ಹುಣಸಗಿ | ಹಾಲು, ಬಸ್ ಪ್ರಯಾಣ ದರ ಏರಿಕೆ ಕೈಬಿಡಿ: ಬಸವರಾಜ ಮೇಲಿನಮನಿ

ಹುಣಸಗಿ : ಈಗಾಗಲೇ ಬರಗಾಲ, ಅಗತ್ಯ ವಸ್ತುಗಳ ಬೆಲೆ ಏರಿಕೆ ಸೇರಿದಂತೆ ಹಲವು ಸಮಸ್ಯೆಗಳಿಂದ ಜನಸಾಮಾನ್ಯರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಹಾಲು ಹಾಗೂ ಬಸ್ ಪ್ರಯಾಣ ದರ ಏರಿಕೆಗೆ ಮುಂದಾಗಿರುವುದು ಬಡವರು ಮತ್ತು ಮಧ್ಯಮ ವರ್ಗದ ಜನರ ಮೇಲೆ ಮತ್ತಷ್ಟು ಆರ್ಥಿಕ ಹೊರೆ ಹೊರಿಸಿದಂತಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಬಸವರಾಜ ಮೇಲಿನಮನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಹಾಲಿನ ದರವನ್ನು ಪ್ರತಿ ಲೀಟರ್‌ಗೆ 8 ರೂ. ರಷ್ಟು ಹೆಚ್ಚಿಸುವ ಬದಲು ನಷ್ಟದಲ್ಲಿರುವ ಹಾಲು ಒಕ್ಕೂಟಗಳ ಆರ್ಥಿಕ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಹಾಲು ಉತ್ಪಾದಕರು ಹಾಗೂ ಗ್ರಾಹಕರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಸಮತೋಲನದ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಅದೇ ರೀತಿ ಸಾರಿಗೆ ಸಂಸ್ಥೆಗಳ ಆರ್ಥಿಕ ಸ್ಥಿತಿ ಸುಧಾರಿಸಲು ಪ್ರಯಾಣ ದರ ಹೆಚ್ಚಿಸುವುದೊಂದೇ ಪರಿಹಾರವಲ್ಲ. ಆಡಳಿತಾತ್ಮಕ ಸುಧಾರಣೆ, ಅನಗತ್ಯ ವೆಚ್ಚಗಳಿಗೆ ಕಡಿವಾಣ ಹಾಗೂ ಸಂಸ್ಥೆಗಳ ಕಾರ್ಯಕ್ಷಮತೆ ಹೆಚ್ಚಿಸುವ ಮೂಲಕ ಆರ್ಥಿಕ ಸ್ಥಿತಿ ಸುಧಾರಿಸಬಹುದಾಗಿದೆ. ಹೀಗಾಗಿ ಶೇ. 12ರಿಂದ 15ರಷ್ಟು ಬಸ್ ಪ್ರಯಾಣ ದರ ಹೆಚ್ಚಿಸುವ ಶಿಫಾರಸನ್ನು ಕೈಬಿಟ್ಟು, ಪ್ರಸ್ತುತ ದರವನ್ನೇ ಮುಂದುವರಿಸಬೇಕು ಎಂದು ಆಗ್ರಹಿಸಿದ್ದಾರೆ.
ಜನರ ಬದುಕು ಈಗಾಗಲೇ ಬೆಲೆ ಏರಿಕೆಯ ಬಿಸಿಯಿಂದ ತತ್ತರಿಸಿದೆ. ಇಂತಹ ಸಂದರ್ಭದಲ್ಲಿ ಹಾಲು ಮತ್ತು ಬಸ್ ದರ ಹೆಚ್ಚಿಸಿದರೆ ಕುಟುಂಬಗಳ ಮಾಸಿಕ ಖರ್ಚಿನ ಮೇಲೆ ನೇರ ಪರಿಣಾಮ ಬೀರುತ್ತದೆ. ಸರ್ಕಾರ ಜನರ ಸಂಕಷ್ಟವನ್ನು ಅರ್ಥಮಾಡಿಕೊಂಡು ದರ ಏರಿಕೆ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಬಸವರಾಜ ಮೇಲಿನಮನಿ ಒತ್ತಾಯಿಸಿದ್ದಾರೆ.
ಹಾಲು ಮತ್ತು ಸಾರಿಗೆ ಸೇವೆಗಳು ಪ್ರತಿಯೊಂದು ಕುಟುಂಬದ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿವೆ. ಇವುಗಳ ದರ ಏರಿಕೆ ಜನಸಾಮಾನ್ಯರ ಜೀವನ ನಿರ್ವಹಣೆಗೆ ಮತ್ತಷ್ಟು ಸಂಕಷ್ಟ ತಂದೊಡ್ಡಲಿದ್ದು, ಯಾವುದೇ ಕಾರಣಕ್ಕೂ ಜನಪರ ಕ್ರಮವೆಂದು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ. ಸರ್ಕಾರ ತಕ್ಷಣ ದರ ಏರಿಕೆ ಪ್ರಸ್ತಾವನೆಯನ್ನು ಕೈಬಿಟ್ಟು ಜನಪರ ನಿರ್ಧಾರ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.






