ಹುಣಸಗಿ | ಮಕ್ಕಳು ದೇಶದ ಸಂಪತ್ತು, ಅವರಿಗೆ ಉತ್ತಮ ಶಿಕ್ಷಣ ಮತ್ತು ಸಂಸ್ಕಾರ ನೀಡಿ: ಮುರಿಗೆಣ್ಣ ದೇಸಾಯಿ
ಮಕ್ಕಳ ದಿನಾಚರಣೆ ಕಾರ್ಯಕ್ರಮ

ಹುಣಸಗಿ: ಮಕ್ಕಳು ಈ ದೇಶದ ಸಂಪತ್ತಾಗಿದ್ದು, ಚಿಕ್ಕ ವಯಸ್ಸಿನಲ್ಲಿಯೇ ಅವರಿಗೆ ಉತ್ತಮ ಶಿಕ್ಷಣ ಮತ್ತು ಸಂಸ್ಕಾರ ನೀಡಿದಾಗ ಅವರು ಭವ್ಯ ಭಾರತದ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳುತ್ತಾರೆ ಎಂದು ಸ್ಪಂದನ ಪಬ್ಲಿಕ್ ಸ್ಕೂಲ್ ಅಧ್ಯಕ್ಷ ಮುರಿಗೆಣ್ಣ ದೇಸಾಯಿ ಹೇಳಿದರು.
ಪಟ್ಟಣದ ಯುಕೆಪಿ ಕ್ಯಾಂಪಿನ ಸ್ಪಂದನ ಪಬ್ಲಿಕ್ ಶಾಲೆಯಲ್ಲಿ ಜವಾಹರಲಾಲ್ ನೆಹರು ಅವರ ಜಯಂತಿ ಅಂಗವಾಗಿ ಆಯೋಜಿಸಿದ್ದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ನಮ್ಮ ದೇಶವು ಸಂಸ್ಕೃತಿ ಮತ್ತು ಸಂಸ್ಕಾರಗಳ ತವರೂರಾಗಿದೆ. ಪಾಲಕರು ಹಾಗೂ ಶಿಕ್ಷಕರು ದೇಶದ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಚಿಕ್ಕ ವಯಸ್ಸಿನಿಂದಲೇ ಮಕ್ಕಳಲ್ಲಿ ಬೆಳೆಸುವ ಕಾರ್ಯ ಮಾಡಬೇಕು. ಪ್ರತಿ ಮನೆಯ ಮಗುವೂ ದೇಶದ ಸಂಪತ್ತಾಗಿ ರೂಪುಗೊಳ್ಳಬೇಕು. ಆಗ ಮಾತ್ರ ಮಕ್ಕಳು ಭವ್ಯ ಭಾರತದ ಉತ್ತಮ ಪ್ರಜೆಗಳಾಗಲು ಸಾಧ್ಯ. ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ಮಕ್ಕಳ ಮೇಲಿನ ಪ್ರೀತಿಯಿಂದ ತಮ್ಮ ಜನ್ಮದಿನವನ್ನು ಮಕ್ಕಳ ದಿನಾಚರಣೆಯಾಗಿ ಆಚರಿಸಲು ಅರ್ಪಿಸಿದ ಹಿನ್ನೆಲೆಯಲ್ಲಿ ಇಂದು ದೇಶಾದ್ಯಂತ ಮಕ್ಕಳ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ ಎಂದು ಹೇಳಿದರು.
ದಿನಾಚರಣೆಯ ಅಂಗವಾಗಿ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಅತಿಥಿಗಳಾಗಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯಶಿಕ್ಷಕಿ ಸೌಂದರ್ಯ ಎಂ., ಸವಿತಾ ಶರ್ಮಾ, ವಿಜಯಲಕ್ಷ್ಮಿ ಪಾಟೀಲ್, ಜಯಶ್ರೀ ಮಡಿವಾಳರ್, ಕಾವೇರಿ ಪಾಟೀಲ್, ಕೌಸರ್ ಬೇಗಮ್, ವನಿತಾ ರಾಥೋಡ್, ಆಸ್ಮಾ ಆವಟಿ, ರಂಜಿತಾ, ವಿನಯ, ವೈಷ್ಣವಿ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಶಿಕ್ಷಕಿ ವಿಜಯಲಕ್ಷ್ಮಿ ಪಾಟೀಲ್ ಸ್ವಾಗತಿಸಿದರು. ಕಾವೇರಿ ಪಾಟೀಲ್ ವಂದಿಸಿದರು. ವೈಷ್ಣವಿ ಕಾರ್ಯಕ್ರಮ ನಿರೂಪಿಸಿದರು.






