ನಗರದ ಜನರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆದ್ಯತೆ : ಶಾಸಕ ಚೆನ್ನಾರೆಡ್ಡಿ ತುನ್ನೂರು

ಯಾದಗಿರಿ: ಜಿಲ್ಲಾ ಕೇಂದ್ರವಾಗಿ ಯಾದಗಿರಿ ನಗರವು ಪ್ರತಿವರ್ಷ ವಿಸ್ತಾರಗೊಳ್ಳುತ್ತಿದ್ದು, ಜನರ ಬೇಡಿಕೆಗೆ ಅನುಗುಣವಾಗಿ ನಗರದ ಎಲ್ಲ ವಾರ್ಡ್‌ಗಳಲ್ಲಿ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರು ಹೇಳಿದರು.
ನಗರದ ವಾರ್ಡ್ ಸಂಖ್ಯೆ 22ರ ವೀರಶೈವ ಕಲ್ಯಾಣ ಮಂಟಪದ ಸಮೀಪ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಟಿಎಸ್‌ಪಿ ಯೋಜನೆಯಡಿ ನಿರ್ಮಿತಿ ಕೇಂದ್ರದಿಂದ ಅಂದಾಜು 25 ಲಕ್ಷ ರೂ. ವೆಚ್ಚದಲ್ಲಿ ಕೈಗೊಳ್ಳಲಿರುವ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೆ ಅಡಿಗಲ್ಲು ನೆರವೇರಿಸಿ ಅವರು ಮಾತನಾಡಿದರು.
ಕಳೆದ ಮೂರು ವರ್ಷಗಳಲ್ಲಿ ನಗರದ ಜನರಿಗೆ ಅನುಕೂಲವಾಗುವ ಹಲವು ಮಹತ್ವದ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡು ಬದಲಾವಣೆಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ. ಇನ್ನೂ ಹಲವು ಕೆಲಸಗಳು ಬಾಕಿ ಇದ್ದು, ಮುಂದಿನ ದಿನಗಳಲ್ಲಿ ವಿವಿಧ ಇಲಾಖೆಗಳ ಮೂಲಕ ಹೆಚ್ಚಿನ ಅನುದಾನ ತರಿಸಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಜನಪರ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುವುದು ಎಂದರು.
ನಗರದ ಹಲವು ವಾರ್ಡ್‌ಗಳಲ್ಲಿ ಸೂಕ್ತ ಒಳಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಳೆಗಾಲದಲ್ಲಿ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಸರ್ಕಾರ ಈಗಾಗಲೇ 55 ಕೋಟಿ ರೂ. ವೆಚ್ಚದಲ್ಲಿ ವಿವಿಧ ವಾರ್ಡ್‌ಗಳಲ್ಲಿ ಒಳಚರಂಡಿ ಕಾಮಗಾರಿಗಳನ್ನು ಕೈಗೊಂಡಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ. ಮುಂದಿನ ದಿನಗಳಲ್ಲಿ ಸಮಸ್ಯೆಗೆ ಪರಿಹಾರ ದೊರೆಯಲಿದೆ ಎಂದು ತಿಳಿಸಿದರು.
ನಗರದ ಜನರ ಬಹುದಿನದ ಬೇಡಿಕೆಯಾದ ಭೀಮಾ ನದಿಯಿಂದ ಶುದ್ಧ ಕುಡಿಯುವ ನೀರು ಪೂರೈಸುವ ಯೋಜನೆ ತಾಂತ್ರಿಕ ಕಾರಣಗಳಿಂದ ಮಂದಗತಿಯಲ್ಲಿ ಸಾಗುತ್ತಿದೆ. ಕಾಮಗಾರಿ ವೇಗ ಹೆಚ್ಚಿಸುವಂತೆ ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ರಾಜ್ಯ ಸರ್ಕಾರ ಕಳೆದ ಮೂರು ವರ್ಷಗಳಿಂದ ಉತ್ತಮ ಆಡಳಿತ ನೀಡುವುದರ ಜೊತೆಗೆ ಪಂಚ ಗ್ಯಾರಂಟಿ ಯೋಜನೆಗಳ ಪ್ರಯೋಜನವನ್ನು ಜನರಿಗೆ ತಲುಪಿಸುತ್ತಿದೆ. ಗ್ರಾಮೀಣ ಭಾಗದಿಂದ ಬಂದಿರುವ ತಮಗೆ ಅಲ್ಲಿನ ಜನರ ಸಮಸ್ಯೆಗಳ ಅರಿವಿದ್ದು, ಜನರ ಬೇಡಿಕೆಗೆ ಅನುಗುಣವಾಗಿ ಹಂತ ಹಂತವಾಗಿ ಅಗತ್ಯ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಯಾವುದೇ ಇಲಾಖೆಯ ಕಾಮಗಾರಿಯಾಗಲಿ, ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಗುಣಮಟ್ಟ ಕಾಯ್ದುಕೊಂಡು ಕೆಲಸ ಮಾಡಬೇಕು. ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಖುದ್ದು ಪರಿಶೀಲನೆ ನಡೆಸುತ್ತಿರುವುದಾಗಿ ತಿಳಿಸಿದ ಶಾಸಕರು, ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಎಲ್ಲರೂ ತಮ್ಮ ಜವಾಬ್ದಾರಿಯನ್ನು ಅರಿತು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಸಿದ್ದಯ್ಯಸ್ವಾಮಿ ಹಿರೇಮಠ, ನಿರ್ಮಿತಿ ಕೇಂದ್ರದ ಸಹಾಯಕ ಇಂಜಿನಿಯರ್ ರವಿಕುಮಾರ ಕಂದಕೂರ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಈಟಿ, ಮುಖಂಡರಾದ ನಿಂಗಪ್ಪ ಜಾಲಗಾರ, ಚಂದ್ರಕಾಂತ ಮುನಿಯಪ್ಪನೋರ್, ವಿಶ್ವನಾಥ ನಾಯಕ, ಶಿವು ಬೆಳಗುಂದಿ, ತಿಮ್ಮಣ್ಣ ನಾಯಕ, ಬೀರಲಿಂಗ ಪೂಜಾರಿ, ಶಿವು ಕಂದಳ್ಳಿ, ರೀಯಾನ್ ಅಲಿ ತುಮಕೂರ, ಫಯಾಜ್ ಮುಲ್ಲಾ, ಸಾಯಿಬಣ್ಣ ಬಾಡಿಯಾಳ, ಮಲ್ಲಯ್ಯ ಕಸಬಿ, ವೆಂಕಟೇಶ ನಾಗುಂಡಿ, ಶಂಕರ್ ಸೋನಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.






