Vijayanagara | ಮಹಿಳೆಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ, ಲೋಪದೋಷ ಸರಿಪಡಿಸಿ: ಡಾ.ನಾಗಲಕ್ಷ್ಮೀ ಚೌಧರಿ

ವಿಜಯನಗರ (ಹೊಸಪೇಟೆ) : ಜಿಲ್ಲೆಯ ಮಹಿಳೆಯರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವುದರ ಜೊತೆಗೆ ವಿವಿಧ ಇಲಾಖೆಗಳಲ್ಲಿನ ಲೋಪದೋಷಗಳನ್ನು ಸರಿಪಡಿಸಿ, ಸಾರ್ವಜನಿಕರಿಗೆ ಸಮರ್ಪಕ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಯಾವುದೇ ಇಲಾಖೆ ಅಥವಾ ಖಾಸಗಿ ಸಂಸ್ಥೆಗಳಲ್ಲಿ ಆಂತರಿಕ ದೂರು ಸಮಿತಿ ರಚನೆ ಕಡ್ಡಾಯವಾಗಿದ್ದು, ಪ್ರಕರಣಗಳು ವರದಿಯಾಗದಿದ್ದರೂ ನಿಯಮಿತವಾಗಿ ಪ್ರಗತಿ ಪರಿಶೀಲನಾ ಸಭೆಗಳನ್ನು ಆಯೋಜಿಸಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಸೂಚಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಶುಕ್ರವಾರ ನಗರದ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಮಹಿಳಾ ಸ್ಪಂದನ ಹಾಗೂ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಮೃದ್ಧ ಸಂಪನ್ಮೂಲಗಳನ್ನು ಹೊಂದಿರುವ ವಿಜಯನಗರ ಜಿಲ್ಲೆಯನ್ನು ಇನ್ನಷ್ಟು ಅಭಿವೃದ್ಧಿಪಡಿಸುವ ಅಗತ್ಯವಿದೆ. ಯಾವುದೇ ರೀತಿಯ ಸಮಸ್ಯೆಗಳು ಅಥವಾ ಲೋಪದೋಷಗಳು ಕಂಡುಬಂದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸದೆ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು. ವಿಶೇಷವಾಗಿ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಅಕ್ರಮ ಮದ್ಯ ಮಾರಾಟ ಅವ್ಯಾಹತವಾಗಿ ನಡೆಯುತ್ತಿರುವುದು ಬೇಸರದ ಸಂಗತಿಯಾಗಿದ್ದು, ಈ ದುರ್ವ್ಯವಸ್ಥೆಗೆ ಕಡಿವಾಣ ಹಾಕಲು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಅಕ್ರಮ ಮದ್ಯ ಮಾರಾಟ ತಡೆಗೆ ಕೈಗೊಂಡಿರುವ ಕ್ರಮಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳನ್ನು ಪ್ರಶ್ನಿಸಿದ ಅವರು, ಕೇವಲ ಜಾಗೃತಿ ಮೂಡಿಸುವುದಕ್ಕೆ ಸೀಮಿತವಾಗದೆ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು, ಈ ಕುರಿತು ವ್ಯಾಪಕ ಜಾಗೃತಿ ಮೂಡಿಸಲಾಗಿದ್ದು, ಹಲವು ಪ್ರಕರಣಗಳನ್ನು ದಾಖಲಿಸಿ ಕ್ರಮ ವಹಿಸಲಾಗಿದೆ ಎಂದು ಮಾಹಿತಿ ನೀಡಿದರು.
ಗಡಿ ಭಾಗ ಹಾಗೂ ಗಣಿ ಬಾಧಿತ ಪ್ರದೇಶಗಳಲ್ಲಿ ವಾಸಿಸುತ್ತಿರುವ ಸಂತ್ರಸ್ತರನ್ನು ಶೀಘ್ರ ಸ್ಥಳಾಂತರಿಸಿ ಸೂಕ್ತ ಪರಿಹಾರ ಮತ್ತು ಪುನರ್ವಸತಿ ಕಲ್ಪಿಸಬೇಕು ಎಂದು ಸೂಚಿಸಿದ ಅವರು, ಈ ಪ್ರಕ್ರಿಯೆ ಪೂರ್ಣಗೊಳಿಸಲು ಎಷ್ಟು ಕಾಲಾವಕಾಶ ಬೇಕಾಗುತ್ತದೆ ಎಂಬುದರ ಕುರಿತು ಮಾಹಿತಿ ಪಡೆದರು. ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು, ಈಗಾಗಲೇ ನಿವೇಶನ ಗುರುತಿಸಲಾಗಿದ್ದು, ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ಪ್ರಕ್ರಿಯೆ ಪೂರ್ಣಗೊಂಡ ಕೂಡಲೇ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಗಣಿ ಬಾಧಿತ ಪ್ರದೇಶಗಳ ಜನರಿಗೆ ಆರೋಗ್ಯ ಇಲಾಖೆಯ ಸೌಲಭ್ಯಗಳು ಸಮರ್ಪಕವಾಗಿ ತಲುಪುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದ ಅವರು, ಆರೋಗ್ಯ ಇಲಾಖೆಯ ಕಾರ್ಯವೈಖರಿ ಕುರಿತು ಅಸಮಾಧಾನ ವ್ಯಕ್ತಪಡಿಸಿದರು. ತಿಂಗಳಿಗೆ ಸುಮಾರು 400ರಿಂದ 500 ಹೆರಿಗೆಗಳು ನಡೆಯುವ ಆಸ್ಪತ್ರೆಗಳಲ್ಲಿ ಸ್ವಚ್ಛತೆ ಕಾಪಾಡುವುದು ಅತ್ಯಂತ ಅಗತ್ಯ. ಆದರೆ ಆಸ್ಪತ್ರೆಗಳಲ್ಲಿ ಸ್ವಚ್ಛತೆಯ ಕೊರತೆ ಕಂಡುಬರುತ್ತಿರುವುದು ಬೇಸರದ ಸಂಗತಿ. ಅಲ್ಲದೆ, ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ಹೊರಗುತ್ತಿಗೆ ನೌಕರರಿಗೆ ಸಕಾಲದಲ್ಲಿ ವೇತನ ಪಾವತಿಸಬೇಕು ಎಂದು ನಿರ್ದೇಶನ ನೀಡಿದರು.
ಹಂಪಿ ವಿಶ್ವವಿದ್ಯಾಲಯದ ವಸತಿ ನಿಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸ್ವಚ್ಛತೆಯ ಕೊರತೆ ಹಾಗೂ ಅಲ್ಲಿನ ಅವ್ಯವಸ್ಥೆ ಕಂಡು ಮನಸ್ಸಿಗೆ ನೋವಾಗಿದೆ. ಇಂತಹ ಸಮಸ್ಯೆಗಳ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುವುದು ಸರಿಯಲ್ಲ. ಮುಂದಿನ ದಿನಗಳಲ್ಲಿ ಇಂತಹ ಲೋಪಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ತಾಕೀತು ಮಾಡಿದರು.
ಹಂಪಿ ವ್ಯಾಪ್ತಿಯಲ್ಲಿ ಸುಮಾರು 270 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದರೂ, ಅವುಗಳಲ್ಲಿ ಬಹುತೇಕವು ಕಾರ್ಯನಿರ್ವಹಿಸುತ್ತಿಲ್ಲ ಎಂಬ ಮಾಹಿತಿ ಇದೆ. ಸಂಬಂಧಪಟ್ಟ ಅಧಿಕಾರಿಗಳು ಎಲ್ಲ ಕ್ಯಾಮೆರಾಗಳನ್ನು ಪರಿಶೀಲಿಸಿ ದುರಸ್ತಿಗೊಳಿಸುವುದರ ಜೊತೆಗೆ ಅವು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.
ಸಂಚಾರಿ ಕುರಿಗಾಹಿಗಳಿಗೆ ದೊರೆಯಬೇಕಾದ ಅಗತ್ಯ ಔಷಧಿಗಳು, ಗುರುತಿನ ಚೀಟಿಗಳು ಸೇರಿದಂತೆ ಸರ್ಕಾರದ ವಿವಿಧ ಸೌಲಭ್ಯಗಳು ಸಮರ್ಪಕವಾಗಿ ತಲುಪುತ್ತಿಲ್ಲ ಎಂಬ ಗಂಭೀರ ಆರೋಪಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಕುರಿಗಾಹಿಗಳ ಸಮಸ್ಯೆಗಳನ್ನು ತಕ್ಷಣ ಪರಿಹರಿಸಿ, ಅವರಿಗೆ ದೊರೆಯಬೇಕಾದ ಎಲ್ಲ ಸೌಲಭ್ಯಗಳನ್ನು ವಿಳಂಬವಿಲ್ಲದೆ ಒದಗಿಸಬೇಕು ಎಂದು ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ದೇವದಾಸಿ ಮಹಿಳೆಯರಿಗೆ ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳು ಸಮರ್ಪಕವಾಗಿ ತಲುಪುತ್ತಿಲ್ಲ ಎಂಬ ವ್ಯಾಪಕ ದೂರುಗಳಿವೆ. ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುವಲ್ಲಿ ಅಧಿಕಾರಿಗಳು ವಿಶೇಷ ಕಾಳಜಿ ವಹಿಸಬೇಕು ಎಂದು ತಾಕೀತು ಮಾಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಂಬಂಧಪಟ್ಟ ಅಧಿಕಾರಿಗಳು, ಹೊಸಪೇಟೆ ತಾಲೂಕಿನಲ್ಲಿ ಮೂರು ಎಕರೆ ಜಾಗ ಗುರುತಿಸಲಾಗಿದ್ದು, ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ವಸತಿ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಕೃಷಿ ಇಲಾಖೆಯಲ್ಲಿ ನೇರಪಾವತಿ ಹಾಗೂ ಹೊರಗುತ್ತಿಗೆ ಆಧಾರದಲ್ಲಿ 16 ತಿಂಗಳ ಕಾಲ ಕೆಲಸ ನಿರ್ವಹಿಸಿದ್ದರೂ ಈವರೆಗೆ ವೇತನ ಪಾವತಿಸಿಲ್ಲ ಎಂದು ನೊಂದ ಮಹಿಳೆಯರು ಅಧ್ಯಕ್ಷರ ಮುಂದೆ ತಮ್ಮ ಅಳಲು ತೋಡಿಕೊಂಡರು. ಈ ರೀತಿಯ ಪ್ರಕರಣಗಳಲ್ಲಿ ಮಹಿಳಾ ನೌಕರರಿಗೆ ಅನ್ಯಾಯವಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಪರಿಶೀಲಿಸಿ ಬಾಕಿ ವೇತನ ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧ್ಯಕ್ಷರು ಸೂಚಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಅಧಿಕಾರಿಗಳು, ಈಗಾಗಲೇ ಎಂಟು ತಿಂಗಳ ಬಾಕಿ ವೇತನ ಪಾವತಿಸಲಾಗಿದ್ದು, ಮುಂದಿನ ದಿನಗಳಲ್ಲಿ ಉಳಿದ ಬಾಕಿ ವೇತನವನ್ನೂ ಪಾವತಿಸಲಾಗುವುದು ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಗರಿಮಾ ಪನ್ವಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ, ಮಹಿಳಾ ಆಯೋಗದ ಕಾರ್ಯದರ್ಶಿ ರೂಪ ಹಾಗೂ ಉಪವಿಭಾಗಾಧಿಕಾರಿ ಕವಿತಾ ಉಪಸ್ಥಿತರಿದ್ದರು.






