ಪಂಚ ರಾಜ್ಯಗಳ ಚುನಾವಣೆ ಬಳಿಕ ಸಂಪುಟ ವಿಸ್ತರಣೆ ಸಾಧ್ಯತೆ : ಸಲೀಂ ಅಹ್ಮದ್

ವಿಜಯಪುರ : ಮೇ ತಿಂಗಳಲ್ಲಿ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಯಲಿದೆ. ಇದರ ಬಳಿಕ ಸಂಪುಟ ವಿಸ್ತರಣೆಯ ವಿಶ್ವಾಸ ಇದೆ ಎಂದು ವಿಧಾನ ಪರಿಷತ್ತಿನ ಕಾಂಗ್ರೆಸ್ ಮುಖ್ಯ ಸಚೇತಕ ಸಲೀಂ ಅಹ್ಮದ್ ತಿಳಿಸಿದರು.
ವಿಜಯಪುರದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚ ರಾಜ್ಯಗಳ ಚುನಾವಣೆ ನಂತರ ರಾಜ್ಯದ ಸಚಿವ ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದ್ದು, ಅದರಲ್ಲಿ ಶೇ.50ರಷ್ಟು ಹೊಸಬರಿಗೆ ಸಂಪುಟದಲ್ಲಿ ಅವಕಾಶ ಕೊಡಬೇಕು ಎಂಬ ಬೇಡಿಕೆ ಇದೆ ಎಂದರು.
ಮುಖ್ಯಮಂತ್ರಿಗಳ ಅಧಿಕಾರ ಹಂಚಿಕೆ ಹಾಗೂ ವಿಚಾರದಲ್ಲಿ ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ಮಾಡಲಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು 2.9 ವರ್ಷವಾಗಿದೆ. ನಮ್ಮ ಸರಕಾರ ನುಡಿದಂತೆ ನಡೆದಿದೆ. ಐದು ಗ್ಯಾರಂಟಿಗಳ ಅನುಷ್ಠಾನದೊಂದಿಗೆ ಆರನೇ ಗ್ಯಾರಂಟಿಯಾಗಿ 2.20 ಲಕ್ಷ ಜನರಿಗೆ ಹಕ್ಕು ಪತ್ರಗಳ ವಿತರಣೆ ಮಾಡಲಾಗಿದೆ ಎಂದರು.
ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು 12 ವರ್ಷಗಳಾಗಿವೆ. ಆದರೆ, ಬಿಜೆಪಿ ಸರಕಾರ ಮಾತಿಗೆ ತಪ್ಪಿದ ಸರಕಾರವಾಗಿದೆ. 15 ಲಕ್ಷ ರೂ. ಕೊಡಲಿಲ್ಲ, 2 ಕೋಟಿ ಉದ್ಯೋಗ ಸೃಷ್ಟಿ ಮಾಡಲಿಲ್ಲ. ಬೆಲೆ ಏರಿಕೆ ನಿಯಂತ್ರಣ ಮಾಡಲಿಲ್ಲ. ಹೀಗಾಗಿ ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಯವರಿಗೆ ಇಲ್ಲ ಎಂದರು.
ಈ ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಮಲ್ಲಿಕಾರ್ಜುನ ಲೋಣಿ, ಅಬ್ದುಲ್ ಹಮೀದ್ ಮುಶ್ರೀಫ್, ಎಸ್.ಎಂ.ಪಾಟೀಲ ಗಣಿಹಾರ, ರಫೀಕ್ ಟಾಪಲ್, ವಸಂತ ಹೊನಮೋಡೆ ಇದ್ದರು.




