12 ದಿನಗಳಲ್ಲಿ 800 ಟನ್ ಪ್ಲಾಸ್ಟಿಕ್ ತ್ಯಾಜ್ಯ ವಿಲೇವಾರಿ; ಪ್ಲಾಸ್ಟಿಕ್ ಮುಕ್ತ ಯಾದಗಿರಿಗೆ ನಗರಸಭೆ ಸಂಕಲ್ಪ

ಯಾದಗಿರಿ, ಸೆ.20: ನಗರಸಭೆ ವ್ಯಾಪ್ತಿಯ ಮನೆಗಳು, ವಾಣಿಜ್ಯ ಅಂಗಡಿಗಳು ಹಾಗೂ ಇತರ ಸ್ಥಳಗಳಿಂದ ಸಂಗ್ರಹಿಸಲಾಗಿದ್ದ ಮರುಬಳಕೆಗೆ ಯೋಗ್ಯವಲ್ಲದ ಸುಮಾರು 800 ಟನ್ ಪ್ಲಾಸ್ಟಿಕ್ ತ್ಯಾಜ್ಯವನ್ನು ಜಿಲ್ಲಾಧಿಕಾರಿಗಳ ಆದೇಶದಂತೆ ಟೆಂಡರ್ ಪ್ರಕ್ರಿಯೆ ಮೂಲಕ ಶ್ರೀ ಸಿಮೆಂಟ್ ಕಾರ್ಖಾನೆಗೆ ನಿಯಮಾನುಸಾರ ವಿಲೇವಾರಿ ಮಾಡಲಾಗಿದೆ ಎಂದು ನಗರಸಭೆ ಪೌರಾಯುಕ್ತ ಉಮೇಶ್ ಚವ್ಹಾಣ ತಿಳಿಸಿದ್ದಾರೆ.
ವಡಗೇರಾ ತಾಲೂಕಿನ ಬಬಲಾದ ಗ್ರಾಮದ ಹೊರವಲಯದಲ್ಲಿರುವ ಘನ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಕಳೆದ ಸುಮಾರು 10 ವರ್ಷಗಳಿಂದ ಘಟಕದಲ್ಲಿ ಮರುಬಳಕೆಗೆ ಯೋಗ್ಯವಲ್ಲದ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹವಾಗಿತ್ತು. ಮನೆಮನೆ, ಅಂಗಡಿ ಹಾಗೂ ಇತರೆ ಸ್ಥಳಗಳಿಂದ ಸಂಗ್ರಹಿಸಿದ ಹಸಿ ಮತ್ತು ಒಣ ಕಸವನ್ನು ವಿಂಗಡಿಸಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಪ್ರತ್ಯೇಕವಾಗಿ ಸಂಗ್ರಹಿಸಲಾಗುತ್ತಿತ್ತು. ಇದೀಗ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಟೆಂಡರ್ ಮೂಲಕ ಯಾವುದೇ ವೆಚ್ಚವಿಲ್ಲದೆ ಈ ಪ್ಲಾಸ್ಟಿಕ್ ತ್ಯಾಜ್ಯವನ್ನು ವಿಲೇವಾರಿ ಮಾಡಲಾಗಿದೆ ಎಂದು ತಿಳಿಸಿದರು.
ಸಿಮೆಂಟ್ ಕಾರ್ಖಾನೆಯಲ್ಲಿ ಪರ್ಯಾಯ ಇಂಧನವಾಗಿ ಬಳಕೆ :
ಮರುಬಳಕೆಗೆ ಯೋಗ್ಯವಲ್ಲದ ಹಾಗೂ ಕಡಿಮೆ ಮೌಲ್ಯದ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಿಮೆಂಟ್ ಕಾರ್ಖಾನೆಗಳಲ್ಲಿ ಕಲ್ಲಿದ್ದಲಿಗೆ ಪರ್ಯಾಯ ಇಂಧನವಾಗಿ ಬಳಸಲಾಗುತ್ತದೆ ಎಂದು ಪೌರಾಯುಕ್ತರು ಮಾಹಿತಿ ನೀಡಿದರು.
ಪ್ಲಾಸ್ಟಿಕ್ ಮುಕ್ತ ಯಾದಗಿರಿಗೆ ನಗರಸಭೆ ಸಂಕಲ್ಪ :
ನಿಷೇಧಿತ ಪ್ಲಾಸ್ಟಿಕ್ ಬಳಕೆಯನ್ನು ತಡೆಯಲು ನಗರಸಭೆ ಈಗಾಗಲೇ ದಾಳಿ ನಡೆಸಿ ಪ್ಲಾಸ್ಟಿಕ್ ಜಪ್ತಿ ಮಾಡುವುದು ಹಾಗೂ ದಂಡ ವಿಧಿಸುವ ಕ್ರಮ ಕೈಗೊಳ್ಳುತ್ತಿದೆ. ಪ್ಲಾಸ್ಟಿಕ್ ಬಳಕೆಯಿಂದ ಆರೋಗ್ಯ ಮತ್ತು ಪರಿಸರದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ನಿರಂತರ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.
ಪ್ಲಾಸ್ಟಿಕ್ ಬದಲಾಗಿ ಬಟ್ಟೆ ಚೀಲಗಳು ಹಾಗೂ ಪರಿಸರ ಸ್ನೇಹಿ ಪರ್ಯಾಯ ವಸ್ತುಗಳನ್ನು ಬಳಸುವಂತೆ ಸಾರ್ವಜನಿಕರು ಮತ್ತು ವ್ಯಾಪಾರಸ್ಥರಿಗೆ ಅವರು ಮನವಿ ಮಾಡಿದರು.
ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಿ :
ಅತಿಯಾದ ಪ್ಲಾಸ್ಟಿಕ್ ಬಳಕೆಯಿಂದ ಪರಿಸರ, ಜಲಚರಗಳು, ಜಾನುವಾರುಗಳು ಮತ್ತು ಮಾನವ ಆರೋಗ್ಯದ ಮೇಲೆ ಗಂಭೀರ ದುಷ್ಪರಿಣಾಮ ಉಂಟಾಗುತ್ತಿದೆ. ಜಾನುವಾರುಗಳು ಪ್ಲಾಸ್ಟಿಕ್ ಸೇವಿಸಿ ಸಾವನ್ನಪ್ಪುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಆದ್ದರಿಂದ ಸಾರ್ವಜನಿಕರು ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಿ, ಪ್ಲಾಸ್ಟಿಕ್ ಮುಕ್ತ ಯಾದಗಿರಿ ನಗರ ನಿರ್ಮಾಣಕ್ಕೆ ಸಹಕರಿಸಬೇಕು ಎಂದು ನಗರಸಭೆ ಪೌರಾಯುಕ್ತ ಉಮೇಶ್ ಚವ್ಹಾಣ ಮನವಿ ಮಾಡಿದ್ದಾರೆ.






