ಜು.22ರಂದು ಗುರುಮಠಕಲ್‌ನಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ಗುರುಮಠಕಲ್: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ಗುರುಮಠಕಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಮುದಾಯ ಆರೋಗ್ಯ ಕೇಂದ್ರ ಗುರುಮಠಕಲ್ ಹಾಗೂ ಹೈದರಾಬಾದ್‌ನ ಮಲ್ಲಾರೆಡ್ಡಿ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಸಹಯೋಗದಲ್ಲಿ ಜುಲೈ 22ರಂದು ಗುರುಮಠಕಲ್ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ತಾಲೂಕು ಅಧ್ಯಕ್ಷ ಸಂತೋಷ್ ಕುಮಾರ್ ನಿರೀಟಿ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಅವರ ಜನ್ಮದಿನದ ಅಂಗವಾಗಿ ಈ ಆರೋಗ್ಯ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಶಿಬಿರದಲ್ಲಿ ಹೃದಯ ಸಂಬಂಧಿತ ಕಾಯಿಲೆಗಳ ತಪಾಸಣೆ, ಉಚಿತ ಇಸಿಜಿ (ECG), 2ಡಿ ಇಕೋ (2D Echo) ಪರೀಕ್ಷೆ, ಕ್ಯಾನ್ಸರ್ ತಪಾಸಣೆ ಸೇರಿದಂತೆ ವಿವಿಧ ಆರೋಗ್ಯ ತಪಾಸಣೆಗಳನ್ನು ನಡೆಸಲಾಗುತ್ತದೆ. ಅಗತ್ಯವಿರುವವರಿಗೆ ಹೈದರಾಬಾದ್‌ನ ಮಲ್ಲಾರೆಡ್ಡಿ ನಾರಾಯಣ ಆಸ್ಪತ್ರೆಯಲ್ಲಿ ಹೃದಯ ಮತ್ತು ಕ್ಯಾನ್ಸರ್ ಸಂಬಂಧಿತ ಶಸ್ತ್ರಚಿಕಿತ್ಸೆಯನ್ನು ಉಚಿತವಾಗಿ ನಡೆಸಲು ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
ಇದಲ್ಲದೆ, ಕಣ್ಣಿನ ತಪಾಸಣೆಯೂ ನಡೆಯಲಿದ್ದು, ಅಗತ್ಯವಿದ್ದಲ್ಲಿ ಯಾದಗಿರಿ ಜಿಲ್ಲಾ ಆಸ್ಪತ್ರೆಯಲ್ಲಿ ಉಚಿತ ಶಸ್ತ್ರಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಹೇಳಿದರು.
ಸಾರ್ವಜನಿಕರು ಹಾಗೂ ಸರ್ಕಾರಿ ನೌಕರರು ಈ ಉಚಿತ ಆರೋಗ್ಯ ತಪಾಸಣಾ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಂತೋಷ್ ಕುಮಾರ್ ನಿರೀಟಿ ಮನವಿ ಮಾಡಿದ್ದಾರೆ.






