ವಿಜಯಪುರ : ಪ್ರವಾಹ ಪೀಡಿತ ಸ್ಥಳಗಳಿಗೆ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್ ಭೇಟಿ

ವಿಜಯಪುರ : ಭೀಮಾ ನದಿಯ ಪ್ರವಾಹ ಉಂಟಾದ ಆಲಮೇಲ ತಾಲ್ಲೂಕಿನ ದೇವರನಾವದಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುಮಸಗಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ತೆರೆಯಲಾದ ಕಾಳಜಿ ಕೇಂದ್ರಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ್ ಅವರು ರವಿವಾರ ಭೇಟಿ ನೀಡಿ ಪರಿಶೀಲಿಸಿದರು.
ಕಾಳಜಿ ಕೇಂದ್ರಗಳಲ್ಲಿ ಕಲ್ಪಿಸಿರುವ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದ ಅವರು, ಅಲ್ಲಿನ ಸಂತ್ರಸ್ತರೊಂದಿಗೆ ಮಾತನಾಡಿ ಅವರು, ʼಕಾಳಜಿ ಕೇಂದ್ರಗಳಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ. ಯಾರು ಸಹ ಭಯ ಪಡುವ ಅವಶ್ಯಕತೆ ಇಲ್ಲ. ಜಿಲ್ಲಾಡಳಿತ ನಿಮ್ಮ ಜೊತೆಗಿದ್ದು, ಪ್ರವಾಹ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಜಿಲ್ಲಾಡಳಿತ ಸನ್ನದ್ಧವಾಗಿದೆ. ಸಕಲ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಮನೆಗಳಿಗೆ ನೀರು ನುಗ್ಗಿದ ತಕ್ಷಣವೇ ಅಧಿಕಾರಿಗಳು ಕಾಳಜಿ ಕೇಂದ್ರಕ್ಕೆ ನಮ್ಮನ್ನು ಸ್ಥಳಾಂತರಿಸಿ ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸಿರುತ್ತಾರೆ ಎಂದು ಸಂತ್ರಸ್ತ ಕುಟುಂಬದರು ಸಮಾಧಾನ ವ್ಯಕ್ತಪಡಿಸಿದರು.
ಸಂತ್ರಸ್ತರಿಗೆ ಊಟೋಪಚಾರ ಹಾಗೂ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕುಮಸಗಿ ಗ್ರಾಮದ ಹತ್ತಿರ ಹರಿಯುವ ಭೀಮಾ ನದಿ ತೀರಕ್ಕೆ ಭೇಟಿ ನೀಡಿ, ಪ್ರವಾಹ ಪರಿಸ್ಥಿತಿಯ ಕುರಿತು ಅವಲೋಕಿಸಿದರು.
ಈ ಸಂದರ್ಭದಲ್ಲಿ ಶಾಸಕ ಅಶೋಕ ಮನಗೂಳಿ, ಜಿಲ್ಲಾಧಿಕಾರಿ ಡಾ.ಆನಂದ.ಕೆ, ಜಿಪಂ ಸಿಇಒ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಅಧಿಕಾರಿಗಳು ಉಪಸ್ಥಿತರಿದ್ದರು.







