ಚಡಚಣ | ಚಿರತೆ ಕಾಟ: ಸೆರೆ ಹಿಡಿಯಲು ಒತ್ತಾಯ

ಚಡಚಣ: ಚಡಚಣ ತಾಲೂಕಿನ ತದ್ದೇವಾಡಿ, ಮಣಕಂಲಗಿ, ಪ್ರದೇಶದ ವ್ಯಾಪ್ತಿಯಲ್ಲಿ ಕಳೆದ ಕೆಲ ದಿನಗಳಿಂದ ಚಿರತೆ ದಾಳಿಗೆ ಸಾಕು ಪ್ರಾಣಿಗಳು ಬಲಿಯಾಗುತ್ತಿದ್ದು, ಒಂದಾದ ಮೇಲೊಂದರಂತೆ ದನ, ಕರು, ಆಡು, ಕುರಿಗಳನ್ನು ಚಿರತೆ, ಕೊಂದು ಹಾಕುತ್ತಿರುವುದರಿಂದ ಈ ಭಾಗದ ಗ್ರಾಮಸ್ಥಗಳು ಆತಂಕಕ್ಕೊಳಗಾಗಿದ್ದಾರೆ.
ವರ್ಷಗಳ ಹಿಂದೆ ವ್ಯಕ್ತಿಯೊಬ್ಬರು ಕೂದಲೆಳೆಯ ಅಂತರದಿಂದ ಚಿರತೆ ದಾಳಿಯಿಂದ ಪಾರಾಗಿದ್ದಾರೆ. ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆ ಹಿಡಿಯಲು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಹಾಗೂ ಜಿಲ್ಲಾಧ್ಯಕ್ಷ ನಾಗೇಂದ್ರ ಬಿರಾದಾರ ಒತ್ತಾಯಿಸಿದ್ದಾರೆ.
ಅರಣ್ಯ ಇಲಾಖಾ ಅಧಿಕಾರಿಗಳು ಕೂಡಲೇ ಇತ್ತ ಗಮನ ಹರಿಸಿ ಸ್ಥಳ ಪರಿಶೀಲನೆ ನಡೆಸಿ ಚಿರತೆ ಹಿಡಿಯುವ ಬೋನನ್ನು ಇಟ್ಟು ಚಿರತೆ ಸೆರೆ ಹಿಡಿಯಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಸಂಘದ ವತಿಯಿಂದ ಅರಣ್ಯ ಇಲಾಖೆ ಕಚೇರಿಯ ಮುಂದೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಭಾಗದ ಜನರಿಗೆ ಉಪಟಳ ನೀಡುತ್ತಿರುವ ಚಿರತೆಯನ್ನು ಹಿಡಿದು ಬೇರೆಡೆಗೆ ಸ್ಥಳಾಂತರ ಮಾಡುವ ಮೂಲಕ ಈ ಭಾಗದ ಸಾಕು ಪ್ರಾಣೀಗಳ ಜೀವಕ್ಕೆ ಹಾನಿಯಾಗುವುದನ್ನು ತಪ್ಪಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.







