Vijayapura | ಗ್ಯಾಸ್ ಕಟರ್ ಬಳಸಿ ಎಟಿಎಂ ದರೋಡೆ; 19 ಲಕ್ಷ ರೂ. ದೋಚಿ ಪರಾರಿ!

ವಿಜಯಪುರ : ಮನಗೂಳಿ ಹಾಗೂ ಚಡಚಣ ಬ್ಯಾಂಕ್ ದರೋಡೆ ಪ್ರಕರಣಗಳ ನೆನಪು ಮಾಸುವ ಮುನ್ನವೇ ವಿಜಯಪುರ ಜಿಲ್ಲೆಯಲ್ಲಿ ಮತ್ತೊಂದು ದರೋಡೆ ನಡೆದಿದೆ. ನಿಡಗುಂದಿ ತಾಲೂಕಿನ ಗೊಳಸಂಗಿ ಗ್ರಾಮದಲ್ಲಿದ್ದ ಕೆನರಾ ಬ್ಯಾಂಕ್ ಎಟಿಎಂಗೆ ಗ್ಯಾಸ್ ಕಟರ್ ಬಳಸಿ ಕನ್ನ ಹಾಕಿರುವ ದುಷ್ಕರ್ಮಿಗಳು ಸುಮಾರು 19.29 ಲಕ್ಷ ರೂ. ನಗದನ್ನು ದೋಚಿಕೊಂಡು ಪರಾರಿಯಾಗಿರುವುದಾಗಿ ವರದಿಯಾಗಿದೆ.
ರಾತ್ರಿ ವೇಳೆ ಮುಖಕ್ಕೆ ಮಾಸ್ಕ್ ಧರಿಸಿ ಎಟಿಎಂ ಕೇಂದ್ರಕ್ಕೆ ನುಗ್ಗಿದ್ದ ದುಷ್ಕರ್ಮಿಗಳು, ಗ್ಯಾಸ್ ಕಟರ್ ಬಳಸಿ ಎಟಿಎಂ ಯಂತ್ರವನ್ನು ತುಂಡರಿಸಿದ್ದಾರೆ. ಬಳಿಕ ಯಂತ್ರದಲ್ಲಿದ್ದ ಸುಮಾರು 19.29 ಲಕ್ಷ ರೂ. ದೋಚಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆ ಬೆಳಕಿಗೆ ಬರುತ್ತಿದ್ದಂತೆ ನಿಡಗುಂದಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಶರಣಗೌಡ ಗೌಡರ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬ್ಯಾಂಕ್ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಕಳವಾಗಿರುವ ಹಣದ ವಿವರ ಹಾಗೂ ಘಟನೆಗೆ ಸಂಬಂಧಿಸಿದಂತೆ ಮಾಹಿತಿ ಸಂಗ್ರಹಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ನಿಡಗುಂದಿ ಠಾಣೆ ಪೊಲೀಸರು, ಎಟಿಎಂ ಹಾಗೂ ಬ್ಯಾಂಕ್ ಆವರಣದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ದುಷ್ಕರ್ಮಿಗಳನ್ನು ಪತ್ತೆಹಚ್ಚಲು ಬಲೆ ಬೀಸಿದ್ದಾರೆ.






