ಮಾಲಿನ್ಯಕಾರಿ ಕೈಗಾರಿಕೆಗಳಿಗೆ ಹೊಸ ಪರವಾನಗಿ ನೀಡುತ್ತಿರುವುದು ಖಂಡನೀಯ: ಶಾಸಕ ಶರಣಗೌಡ ಕಂದಕೂರ

ಗುರುಮಠಕಲ್: ಕಡೇಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿನ ಕಾರ್ಖಾನೆಗಳು ಹೊರಸೂಸುತ್ತಿರುವ ವಿಷಾನಿಲ ಜನಜೀವನಕ್ಕೆ ಕಂಠಕವಾಗಿದ್ದು, ಅವುಗಳನ್ನು ಬಂದ್ ಮಾಡುವಂತೆ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಹೊಸದಾಗಿ ಫಾರ್ಮಾ ಕಂಪನಿಗಳಿಗೆ ಪರವಾನಗಿ ನೀಡುತ್ತಿರುವುದು ಖಂಡನೀಯ ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಆಕ್ರೋಶ ವ್ಯಕ್ತಪಡಿಸಿದರು.
ಸಮೀಪದ ಬದ್ದೇಪಲ್ಲಿ ಗ್ರಾಮದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ವಿಷಾನಿಲದಿಂದ ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿದೆ. ತಮ್ಮ ತಂದೆಯವರು ಶಾಸಕರಾಗಿದ್ದ ಅವಧಿಯಿಂದಲೇ ಈ ಮಾಲಿನ್ಯಕಾರಿ ಕೈಗಾರಿಕೆಗಳ ವಿರುದ್ಧ ನಿರಂತರ ಹೋರಾಟ ನಡೆಸಲಾಗಿದೆ ಎಂದು ಹೇಳಿದರು.
ಪ್ರತಿ ವಿಧಾನಮಂಡಲ ಅಧಿವೇಶನದಲ್ಲೂ ಕ್ಷೇತ್ರದ ಜನರ ಪರವಾಗಿ ಮಾಲಿನ್ಯದ ವಿಚಾರವನ್ನು ಪ್ರಸ್ತಾಪಿಸಿದ್ದು, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಿಗೆ ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಅವರು ಸ್ಥಳಕ್ಕೆ ಭೇಟಿ ನೀಡಿ ಅವ್ಯವಸ್ಥೆ ಕಂಡು ಕ್ರಮಕ್ಕೆ ಸೂಚಿಸಿದ್ದರು ಎಂದು ತಿಳಿಸಿದರು.
ಈ ಹಿನ್ನೆಲೆಯಲ್ಲಿ ಕೈಗಾರಿಕಾ ಪ್ರದೇಶದಲ್ಲಿನ ಕಲ್ಯಾಣ ಕರ್ನಾಟಕ ವೇಸ್ಟ್ ಮ್ಯಾನೇಜ್‌ಮೆಂಟ್ ಪ್ರಾಜೆಕ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯನ್ನು ಬಂದ್ ಮಾಡಲು ಆದೇಶ ಹೊರಡಿಸಲಾಗಿದೆ ಎಂದು ಹೇಳಿದರು.
ಜನರ ಆರೋಗ್ಯಕ್ಕೆ ಹಾನಿ ಉಂಟುಮಾಡುವ ಕೈಗಾರಿಕೆಗಳನ್ನು ಮುಚ್ಚಬೇಕು ಎಂದು ಹೋರಾಟ ನಡೆಸುತ್ತಿರುವ ಸಂದರ್ಭದಲ್ಲಿ ಸರ್ಕಾರ ಹೊಸ ಕೈಗಾರಿಕೆಗಳಿಗೆ ಅನುಮತಿ ನೀಡುತ್ತಿರುವುದು ಖಂಡನೀಯ ಎಂದು ಅವರು ಹೇಳಿದರು.
ಕಾಮಗಾರಿ ಗುಣಮಟ್ಟ ಕಾಪಾಡಲು ಸೂಚನೆ :
ಬದ್ದೇಪಲ್ಲಿ ಗ್ರಾಮದಲ್ಲಿ 2025-26ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪಂಗಡ ಯೋಜನೆಯಡಿ ಸುಮಾರು ₹50 ಲಕ್ಷ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಯನ್ನು ಗುಣಮಟ್ಟದೊಂದಿಗೆ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಇದೇ ವೇಳೆ ಗ್ರಾಮದ ಸರ್ಕಾರಿ ಪ್ರೌಢಶಾಲೆ ತಡೆಗೋಡೆ ನಿರ್ಮಾಣ, ಶುದ್ಧ ಕುಡಿಯುವ ನೀರಿನ ಘಟಕ ದುರಸ್ತಿ, ವಿದ್ಯುತ್ ಸಮಸ್ಯೆ ಹಾಗೂ ಕೆರೆ ದುರಸ್ತಿ ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರು ಮನವಿ ಸಲ್ಲಿಸಿದರು. ಕ್ಷೇತ್ರದ ಎಲ್ಲಾ ಗ್ರಾಮಗಳ ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲಾಗುವುದು ಎಂದು ಶಾಸಕರು ಭರವಸೆ ನೀಡಿದರು.
ಅಧಿಕಾರಿಗಳಿಗೆ ತಾಕೀತು :
ಗ್ರಾಮಗಳ ಮೂಲಭೂತ ಸಮಸ್ಯೆಗಳನ್ನು ಅಧಿಕಾರಿಗಳು ತಮ್ಮ ಹಂತದಲ್ಲಿಯೇ ಪರಿಹರಿಸಬೇಕು. ಪಿಡಿಒ, ಜೆಸ್ಕಾಂ, ಕಂದಾಯ ಇಲಾಖೆ ಸೇರಿದಂತೆ ಹಲವು ಅಧಿಕಾರಿಗಳು ಸಾರ್ವಜನಿಕರ ಕರೆ ಸ್ವೀಕರಿಸುವುದಿಲ್ಲ ಹಾಗೂ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂಬ ದೂರುಗಳು ಕೇಳಿಬರುತ್ತಿವೆ ಎಂದು ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು.
ಜನರು ಶಾಸಕರನ್ನು ಸಂಪರ್ಕಿಸುವ ಪರಿಸ್ಥಿತಿ ನಿರ್ಮಾಣವಾಗದಂತೆ ಅಧಿಕಾರಿಗಳು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಅವರು ತಾಕೀತು ಮಾಡಿದರು.
ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿಧಿಗಳು, ಜೆಡಿಎಸ್ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.






