Vijayanagara | ಅರ್ಜಿದಾರರೊಂದಿಗೆ ಮಾನವೀಯತೆಯಿಂದ ವರ್ತಿಸಿ, ನಿರ್ಲಕ್ಷಿಸಿದರೆ ಪರವಾನಗಿ ರದ್ದು : ತಹಶೀಲ್ದಾರ್ ಶೃತಿ ಎಚ್ಚರಿಕೆ

ವಿಜಯನಗರ (ಹೊಸಪೇಟೆ): ಗ್ರಾಮ ಒನ್ ಕೇಂದ್ರಗಳಿಗೆ ಅರ್ಜಿ ಸಲ್ಲಿಸಲು ಬರುವ ಸಾರ್ವಜನಿಕರೊಂದಿಗೆ ಸಿಬ್ಬಂದಿ ಹಾಗೂ ಅಧಿಕಾರಿಗಳು ಮಾನವೀಯತೆಯಿಂದ ವರ್ತಿಸಬೇಕು. ಕರ್ತವ್ಯಲೋಪ ಎಸಗಿದರೆ ಸಂಬಂಧಿಸಿದ ಸಿಬ್ಬಂದಿಯ ಪರವಾನಗಿಯನ್ನು ರದ್ದುಪಡಿಸಲಾಗುವುದು ಎಂದು ತಹಶೀಲ್ದಾರ್ ಶೃತಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.
ತಾಲೂಕು ಆಡಳಿತದ ವತಿಯಿಂದ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಹೋಬಳಿ ಮಟ್ಟದ ‘ಪ್ರಜಾಸೇವಾ ಕಾರ್ಯಕ್ರಮ’ದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿ, ಹಲವು ಮನವಿಗಳಿಗೆ ಸ್ಥಳದಲ್ಲೇ ಸ್ಪಂದಿಸಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಒಟ್ಟು 270 ಅರ್ಜಿಗಳು ಸ್ವೀಕೃತವಾಗಿದ್ದು, ಮನೆ ಹಾಗೂ ನಿವೇಶನಕ್ಕೆ ಸಂಬಂಧಿಸಿದ 220, ಪಡಿತರ ಚೀಟಿಗೆ 10 ಮತ್ತು ಪಿಂಚಣಿಗೆ ಸಂಬಂಧಿಸಿದ 5–6 ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಮಾಹಿತಿ ನೀಡಿದರು.
ಅಹವಾಲು ಸ್ವೀಕಾರದ ವೇಳೆ ಮಾರುತಿ ಕಾಲೋನಿಯ ದೃಷ್ಟಿವಿಕಲಚೇತನ ವ್ಯಕ್ತಿಯೊಬ್ಬರ ಮನೆ ಬೆಂಕಿಗಾಹುತಿಯಾಗಿ ಎಲ್ಲ ದಾಖಲೆಗಳು ನಾಶವಾಗಿದ್ದು, ಕಣ್ಣಿನ ಶಸ್ತ್ರಚಿಕಿತ್ಸೆಗೆ ಪಡಿತರ ಚೀಟಿ ಅಗತ್ಯವಿದೆ ಎಂಬುದನ್ನು ತಿಳಿದು ತಕ್ಷಣವೇ ಪಡಿತರ ಚೀಟಿ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ದಾಖಲೆಗಳಿಲ್ಲದೆ ಸಂಕಷ್ಟದಲ್ಲಿದ್ದ ವೃದ್ಧೆಯೊಬ್ಬರ ಮನವಿಗೂ ಸ್ಪಂದಿಸಿದ ತಹಶೀಲ್ದಾರ್, ಅಗತ್ಯ ದಾಖಲೆಗಳನ್ನು ಇಲಾಖೆಯ ಜಾಲತಾಣಗಳಲ್ಲಿ ಪರಿಶೀಲಿಸಿ ಸೋಮವಾರವೇ ಒದಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರಸಭೆ ಪೌರಾಯುಕ್ತ ಎರಗುಡಿ ಶಿವಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಾರ್ವಜನಿಕರ ಕುಂದುಕೊರತೆಗಳಿಗೆ ತ್ವರಿತ ಪರಿಹಾರ ಕಲ್ಪಿಸಲು ಐಪಿಜಿಆರ್‌ಎಸ್ (IPGRS) ಪೋರ್ಟಲ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಆಲಂ ಪಾಷಾ, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮನೋಹರ್, ಲೋಕೋಪಯೋಗಿ ಇಲಾಖೆ ಅಧಿಕಾರಿ ರವಿಕುಮಾರ್, ಜೆಸ್ಕಾಂ ಎಇಇ ಜಾನ್ ಎಸ್ಲಿ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಂಜಿನಿಯರ್ ವಿಜಯಕುಮಾರ್, ತಾಲೂಕು ವೈದ್ಯಾಧಿಕಾರಿ ಡಾ. ವಿನೋದ್ ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.






