ನಕಲಿ ಅಗ್ನಿ ಸುರಕ್ಷತಾ ಪ್ರಮಾಣಪತ್ರ ಬಳಕೆ ಆರೋಪ; ಯಾದಗಿರಿಯ ಐದು ಶಿಕ್ಷಣ ಸಂಸ್ಥೆಗಳ ವಿರುದ್ಧ ಪ್ರಕರಣ ದಾಖಲು

ಯಾದಗಿರಿ: ನಕಲಿ ಅಗ್ನಿ ಸುರಕ್ಷತಾ ಸಲಹಾ ಹಾಗೂ ಸಮಾಪನಾ ಪ್ರಮಾಣಪತ್ರಗಳನ್ನು ಸೃಷ್ಟಿಸಿ ಬಳಕೆ ಮಾಡಿದ ಆರೋಪದಡಿ ಯಾದಗಿರಿಯ ಐದು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ವಿರುದ್ಧ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ಜಿಲ್ಲಾ ಅಗ್ನಿಶಾಮಕ ಅಧಿಕಾರಿ ವಿರೇಶ ಉಕ್ಕಡದ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ಅಗ್ನಿ ಸುರಕ್ಷತಾ ಪ್ರಮಾಣಪತ್ರಗಳು ನಕಲಿಯಾಗಿರುವುದು ಬೆಳಕಿಗೆ ಬಂದಿದೆ.
ಏನಿದು ಪ್ರಕರಣ? :
ಶಾಲಾ ಶಿಕ್ಷಣ ಇಲಾಖೆಗೆ ಸಲ್ಲಿಸಲಾಗಿದ್ದ ಅಗ್ನಿ ಸುರಕ್ಷತಾ ಪ್ರಮಾಣಪತ್ರಗಳ ನೈಜತೆ ಪರಿಶೀಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಅಗ್ನಿಶಾಮಕ ಇಲಾಖೆಗೆ ಪತ್ರ ಬಂದಿತ್ತು. ಅದರಂತೆ ಜಿಲ್ಲಾ ಹಾಗೂ ಮುಖ್ಯ ಅಗ್ನಿಶಾಮಕ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸಿದಾಗ, ಶುಭಂ ಪಿಯು ಕಾಲೇಜು, ಶ್ರೀಹರಿ ಇಂಡಿಪೆಂಡೆಂಟ್ ಪಿಯು ಕಾಲೇಜು, ಡಿಡಿಯು ಹೆಚ್‌ಪಿಎಸ್, ಹೆಚ್‌ಎಸ್ ಶಿಕ್ಷಣ ಸಂಸ್ಥೆ ಹಾಗೂ ವಿಜಿನ್ ಪಿಯು ಕಾಲೇಜುಗಳಿಗೆ ಸಂಬಂಧಿಸಿದ ಅಗ್ನಿ ಸುರಕ್ಷತಾ ಪ್ರಮಾಣಪತ್ರಗಳು ನಕಲಿಯಾಗಿರುವುದು ಪ್ರಾಥಮಿಕ ತನಿಖೆಯಲ್ಲಿ ಪತ್ತೆಯಾಗಿದೆ.
ಬಳಿಕ ಈ ಕುರಿತು ಕೇಂದ್ರ ಕಚೇರಿಗೆ ವರದಿ ಸಲ್ಲಿಸಲಾಗಿದ್ದು, ಅಲ್ಲಿಯೂ ಪ್ರಮಾಣಪತ್ರಗಳು ನಕಲಿಯಾಗಿರುವುದು ದೃಢಪಟ್ಟಿದೆ. ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾನಿರ್ದೇಶಕರ ನಿರ್ದೇಶನದಂತೆ ಸಂಬಂಧಪಟ್ಟ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ.
ಈ ಸಂಬಂಧ ಶುಭಂ ಪಿಯು ಕಾಲೇಜು ಹಾಗೂ ಶ್ರೀಹರಿ ಇಂಡಿಪೆಂಡೆಂಟ್ ಪಿಯು ಕಾಲೇಜಿನ ಅಧ್ಯಕ್ಷರ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದರೆ, ಡಿಡಿಯು ಹೆಚ್‌ಪಿಎಸ್, ಹೆಚ್‌ಎಸ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಹಾಗೂ ವಿಜಿನ್ ಪಿಯು ಕಾಲೇಜಿನ ಪ್ರಾಂಶುಪಾಲರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಅಡಿಯಲ್ಲಿ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.






