ಆಂಧ್ರಪ್ರದೇಶದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆ: ಕೆ.ಬಿ. ವಾಸು

ಯಾದಗಿರಿ: ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹಾಗೂ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ನೇತೃತ್ವದ ಸರ್ಕಾರದ ಆಡಳಿತದಲ್ಲಿ ವಿರೋಧ ಪಕ್ಷಗಳ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಅಡ್ಡಿಪಡಿಸಲಾಗಿದೆ ಎಂಬ ಆರೋಪಗಳು ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತರುವಂತಿವೆ ಎಂದು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ (AIBSP) ಕರ್ನಾಟಕ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ಬಿ. ವಾಸು ಖಂಡಿಸಿದ್ದಾರೆ.
ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿ ಅಭ್ಯರ್ಥಿಗಳ ಹಕ್ಕುಗಳ ರಕ್ಷಣೆ ಹಾಗೂ ದೂರುಗಳ ಪರಿಶೀಲನೆಗೆ ನಿರ್ದೇಶನ ನೀಡಿರುವುದು ಚುನಾವಣಾ ಪ್ರಕ್ರಿಯೆಯ ನ್ಯಾಯಸಮ್ಮತತೆಯ ಮಹತ್ವವನ್ನು ಎತ್ತಿಹಿಡಿದಿದೆ. ಅಧಿಕಾರದ ಬಲದಿಂದ ವಿರೋಧ ಪಕ್ಷಗಳ ರಾಜಕೀಯ ಹಕ್ಕುಗಳನ್ನು ಹತ್ತಿಕ್ಕುವ ಪ್ರಯತ್ನಗಳು ನಡೆದಿದ್ದರೆ, ಅವುಗಳನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಚುನಾವಣೆಯಲ್ಲಿ ಸ್ಪರ್ಧಿಸುವ ಹಕ್ಕು ಪ್ರಜಾಪ್ರಭುತ್ವದ ಮೂಲ ಆಶಯವಾಗಿದೆ ಎಂದು ಅವರು ತಿಳಿಸಿದ್ದಾರೆ.
ಆರೋಪಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರು ಕಂಡುಬಂದಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಆಂಧ್ರಪ್ರದೇಶದಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಯುವಂತೆ ಚುನಾವಣಾ ಆಯೋಗ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕೆ.ಬಿ. ವಾಸು ಆಗ್ರಹಿಸಿದ್ದಾರೆ.




