ಯಾದಗಿರಿ ನೂತನ ಜಿಲ್ಲಾಧಿಕಾರಿಯಾಗಿ ರಾಹುಲ್ ಪಾಂಡ್ವೆ ನೇಮಕ

ಯಾದಗಿರಿ: ಯಾದಗಿರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ 2016ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ರಾಹುಲ್ ಪಾಂಡ್ವೆ ಅವರನ್ನು ನೇಮಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಬುಧವಾರ ಆದೇಶ ಹೊರಡಿಸಿದೆ.
ರಾಹುಲ್ ಪಾಂಡ್ವೆ ಅವರು ಪ್ರಸ್ತುತ ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕಲಬುರಗಿ ವಿಭಾಗದ ಹೆಚ್ಚುವರಿ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಈ ಹಿಂದೆ ಅವರು ರಾಯಚೂರು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಹಾಗೂ ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ (ಜೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು.
ಪ್ರಸ್ತುತ ಯಾದಗಿರಿ ಜಿಲ್ಲಾಧಿಕಾರಿಯಾಗಿರುವ ಹರ್ಷಲ್ ಭೋಯರ್ ಅವರನ್ನು ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದ (ಇಡಿಸಿಎಸ್) ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಲಾಗಿದೆ.
2016ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿರುವ ಹರ್ಷಲ್ ಭೋಯರ್ ಅವರು 2025ರ ಜುಲೈ 9ರಂದು ಯಾದಗಿರಿ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ವರ್ಷ ಪೂರ್ಣಗೊಳ್ಳುವ ಮುನ್ನವೇ ಅವರ ವರ್ಗಾವಣೆ ನಡೆದಿರುವುದು ಗಮನಾರ್ಹವಾಗಿದೆ.




