಖೆ ಸಚಿವ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಬಸವಂತಪ್ಪ ಹೇಳಿದರು.
ಪಟ್ಟಣದ ಕಾಶಿ ಸಂಗಮೇಶ್ವರ ಬಡಾವಣೆಯ ಕಾಂಗ್ರೆಸ್ ಭವನದಲ್ಲಿ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ತಮ್ಮ ಕ್ಷೇತ್ರಕ್ಕೆ ಹೊಂದಿಕೊಂಡಿರುವ ವಿಜಯನಗರ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿ ನೇಮಕವಾಗಿರುವುದು ಸಂತಸ ತಂದಿದೆ. ಜಿಲ್ಲೆಯ ಎಲ್ಲ ಶಾಸಕರೊಂದಿಗೆ ಸಮನ್ವಯ ಸಾಧಿಸಿ ಅಭಿವೃದ್ಧಿ ಕಾಮಗಾರಿಗಳಿಗೆ ವೇಗ ನೀಡುವುದರ ಜೊತೆಗೆ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸಲು ಶ್ರಮಿಸುವುದಾಗಿ ತಿಳಿಸಿದರು.
ತಾವು ಕೂಡ ಪಕ್ಷದ ಕೆಳಮಟ್ಟದಿಂದ ಬೆಳೆದು ಸಚಿವ ಸ್ಥಾನಕ್ಕೆ ಬಂದಿರುವುದಾಗಿ ಹೇಳಿದ ಅವರು, ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿಯುವ ಪ್ರತಿಯೊಬ್ಬ ಕಾರ್ಯಕರ್ತರಿಗೂ ಮುಂದಿನ ದಿನಗಳಲ್ಲಿ ಉನ್ನತ ಜವಾಬ್ದಾರಿಗಳನ್ನು ನೀಡುವ ಮೂಲಕ ಅವಕಾಶ ಕಲ್ಪಿಸಲಾಗುವುದು. ಕಾರ್ಯಕರ್ತರು ಒಗ್ಗಟ್ಟಿನಿಂದ ಪಕ್ಷ ಸಂಘಟನೆಗೆ ಶ್ರಮಿಸಬೇಕು ಎಂದು ಕರೆ ನೀಡಿದರು.
ಶಾಸಕಿ ಎಂ.ಪಿ. ಲತಾ ಮಲ್ಲಿಕಾರ್ಜುನ ಮಾತನಾಡಿ, ಕೆ.ಎಸ್. ಬಸವಂತಪ್ಪ ಅವರು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರಾಗಿರುವುದು ಸಂತಸ ತಂದಿದೆ. ಅವರ ನೇತೃತ್ವದಲ್ಲಿ ಹರಪನಹಳ್ಳಿ ಕ್ಷೇತ್ರ ಸೇರಿದಂತೆ ಜಿಲ್ಲೆಯ ಅಭಿವೃದ್ಧಿಗೆ ಇನ್ನಷ್ಟು ವೇಗ ದೊರೆಯಲಿದೆ ಎಂಬ ವಿಶ್ವಾಸವಿದೆ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ವಿ. ಅಂಜಿನಪ್ಪ ಮಾತನಾಡಿದರು.
ಚಿಗಟೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುಬೇರಗೌಡ, ಮುಖಂಡರಾದ ಎಚ್.ಬಿ. ಪರಶುರಾಮಪ್ಪ, ವಕೀಲ ಟಿ. ವೆಂಕಟೇಶ, ಅಬ್ದುಲ್ ರೆಹಮಾನ್, ಪೈಲ್ವಾನ್ ಗಣೇಶ್, ಲಕ್ಕಳ್ಳಿ ಹನುಮಂತಪ್ಪ, ಲಾಟಿ ದಾದಪೀರ, ಮೈದೂರು ರಾಮಪ್ಪ, ಚಂದ್ರಪ್ಪ, ಕನಕಬಸ್ಸಾಪುರ ಮಂಜುನಾಥ, ಪೂಜಾರ ಕೃಷ್ಣನಾಯ್ಕ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.






