Vijayanagara | ದೀಪಾವಳಿಗೆ ಹಸಿರು ಪಟಾಕಿ ಬಳಸಿ, ಪರಿಸರ ಸಂರಕ್ಷಿಸಿ: ಡಿಸಿ ಕವಿತಾ ಎಸ್.ಮನ್ನಿಕೇರಿ

ವಿಜಯನಗರ (ಹೊಸಪೇಟೆ) : ದೀಪಾವಳಿ ಹಬ್ಬವನ್ನು ಸಾಂಪ್ರದಾಯಿಕವಾಗಿ ದೀಪಗಳನ್ನು ಬೆಳಗಿಸುವ ಮೂಲಕ ಸಂಭ್ರಮದಿಂದ ಆಚರಿಸಬೇಕು. ವಾಡಿಕೆಯಂತೆ ಪಟಾಕಿ ಸಿಡಿಸುವುದಾದರೆ ರಾಸಾಯನಿಕ ಪಟಾಕಿಗಳನ್ನು ಕೈಬಿಟ್ಟು, ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನು ಬಳಸಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಸಲಹೆ ನೀಡಿದ್ದಾರೆ.
2018ರ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ಆದೇಶದಂತೆ, ಸಿಎಸ್‌ಐಆರ್ ಮತ್ತು ಎನ್‌ಇಇಆರ್‌ಐ ಸಂಸ್ಥೆಗಳು ಶಿಫಾರಸು ಮಾಡಿರುವ ಹಾಗೂ ಸುಪ್ರೀಂ ಕೋರ್ಟ್‌ನ ಮಾರ್ಗಸೂಚಿಗಳ ಪ್ರಕಾರ ಪರಿಸರ ಸ್ನೇಹಿ ಪಟಾಕಿಗಳನ್ನು ಮಾತ್ರ ಕಡ್ಡಾಯವಾಗಿ ಬಳಸಬೇಕು. ಹಸಿರು ಪಟಾಕಿಗಳ ಮೇಲೆ ಹಾಗೂ ಅವುಗಳ ಪ್ಯಾಕೆಟ್‌ಗಳ ಮೇಲೆ ಹಸಿರು ಪಟಾಕಿಯ ಚಿಹ್ನೆ ಮತ್ತು ಕ್ಯೂಆರ್ ಕೋಡ್ ಇರುತ್ತದೆ. ಈ ಚಿಹ್ನೆ ಇಲ್ಲದ ಪಟಾಕಿಗಳನ್ನು ಹಸಿರು ಪಟಾಕಿಗಳೆಂದು ಪರಿಗಣಿಸಲಾಗುವುದಿಲ್ಲ. ಅಂತಹ ಪಟಾಕಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ಹಸಿರು ಪಟಾಕಿಗಳ ತಯಾರಕರು ಹಾಗೂ ಮಾರಾಟಗಾರರಿಗೆ ಮಾತ್ರ ಅನುಮತಿ ನೀಡಲಾಗಿದೆ. ಪಟಾಕಿ ಸಿಡಿಸುವ ಸಂದರ್ಭದಲ್ಲಿ ಪ್ರಾಣಿ, ಪಕ್ಷಿಗಳು, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕು. ಸುಪ್ರೀಂ ಕೋರ್ಟ್ ಆದೇಶದಂತೆ ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶವಿದೆ.
ಸ್ಥಳೀಯ ಆಸ್ಪತ್ರೆಗಳು, ಶಿಕ್ಷಣ ಸಂಸ್ಥೆಗಳ ಸುತ್ತಮುತ್ತ ಹಾಗೂ ನಿಷೇಧಿತ ಪ್ರದೇಶಗಳಲ್ಲಿ ಪಟಾಕಿ ಸಿಡಿಸುವಂತಿಲ್ಲ. ಸಾರ್ವಜನಿಕರು ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಹೊರರಾಜ್ಯಗಳಿಂದ ಅನಧಿಕೃತವಾಗಿ ನಿಷೇಧಿತ ಪಟಾಕಿಗಳು ಹಾಗೂ ಸಂಬಂಧಿತ ವಸ್ತುಗಳನ್ನು ಸಾಗಾಟ ಮಾಡುತ್ತಿರುವುದು ಕಂಡುಬಂದಲ್ಲಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ತಿಳಿಸಿದ್ದಾರೆ.






