ವಿಜಯಪುರ : 3 ವರ್ಷದ ಮಗುವಿನ ಮೇಲೆ ಬೀದಿನಾಯಿ ದಾಳಿ

ವಿಜಯಪುರ: ಮನೆ ಮುಂದೆ ಆಟವಾಡುತ್ತಿದ್ದ ಮೂರು ವರ್ಷದ ಮಗುವಿನ ಮೇಲೆ ಬೀದಿನಾಯಿ ಎರಗಿ ಗಾಯಗೊಳಿಸಿದ ಘಟನೆ ಮಂಗಳವಾರ ನಡೆದಿದೆ.
ನಗರದ ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ಸಂ.35ರ ಫೇವರಚಂದ ಕಾಲನಿಯ ರಾಜಕುಮಾರ ಲೇಔಟ್ ನಲ್ಲಿ 3 ವರ್ಷದ ವಿರಾಜ್ ಸಂತೋಷ ಬಿರಾದಾರ ಮೇಲೆ ಬೀದಿನಾಯಿ ದಾಳಿ ಮಾಡಿ, ಸುಮಾರು 100 ಅಡಿದೂರ ಎಳೆದೊಯ್ದಿದೆ.
ಮಗುವಿನ ಬೆನ್ನು ಮತ್ತು ತೊಡೆಯ ಭಾಗಕ್ಕೆ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ
ಆಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಡಾ. ಆನಂದ ಕೆ. ಮಗುವಿನ ಆರೋಗ್ಯ ವಿಚಾರಿಸಿ, ಸೂಕ್ತ ಚಿಕಿತ್ಸೆ ನೀಡಲು ವೈದ್ಯರಿಗೆ ಸಲಹೆ ಮಾಡಿದರು.
ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಜಿಲ್ಲಾಧಿಕಾರಿ, ಮಗು ಚೇತರಿಸಿಕೊಳ್ಳುತ್ತಿದೆ ಎಂದು ತಿಳಿಸಿದರು.
ರಾಜ್ ಕುಮಾರ ಬಡಾವಣೆಯಲ್ಲಿ ಬೀದಿನಾಯಿಗಳ ಹಾವಳಿ ಅಧಿಕವಾಗಿದ್ದು, ಅವುಗಳನ್ನು ಹಿಡಿದು ಪಾಲಿಕೆಯಿಂದ ಪುನರ್ ವ್ಯವಸ್ಥೆ (ಡಾಗ್ ಶೆಲ್ಟರ್) ಕಲ್ಪಿಸಲಾಗುವುದು. ಈ ಕುರಿತು ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯ ರಾಜು ಕುರಿಯವರ, ಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣವರ ಉಪಸ್ಥಿತರಿದ್ದರು.






