ಯಾದಗಿರಿ ಜಿಲ್ಲಾ ಪತ್ರಕರ್ತರ ಸಂಘದಿಂದ ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ

ಯಾದಗಿರಿ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ 79ನೇ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.
ಸಂಘದ ಜಿಲ್ಲಾಧ್ಯಕ್ಷ ಮಲ್ಲಪ್ಪ ಸಂಕೀನ್ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಮಾತನಾಡಿ, ದೇಶಕ್ಕೆ 1947ರ ಆಗಸ್ಟ್ 15ರಂದು ಸ್ವಾತಂತ್ರ್ಯ ದೊರೆತಿದ್ದರೂ, ಕಲ್ಯಾಣ ಕರ್ನಾಟಕ ಭಾಗವು ಹೈದರಾಬಾದ್ ನಿಜಾಮರ ಆಳ್ವಿಕೆಯಿಂದ 1948ರ ಸೆಪ್ಟೆಂಬರ್ 17ರಂದು ವಿಮೋಚನೆಗೊಂಡು ಭಾರತ ಒಕ್ಕೂಟಕ್ಕೆ ಸೇರಿತು ಎಂದು ಸ್ಮರಿಸಿದರು.
ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ದೂರದೃಷ್ಟಿಯ ನಾಯಕತ್ವ ಹಾಗೂ ಹೋರಾಟಗಾರರ ತ್ಯಾಗ-ಬಲಿದಾನದಿಂದ ಈ ಭಾಗದ ಜನರಿಗೆ ನಿಜವಾದ ಸ್ವಾತಂತ್ರ್ಯ ದೊರೆಯಿತು. ಆ ಹೋರಾಟಗಾರರ ಕೊಡುಗೆಯನ್ನು ಎಂದಿಗೂ ಮರೆಯಬಾರದು ಎಂದು ಅವರು ಹೇಳಿದರು.
ಹಿಂದುಳಿದಿರುವ ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಇನ್ನಷ್ಟು ಆದ್ಯತೆ ನೀಡುವ ಮೂಲಕ ಪ್ರಗತಿಗೆ ಮುನ್ನುಡಿ ಬರೆಯಬೇಕು ಎಂದು ಅವರು ಆಗ್ರಹಿಸಿದರು.
ಕಾರ್ಯಕ್ರಮದಲ್ಲಿ ಹನುಮಂತ ಪಿ., ಮಹೇಶ್ ಗಣೇರ್, ದೇವರಾಜ ನಾಯಕ ವರ್ಕನಹಳ್ಳಿ, ಸುಧೀರ್ ಕೋಟೆ, ಬೀರಲಿಂಗಪ್ಪ ಕಿಲ್ಲನಕೇರಾ, ನಾಗರಾಜ ಬೀರನೂರು, ಆಂಜನೇಯ ದೇವರಮನೆ, ರಾಜೇಂದ್ರ ಕಲಾಲ್ ಸೇರಿದಂತೆ ಸಂಘದ ಸದಸ್ಯರು ಉಪಸ್ಥಿತರಿದ್ದರು.




