ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರವೇ ಪ್ರಜಾ ಸೇವಾ ಆಂದೋಲನದ ಉದ್ದೇಶ : ಶಾಸಕ ಶರಣಬಸಪ್ಪಗೌಡ ದರ್ಶನಾಪುರ
ತಾಲೂಕು ಮಟ್ಟದ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮ

ಯಾದಗಿರಿ : ಜನರ ಸಮಸ್ಯೆಗಳನ್ನು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಒಗ್ಗೂಡಿ ಆಲಿಸಿ, ಸಾಧ್ಯವಾದಷ್ಟು ಶೀಘ್ರವಾಗಿ ಇತ್ಯರ್ಥಪಡಿಸುವ ಉದ್ದೇಶದಿಂದ ಪ್ರಜಾ ಸೇವಾ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.
ನಗರದ ಆರಬೋಳ ಕಲ್ಯಾಣ ಮಂಟಪದಲ್ಲಿ ಶನಿವಾರ ನಡೆದ ತಾಲೂಕು ಮಟ್ಟದ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಧಿಯಲ್ಲಿ ನಡೆದ ಜನಸಂಪರ್ಕ ಸಭೆಗಳ ಆಶಯವನ್ನು ಮುಂದುವರಿಸಿಕೊಂಡು ಪ್ರಜಾ ಸೇವಾ ಆಂದೋಲನ ರೂಪಿಸಲಾಗಿದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಪದೇಪದೇ ಅಲೆದಾಡುವ ಪರಿಸ್ಥಿತಿ ತಪ್ಪಿಸುವುದೇ ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.
ಅಧಿಕಾರಿಗಳು ಜನರ ಬಳಿಗೆ ತೆರಳಿ ಅವರ ಅಹವಾಲುಗಳನ್ನು ಆಲಿಸಿ, ಸಾಧ್ಯವಾದಷ್ಟು ಸ್ಥಳೀಯ ಮಟ್ಟದಲ್ಲಿಯೇ ಸಮಸ್ಯೆಗಳನ್ನು ಪರಿಹರಿಸಬೇಕು. ಸ್ಥಳೀಯ ಮಟ್ಟದಲ್ಲಿ ಇತ್ಯರ್ಥವಾಗದ ಪ್ರಕರಣಗಳನ್ನು ಜಿಲ್ಲಾ ಮಟ್ಟಕ್ಕೆ ಹಾಗೂ ಬೆಂಗಳೂರಿನ ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ಕೊಂಡೊಯ್ದು ಪರಿಹಾರ ಕಲ್ಪಿಸಲಾಗುವುದು ಎಂದು ಹೇಳಿದರು.
ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ನಗರಸಭೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಮತ್ತು ಸೂಕ್ತ ಪರಿಹಾರ ಒದಗಿಸಬೇಕು ಎಂದು ಶರಣಬಸಪ್ಪಗೌಡ ದರ್ಶನಾಪುರ ಸೂಚಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಪಾಂಡ್ವೆ ರಾಹುಲ್ ತುಕಾರಾಮ್, ಅಪರ ಜಿಲ್ಲಾಧಿಕಾರಿ ರಮೇಶ್ ಕೋಲಾರ್, ಸಹಾಯಕ ಆಯುಕ್ತ ಶ್ರೀಧರ ಗೋಟೂರ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ರತೇಂದ್ರನಾಥ್ ಸೂಗೂರ, ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಶರಣಪ್ಪ ಪಾಟೀಲ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕ ಸೋಮಶೇಖರ್ ಬಿರೇದಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ ಬಿರಾದಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಚನ್ನಬಸಪ್ಪ ಮುಧೋಳ್, ಪಶುಸಂಗೋಪನೆ ಇಲಾಖೆಯ ಉಪನಿರ್ದೇಶಕ ಡಾ. ರಾಜಶೇಖರ್ ಖಾಸಬಾಗ, ಶಹಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸಿದ್ದಪ್ಪ ಸಾಹು ಆರಗೋಳ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ತಹಸೀಲ್ದಾರ್ ಸಿದ್ದಾರೂಢ ಬನ್ನಿಕೊಪ್ಪ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಶರಬೈ, ನಗರಸಭೆ ಪೌರಾಯುಕ್ತ ಜೀವನ್ ಕಟ್ಟಿಮನಿ, ತಾಲೂಕು ಮಟ್ಟದ ಅಧಿಕಾರಿಗಳು, ಮುಖಂಡರು ಹಾಗೂ ಅರ್ಜಿದಾರರು ಉಪಸ್ಥಿತರಿದ್ದರು.






