1,600 ಕೋಟಿ ರೂ. ಹೂಡಿಕೆಯ ರಿಲಯನ್ಸ್ ಉತ್ಪಾದನಾ ಘಟಕಕ್ಕೆ ಭೂಮಿಪೂಜೆ; ಭೂಮಿ ಕಳೆದುಕೊಂಡ ರೈತ ಕುಟುಂಬಗಳ ಯುವಕರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ : ಎಂ.ಬಿ.ಪಾಟೀಲ್

ವಿಜಯಪುರ : ಹಲವಾರು ಸವಾಲುಗಳ ನಡುವೆಯೂ ಉತ್ತರ ಕರ್ನಾಟಕ ಭಾಗದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಿ, ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ಸಂಕಲ್ಪದೊಂದಿಗೆ ವಿಜಯಪುರ ಜಿಲ್ಲೆಯಲ್ಲಿ ಕೈಗಾರಿಕಾ ಬೆಳವಣಿಗೆಗೆ ವೇಗ ನೀಡಲಾಗುತ್ತಿದೆ. ಜಿಲ್ಲೆಯಲ್ಲಿಯೇ 10ರಿಂದ 12 ಸಾವಿರ ಉದ್ಯೋಗಗಳನ್ನು ಸೃಷ್ಟಿಸುವ ಗುರಿ ಹೊಂದಲಾಗಿದ್ದು, ಕೈಗಾರಿಕಾ ಯೋಜನೆಗಳಿಗಾಗಿ ಭೂಮಿ ಕಳೆದುಕೊಂಡ ರೈತ ಕುಟುಂಬಗಳ ಯುವಕರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ, ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ್ ಹೇಳಿದರು.
ಕೊಲ್ಹಾರ ತಾಲೂಕಿನ ಮುಳವಾಡ ಕೈಗಾರಿಕಾ ಪ್ರದೇಶದಲ್ಲಿ ರಿಲಯನ್ಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್ ಲಿಮಿಟೆಡ್ ವತಿಯಿಂದ ಸುಮಾರು 1,600 ಕೋಟಿ ರೂ. ಹೂಡಿಕೆಯಲ್ಲಿ ಸ್ಥಾಪಿಸಲಾಗುತ್ತಿರುವ ಕ್ಯಾಂಪಾ ಕೋಲಾ ಉತ್ಪಾದನಾ ಘಟಕಕ್ಕೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಕೈಗಾರಿಕೆಗಳು ಕೇವಲ ಬೆಂಗಳೂರು ಸುತ್ತಮುತ್ತ ಸೀಮಿತವಾಗದೆ ಉತ್ತರ ಕರ್ನಾಟಕದ ವಿಜಯಪುರದಂತಹ ಜಿಲ್ಲೆಗಳಿಗೂ ವಿಸ್ತರಣೆಯಾಗಬೇಕು. ಸ್ಥಳೀಯ ಯುವಕರು ಉದ್ಯೋಗ ಅರಸಿ ದೂರದ ಊರುಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ಜಿಲ್ಲೆಯಲ್ಲಿಯೇ ಉದ್ಯೋಗ ದೊರಕಿಸುವ ಉದ್ದೇಶದಿಂದ ಹಲವು ಪ್ರತಿಷ್ಠಿತ ಕಂಪನಿಗಳನ್ನು ಜಿಲ್ಲೆಗೆ ಆಹ್ವಾನಿಸಲಾಗುತ್ತಿದೆ. ಆದರೆ, ಕೈಗಾರಿಕೆಗಳನ್ನು ಬೆಂಗಳೂರಿನ ಹೊರಭಾಗದಲ್ಲಿ ಸ್ಥಾಪಿಸುವ ಪ್ರಯತ್ನಕ್ಕೆ ಹೂಡಿಕೆದಾರರಿಂದ ನಿರೀಕ್ಷಿತ ಸ್ಪಂದನೆ ಸಿಗುತ್ತಿಲ್ಲ. ನಾವು 'ಬಿಯಾಂಡ್ ಬೆಂಗಳೂರು' ಎಂದು ಪ್ರಯತ್ನಿಸುತ್ತಿದ್ದರೆ, ಉದ್ಯಮಿಗಳು 'ಅರೌಂಡ್ ಬೆಂಗಳೂರು' ಎಂಬ ನಿಲುವು ಹೊಂದಿದ್ದಾರೆ. ತಮಿಳುನಾಡು, ಆಂಧ್ರಪ್ರದೇಶ, ಗುಜರಾತ್ ಸೇರಿದಂತೆ ವಿವಿಧ ರಾಜ್ಯಗಳು ಕಡಿಮೆ ಬೆಲೆಗೆ ಭೂಮಿ ಹಾಗೂ ಹೆಚ್ಚಿನ ಪ್ರೋತ್ಸಾಹಕ ಸೌಲಭ್ಯಗಳನ್ನು ನೀಡುತ್ತಿರುವುದು ಸವಾಲಾಗಿದೆ. ಇಂತಹ ಪರಿಸ್ಥಿತಿಯಲ್ಲಿಯೂ ಉತ್ತರ ಕರ್ನಾಟಕದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಪ್ರಯತ್ನ ಮುಂದುವರಿಸಲಾಗಿದೆ ಎಂದರು.
ರಿಲಯನ್ಸ್‌ನಂತಹ ಬೃಹತ್ ಸಂಸ್ಥೆಗಳು ಸ್ಥಳೀಯ ಯುವಕರಿಗೆ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನೀಡುವ ಬದಲು ನೇರವಾಗಿ ಕಾಯಂ ಹುದ್ದೆಗಳನ್ನು ಕಲ್ಪಿಸಬೇಕು ಎಂದು ಮನವಿ ಮಾಡಿದರು. ವಿಶೇಷವಾಗಿ ಕೈಗಾರಿಕಾ ಯೋಜನೆಗಳಿಗಾಗಿ ಭೂಮಿ ನೀಡಿದ ರೈತ ಕುಟುಂಬಗಳ ಯುವಕರಿಗೆ ಉದ್ಯೋಗದಲ್ಲಿ ಆದ್ಯತೆ ನೀಡಬೇಕು. ಸ್ಥಳೀಯ ನಿವಾಸಿಗಳಿಗೆ ಕಾಯಂ ಹುದ್ದೆಗಳಲ್ಲಿ ಹೆಚ್ಚಿನ ಪ್ರಾಶಸ್ತ್ಯ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಕೆಐಎಡಿಬಿ ಮೂಲಕ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಭಾಗಿಯಾದ ರೈತರಿಗೆ ಬಾಕಿ ಪರಿಹಾರ ನೀಡುವ ಕಾರ್ಯವನ್ನು ತ್ವರಿತಗೊಳಿಸಬೇಕು. ಈ ಸಂಬಂಧದ ಕಡತಗಳನ್ನು ಶೀಘ್ರ ವಿಲೇವಾರಿ ಮಾಡಿ, ಅರ್ಹ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಅಧ್ಯಕ್ಷತೆ ವಹಿಸಿದ್ದ ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ಮಾತನಾಡಿ, ಮುಳವಾಡದಲ್ಲಿ ರಿಲಯನ್ಸ್‌ನಂತಹ ಪ್ರತಿಷ್ಠಿತ ಸಂಸ್ಥೆಯ ಬೃಹತ್ ಕೈಗಾರಿಕಾ ಘಟಕ ಸ್ಥಾಪನೆಯಾಗುತ್ತಿರುವುದು ಈ ಭಾಗದ ಅಭಿವೃದ್ಧಿಯ ದೃಷ್ಟಿಯಿಂದ ಮಹತ್ವದ ಬೆಳವಣಿಗೆಯಾಗಿದೆ. ಹಿಂದೆ ಬಂಜರು ಭೂಮಿ ಎಂದು ಗುರುತಿಸಿಕೊಂಡಿದ್ದ ಈ ಪ್ರದೇಶದಲ್ಲಿ ಇಂದು ಕೈಗಾರಿಕಾ ಬೆಳವಣಿಗೆಯ ಕನಸು ನನಸಾಗುತ್ತಿದೆ ಎಂದರು.
ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಗಂಗಾಧರ ಸಂಬಣ್ಣಿ, ಮಾಜಿ ಶಾಸಕ ಪ್ರೊ. ರಾಜು ಆಲಗೂರ, ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರೀಫ್, ಕೆಐಎಡಿಬಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ, ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು, ರಿಲಯನ್ಸ್ ಇಂಡಸ್ಟ್ರೀಸ್‌ನ ಪ್ರಮುಖರಾದ ಅರ್ಪಣ್ ಬಸು, ಕೇತನ್ ಮೋದಿ, ದಾಮೋದರ್ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಉಪವಿಭಾಗಾಧಿಕಾರಿ ಜುಫಿಶಾನ್ ಹಕ್, ಡಾ. ಮಹಾಂತೇಶ ಬಿರಾದಾರ, ಸೋಮನಾಥ ಕಳ್ಳಿಮನಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು, ರೈತರು ಹಾಗೂ ಗಣ್ಯರು ಉಪಸ್ಥಿತರಿದ್ದರು.






