ನೀಟ್ ಅಕ್ರಮ ಖಂಡಿಸಿ ಯಾದಗಿರಿಯಲ್ಲಿ ಪ್ರತಿಭಟನೆ; ‘ಪಾರ್ಲಿಮೆಂಟ್ ಚಲೋ’ ಹೋರಾಟಕ್ಕೆ ಬೆಂಬಲ

ಯಾದಗಿರಿ: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಹಾಗೂ ದೆಹಲಿಯಲ್ಲಿ ನಡೆಯುತ್ತಿರುವ ‘ಪಾರ್ಲಿಮೆಂಟ್ ಚಲೋ’ ಹೋರಾಟಕ್ಕೆ ಬೆಂಬಲ ಸೂಚಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೈಸೇಷನ್ (AIDSO) ಜಿಲ್ಲಾ ಸಮಿತಿಯು ಸೋಮವಾರ ನಗರದ ಸುಭಾಷ್ ವೃತ್ತದಲ್ಲಿ ಪ್ರತಿಭಟನೆ ನಡೆಸಿತು.
ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಂಘಟನೆಯ ಜಿಲ್ಲಾ ಸಂಚಾಲಕಿ ಶಿಲ್ಪಾ ಬಿ.ಕೆ., ನೀಟ್ ಸೇರಿದಂತೆ ವಿವಿಧ ರಾಷ್ಟ್ರೀಯ ಮಟ್ಟದ ಪ್ರವೇಶ ಪರೀಕ್ಷೆಗಳಲ್ಲಿ ಅಕ್ರಮಗಳು ಬೆಳಕಿಗೆ ಬರುತ್ತಿರುವುದು ದೇಶದ ಶಿಕ್ಷಣ ವ್ಯವಸ್ಥೆಯ ಮೇಲಿನ ವಿದ್ಯಾರ್ಥಿಗಳ ನಂಬಿಕೆಯನ್ನು ಕುಗ್ಗಿಸುತ್ತಿದೆ ಎಂದು ಆರೋಪಿಸಿದರು.
ಲಕ್ಷಾಂತರ ವಿದ್ಯಾರ್ಥಿಗಳು ವರ್ಷಪೂರ್ತಿ ಶ್ರಮಪಟ್ಟು ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದರೂ, ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳು ಹಾಗೂ ಆಡಳಿತ ವೈಫಲ್ಯಗಳಿಂದ ಅವರ ಭವಿಷ್ಯ ಸಂಕಷ್ಟಕ್ಕೆ ಸಿಲುಕುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಪರೀಕ್ಷಾ ವ್ಯವಸ್ಥೆಯಲ್ಲಿ ಸಂಪೂರ್ಣ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಖಚಿತಪಡಿಸಬೇಕು. ನೀಟ್ ಸೇರಿದಂತೆ ಎಲ್ಲಾ ರಾಷ್ಟ್ರೀಯ ಪ್ರವೇಶ ಪರೀಕ್ಷೆಗಳನ್ನು ನ್ಯಾಯಸಮ್ಮತವಾಗಿ ನಡೆಸಬೇಕು. ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸಬೇಕು ಎಂದು ಆಗ್ರಹಿಸಿದರು.
ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳಿಗೆ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು. ಪರೀಕ್ಷಾ ವ್ಯವಸ್ಥೆಯಲ್ಲಿನ ವೈಫಲ್ಯಗಳಿಗೆ ಕೇಂದ್ರ ಸರ್ಕಾರ ನೇರ ಹೊಣೆ ಹೊತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಂಘಟನೆಯ ಸದಸ್ಯರಾದ ರಂಜಿತಾ ನಾಗರಾಜ್, ಶ್ರೀಶೈಲ್, ಭಾಗ್ಯಶ್ರೀ, ರೋಜಾ, ದೇವೀಂದ್ರಮ್ಮ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.






