ಹುಣಸಗಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ರೈತ ಸಂಘ ಮನವಿ

ಹುಣಸಗಿ: ನಾರಾಯಣಪೂರ ಬಸವಸಾಗರ ಜಲಾಶಯದಿಂದ ಹಳ್ಳ-ಕೆರೆಗಳಿಗೆ ನೀರು ಹರಿಸುವುದು ಹಾಗೂ ಹುಣಸಗಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಚೂನಪ್ಪ ಪೂಜಾರಿ ಬಣ) ತಾಲೂಕು ಸಮಿತಿ ಅಧ್ಯಕ್ಷ ಬಸವರಾಜ ಜಡಜಲಿ ನೇತೃತ್ವದಲ್ಲಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿ ಒತ್ತಾಯಿಸಲಾಯಿತು.
ಮುಂಗಾರು ಮಳೆ ಕೊರತೆಯಿಂದ ತಾಲೂಕಿನಲ್ಲಿ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಅಲ್ಪ ಪ್ರಮಾಣದಲ್ಲಿ ಬಿತ್ತನೆ ಮಾಡಿರುವ ಸಜ್ಜೆ, ಸೂರ್ಯಕಾಂತಿ, ಹತ್ತಿ ಹಾಗೂ ತೊಗರಿ ಬೆಳೆಗಳು ಒಣಗುವ ಸ್ಥಿತಿಗೆ ತಲುಪಿವೆ ಎಂದು ಆಗ್ರಹಿಸಿದರು. ಬಸವಸಾಗರ ಜಲಾಶಯದಿಂದ ಹಳ್ಳ-ಕೆರೆಗಳಿಗೆ ನೀರು ಹರಿಸಿ ಪ್ರಾಣಿ-ಪಕ್ಷಿಗಳು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದರು.
ತಾಲೂಕಿನ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳು ಸುಟ್ಟು ತಿಂಗಳು ಕಳೆದರೂ ಬದಲಾವಣೆ ಮಾಡಿಲ್ಲ. ಇದರಿಂದ ರೈತರು ಬೆಳೆಗಳಿಗೆ ನೀರುಣಿಸಲು ಸಾಧ್ಯವಾಗದೆ ತೊಂದರೆ ಅನುಭವಿಸುತ್ತಿದ್ದು, ತಕ್ಷಣ ಹೊಸ ಟಿ.ಸಿ.ಗಳನ್ನು ಅಳವಡಿಸಬೇಕು ಎಂದು ಕಿಡಿಕಾರಿದರು. ರೈತರಿಗೆ ಏಳು ಗಂಟೆಗಳ ತ್ರಿಫೇಸ್ ವಿದ್ಯುತ್ ಪೂರೈಕೆ ಆಗುತ್ತಿಲ್ಲ. ಮಳೆ ಕೊರತೆ ಮತ್ತು ವಿದ್ಯುತ್ ಸಮಸ್ಯೆಯಿಂದ ಬೆಳೆಗಳು ಹಾನಿಯಾಗುತ್ತಿರುವ ಹಿನ್ನೆಲೆ ಹುಣಸಗಿ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸುವಂತೆ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಮನವಿ ಮಾಡಿದ್ದಾರೆ.
ಬರ ಪರಿಸ್ಥಿತಿಯಿಂದ ಗ್ರಾಮೀಣ ಪ್ರದೇಶದ ಜನರು ಉದ್ಯೋಗ ಅರಸಿ ವಲಸೆ ಹೋಗಲು ಆರಂಭಿಸಿರುವುದರಿಂದ, ಜಿರಾಮ್ ಜಿ ಉದ್ಯೋಗ ಖಾತ್ರಿ ಯೋಜನೆಯಡಿ ಎಲ್ಲ ಗ್ರಾಮಗಳಲ್ಲಿ ಸಮರ್ಪಕವಾಗಿ ಕೆಲಸ ಒದಗಿಸಿ, ಎಲ್ಲ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ತುರ್ತು ಸಭೆ ನಡೆಸಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭ ಜಿಲ್ಲಾ ಕಾರ್ಯಾಧ್ಯಕ್ಷ ರಾಜಶಂಕರ ದೇಸಾಯಿ, ಶಂಕರನಾಯಕ ಜಾದವ್, ಸಿದ್ದು ಮೇಟಿ, ಅಂಬ್ರೇಶಗೌಡ ಬಿರಾದಾರ, ದ್ಯಾಮಣ್ಣ ಗುಜ್ಜಲ್, ಹಣಮಂತ್ರಾಯಗೌಡ, ರಾಮನಗೌಡ, ರಾಜು ಖಾಜಿ, ಮೌನೇಶ್ ಬಳ್ಳೂರಗಿ, ಕಾಶೀಮಸಾಬ, ಸೋಮು ಹೊರಟ್ಟಿ ಸೇರಿದಂತೆ ಅನೇಕರು ಇದ್ದರು.






