ಕೇಂದ್ರ ಸರಕಾರ ತಕ್ಷಣ ಬರ ಪರಿಹಾರದ ಹಣ ಬಿಡುಗಡೆ ಮಾಡಲಿ : ಶಾಸಕ ಚೆನ್ನಾರೆಡ್ಡಿ ಪಾಟೀಲ್ ಒತ್ತಾಯ

ಯಾದಗಿರಿ: ರಾಜ್ಯದಲ್ಲಿ ಮಳೆ ಕೊರತೆಯಿಂದ ಬೆಳೆಗಳು ಒಣಗಿ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ತನ್ನ ಪಾಲಿನ ಬರ ಪರಿಹಾರದ ಶೇ.50ರಷ್ಟು ಹಣವನ್ನು ತಕ್ಷಣ ರಾಜ್ಯಕ್ಕೆ ಬಿಡುಗಡೆ ಮಾಡಬೇಕು ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಆಗ್ರಹಿಸಿದರು.
ಗುರುವಾರ ನಡೆದ ವಿಶೇಷ ಅಧಿವೇಶನದಲ್ಲಿ ಬರ ಪರಿಸ್ಥಿತಿ ಕುರಿತು ಮಾತನಾಡಿದ ಅವರು, ರಾಜ್ಯ ಸರ್ಕಾರ ಈಗಾಗಲೇ 178 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದು, ಪರಿಸ್ಥಿತಿ ಮುಂದುವರಿದರೆ ಇನ್ನೂ 50ಕ್ಕೂ ಹೆಚ್ಚು ತಾಲೂಕುಗಳನ್ನು ಸೇರಿಸಬೇಕಾದ ಪರಿಸ್ಥಿತಿ ಉಂಟಾಗಬಹುದು ಎಂದು ಹೇಳಿದರು.
ಸುಮಾರು 40 ಲಕ್ಷ ಹೆಕ್ಟೇರ್ ಬೆಳೆ ಹಾನಿಗೊಳಗಾಗಿದ್ದು, ರೈತರಿಗೆ ಪರಿಹಾರ ನೀಡಲು ಹೆಚ್ಚಿನ ಅನುದಾನದ ಅಗತ್ಯವಿದೆ. ಆದ್ದರಿಂದ ಕೇಂದ್ರ ಸರ್ಕಾರ ತನ್ನ ಪಾಲಿನ ಪರಿಹಾರವನ್ನು ಶೀಘ್ರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ರಾಜ್ಯದ ಬರ ಪರಿಸ್ಥಿತಿಯನ್ನು ವಿವರಿಸಲು ಸರ್ವಪಕ್ಷಗಳ ನಿಯೋಗವನ್ನು ಕೇಂದ್ರ ಸರ್ಕಾರದ ಬಳಿಗೆ ಕರೆದೊಯ್ಯಬೇಕು. ಅಲ್ಲಿನ ಅಧಿಕಾರಿಗಳಿಗೆ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡಬೇಕು ಎಂದು ಅವರು ಹೇಳಿದರು.
2023ನೇ ಸಾಲಿನ ಬಾಕಿ ಇರುವ ಬೆಳೆ ವಿಮೆ ಪರಿಹಾರದ ಹಣವನ್ನೂ ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ ಅವರು, ಬರಗಾಲ ಘೋಷಣೆಗೆ ಸಂಬಂಧಿಸಿದ ಎನ್‌ಡಿಆರ್‌ಎಫ್ ನಿಯಮಗಳನ್ನು ಸಡಿಲಗೊಳಿಸಿ ರೈತರಿಗೆ ತುರ್ತು ನೆರವು ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.
ಕೇಂದ್ರದ ಪರಿಶೀಲನಾ ತಂಡ ರಾಜ್ಯಕ್ಕೆ ಭೇಟಿ ನೀಡಿದಾಗ ವಾಸ್ತವ ಪರಿಸ್ಥಿತಿಯನ್ನು ಅಧ್ಯಯನ ಮಾಡಿ ರೈತರಿಗೆ ನ್ಯಾಯಸಮ್ಮತ ಪರಿಹಾರ ನೀಡಬೇಕು. ಈ ಪ್ರಕ್ರಿಯೆಯಲ್ಲಿ ರೈತರಿಗೆ ಯಾವುದೇ ಅನ್ಯಾಯವಾಗಬಾರದು ಎಂದು ಹೇಳಿದರು.
ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ರಾಜ್ಯ ಸರ್ಕಾರವು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತಲಾ 1 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಅದರ ಜೊತೆಗೆ ನಗರಸಭೆಗಳಿಗೆ ಹೆಚ್ಚುವರಿ ಅನುದಾನ ನೀಡಬೇಕು ಹಾಗೂ ಬೋರ್‌ವೆಲ್ ಕೊರೆಯಲು ಅಗತ್ಯ ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ರೈತರು ಹಾಗೂ ಮಹಿಳೆಯರು ಹೈನುಗಾರಿಕೆ ಕೈಗೊಳ್ಳಲು ವಿಶೇಷ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ ಅವರು, ಅಧಿವೇಶನದಲ್ಲಿ ಪ್ರತಿಪಕ್ಷಗಳ ಟೀಕೆಗಳಿಗೆ ಪ್ರತಿಕ್ರಿಯಿಸಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.






