Vijayanagara | 2031ರ ದೂರದೃಷ್ಟಿ ಯೋಜನೆಗೆ ನಿಖರ ಮಾಹಿತಿ ನೀಡಿ: ಡಿಸಿ ಕವಿತಾ ಮನ್ನಿಕೇರಿ

ವಿಜಯನಗರ (ಹೊಸಪೇಟೆ): ಜಿಲ್ಲೆಯ ನೈಜ ಸ್ಥಿತಿಗತಿಯನ್ನು ಪ್ರತಿಬಿಂಬಿಸುವ ಜಿಲ್ಲಾ ಮಾನವ ಅಭಿವೃದ್ಧಿ ವರದಿ ಹಾಗೂ 2031ರ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ದೂರದೃಷ್ಟಿ ಯೋಜನೆ ರೂಪಿಸುವ ಕಾರ್ಯ ಪ್ರಗತಿಯಲ್ಲಿದ್ದು, ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದಿಂದ ನಿಖರ ಅಂಕಿ-ಅಂಶಗಳನ್ನು ಒದಗಿಸಿ ಸಮಗ್ರ ವರದಿ ಸಿದ್ಧಪಡಿಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಹಾಗೂ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಧಿಕಾರಿಗಳು ಸಲ್ಲಿಸುವ ಮಾಹಿತಿ ರಸ್ತೆ, ಕಟ್ಟಡಗಳಂತಹ ಭೌತಿಕ ಅಭಿವೃದ್ಧಿಗೆ ಮಾತ್ರ ಸೀಮಿತವಾಗದೆ, ಜಿಲ್ಲೆಯ ಜನರ ಜೀವನಮಟ್ಟ, ಆರೋಗ್ಯ, ಶಿಕ್ಷಣ, ಪೌಷ್ಟಿಕತೆ ಹಾಗೂ ಸಾಮಾಜಿಕ ಸ್ಥಿತಿಗತಿಯನ್ನು ಪ್ರತಿಬಿಂಬಿಸುವಂತಿರಬೇಕು ಎಂದು ಹೇಳಿದರು.
ಜಿಲ್ಲೆಯ ಜನರ ಸರಾಸರಿ ಜೀವಿತಾವಧಿ, ತಾಯಿ-ಮಗು ಮರಣ ಪ್ರಮಾಣ, ಆರೋಗ್ಯ ಸೇವೆಗಳ ಲಭ್ಯತೆ, ಸಾಕ್ಷರತೆ, ಶಾಲಾ ದಾಖಲಾತಿ, ಹೆಣ್ಣುಮಕ್ಕಳ ಶಿಕ್ಷಣ, ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆ ಸೇರಿದಂತೆ ಎಲ್ಲಾ ಮಾಹಿತಿಯನ್ನು ನಿಖರವಾಗಿ ದಾಖಲಿಸುವಂತೆ ಸೂಚಿಸಿದರು.
ಹಿಂದುಳಿದ ತಾಲೂಕುಗಳು ಹಾಗೂ ಗ್ರಾಮ ಪಂಚಾಯಿತಿಗಳನ್ನು ಗುರುತಿಸಿ ಶುದ್ಧ ಕುಡಿಯುವ ನೀರು, ಶೌಚಾಲಯ, ವಸತಿ, ಪೌಷ್ಟಿಕ ಆಹಾರ, ಆರೋಗ್ಯ ಮತ್ತು ಶಿಕ್ಷಣ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳು ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
2031ರ ದೂರದೃಷ್ಟಿ ಯೋಜನೆಯಡಿ ಪರಿಸರ ಸಂರಕ್ಷಣೆ, ಹನಿ ನೀರಾವರಿ, ಅಂತರ್ಜಲ ವೃದ್ಧಿ, ಆಧುನಿಕ ಕೃಷಿ, ರೈತರ ಆದಾಯ ಹೆಚ್ಚಳ, ಸ್ಥಳೀಯ ಸಂಪನ್ಮೂಲಗಳ ಸದ್ಬಳಕೆ, ಯುವಕರಿಗೆ ಕೌಶಲ್ಯಾಭಿವೃದ್ಧಿ ತರಬೇತಿ, ಸ್ಥಳೀಯ ಉದ್ಯೋಗ ಸೃಷ್ಟಿ ಹಾಗೂ ವೈಜ್ಞಾನಿಕ ತ್ಯಾಜ್ಯ ನಿರ್ವಹಣೆಗೆ ಆದ್ಯತೆ ನೀಡಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಸಿಇಒ ನೋಂಗ್ಜಾಯ್ ಮಹ್ಮದ್ ಅಲಿ ಅಕ್ರಂ ಷಾ, ಮುಖ್ಯ ಯೋಜನಾಧಿಕಾರಿ ಅನ್ನದಾನಸ್ವಾಮಿ, ಹಂಪಿ ವಿಶ್ವವಿದ್ಯಾಲಯದ ಅಭಿವೃದ್ಧಿ ಅಧ್ಯಯನ ವಿಭಾಗದ ಮುಖ್ಯಸ್ಥ ಹಾಗೂ ಸಮಾಜ ವಿಜ್ಞಾನ ನಿಕಾಯದ ಡೀನ್ ಹೆಚ್.ಡಿ. ಪ್ರಶಾಂತ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.






