ಹುಣಸಗಿ | ವಾರ ಬಂದಿ ರದ್ದುಗೊಳಿಸಿ ನ.30ರವರೆಗೆ ನಿರಂತರ ನೀರು ಹರಿಸಲು ಆಗ್ರಹಿಸಿ ರೈತರ ಪ್ರತಿಭಟನೆ

ಹುಣಸಗಿ: ನಾರಾಯಣಪುರದ ಬಸವಸಾಗರ ಜಲಾಶಯದಿಂದ ಕೃಷ್ಣಾ ಎಡದಂಡೆ ಹಾಗೂ ಬಲದಂಡೆ ಕಾಲುವೆಗಳಿಗೆ ವಾರ ಬಂದಿ ಪದ್ಧತಿಯನ್ನು ರದ್ದುಗೊಳಿಸಿ, ನವೆಂಬರ್ 30ರವರೆಗೆ ನಿರಂತರವಾಗಿ ನೀರು ಹರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಯ ವತಿಯಿಂದ ನೂರಾರು ರೈತರು ಪ್ರತಿಭಟನೆ ನಡೆಸಿದರು.
ಸಂಘಟನೆಯ ಜಿಲ್ಲಾಧ್ಯಕ್ಷ ಮಲ್ಲನಗೌಡ ಹಗರಟಗಿ ಅವರ ನೇತೃತ್ವದಲ್ಲಿ ನಾರಾಯಣಪುರದಲ್ಲಿರುವ ಕೆಬಿಜೆಎನ್‌ಎಲ್‌ನ ಮುಖ್ಯ ಅಭಿಯಂತರರ ಕಚೇರಿಗೆ ಮುತ್ತಿಗೆ ಹಾಕಿ ರೈತರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮುಖ್ಯ ಅಭಿಯಂತರರ ಕಚೇರಿಗೆ ಬೀಗ ಹಾಕಲು ರೈತರು ಮುಂದಾದಾಗ ಪೊಲೀಸರು ಮತ್ತು ರೈತರ ನಡುವೆ ಮಾತಿನ ಚಕಮಕಿ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಮಲ್ಲನಗೌಡ ಹಗರಟಗಿ, ರೈತರ ಲಕ್ಷಾಂತರ ಎಕರೆ ಜಮೀನಿನಲ್ಲಿ ಬೆಳೆದಿರುವ ಕೋಟ್ಯಂತರ ರೂಪಾಯಿ ಮೌಲ್ಯದ ಬೆಳೆಗಳು ನೀರಿಲ್ಲದೆ ಒಣಗಿ ಹಾಳಾಗುತ್ತಿವೆ. ನವೆಂಬರ್ 30ರವರೆಗೆ ನಿರಂತರವಾಗಿ ನೀರು ಹರಿಸುವಂತೆ ಸರ್ಕಾರಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರೂ ರೈತರ ಸಮಸ್ಯೆಯನ್ನು ಅರ್ಥಮಾಡಿಕೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಕುರಿತು ಹುಣಸಗಿಯಿಂದ ಪಾದಯಾತ್ರೆ ನಡೆಸಿ ಮನವಿಯನ್ನೂ ಸಲ್ಲಿಸಲಾಗಿದೆ. ವಾರ ಬಂದಿ ಪದ್ಧತಿಯನ್ನು ಅನುಸರಿಸಿದರೆ ಕಾಲುವೆಗಳ ಕೊನೆಯ ಭಾಗದಲ್ಲಿರುವ ರೈತರ ಜಮೀನುಗಳಿಗೆ ನೀರು ತಲುಪುವುದಿಲ್ಲ. ಇದರಿಂದ ಈಗಾಗಲೇ ಬೆಳೆದಿರುವ ಬೆಳೆಗಳು ಹಾಳಾಗಿ, ರೈತರು ದೊಡ್ಡ ಪ್ರಮಾಣದ ನಷ್ಟ ಅನುಭವಿಸಬೇಕಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.
ರೈತರ ಸಂಕಷ್ಟವನ್ನು ಅರ್ಥಮಾಡಿಕೊಂಡು ಸರ್ಕಾರ ಕೂಡಲೇ ವಾರ ಬಂದಿ ಪದ್ಧತಿಯನ್ನು ಕೈಬಿಟ್ಟು, ನವೆಂಬರ್ 30ರವರೆಗೆ ಕಾಲುವೆಗಳಿಗೆ ನಿರಂತರವಾಗಿ ನೀರು ಹರಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ವಿವಿಧ ಪದಾಧಿಕಾರಿಗಳು, ನೂರಾರು ರೈತರು ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.






