ಶಹಾಪುರ | ದುಶ್ಚಟಗಳ ವಿರುದ್ಧ ಜನಜಾಗೃತಿ ಅಗತ್ಯ: ಶಾಸಕ ಶರಣಬಸಪ್ಪಗೌಡ ದರ್ಶನಾಪುರ

ಶಹಾಪುರ: ಮಾದಕ ವಸ್ತುಗಳು, ಧೂಮಪಾನ ಹಾಗೂ ಮದ್ಯಪಾನದಂತಹ ದುಶ್ಚಟಗಳ ವಿರುದ್ಧ ಸಮಾಜದಲ್ಲಿ ವ್ಯಾಪಕ ಜಾಗೃತಿ ಮೂಡಿಸುವುದು ಇಂದಿನ ಅಗತ್ಯವಾಗಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಹೇಳಿದರು.
ತಾಲೂಕಿನ ಭೀಮರಾಯನ ಗುಡಿ ಕೃಷಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಯಾದಗಿರಿ, ತಾಲೂಕು ಆಡಳಿತ ಹಾಗೂ ನಗರಸಭೆ ಶಹಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಚಿತ್ತರಗಿ ಇಳಕಲ್ ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನದ ಪರಮಪೂಜ್ಯ ಡಾ. ಮಹಾಂತ ಶಿವಯೋಗಿಗಳ ಜಯಂತಿ ಅಂಗವಾಗಿ ಆಯೋಜಿಸಿದ್ದ ‘ವ್ಯಸನ ಮುಕ್ತ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಾಮಾಜಿಕ ಕಳಕಳಿ ಮತ್ತು ಬದ್ಧತೆಯಿಂದ ಮದ್ಯಪಾನ ಸಂಯಮ ಮಂಡಳಿ ನಿರಂತರವಾಗಿ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದೆ. ಮದ್ಯಪಾನವನ್ನು ಸರ್ಕಾರ ಮಾತ್ರ ನಿಲ್ಲಿಸಲು ಸಾಧ್ಯವಿಲ್ಲ. ಸಾರ್ವಜನಿಕರು ಸ್ವಯಂಪ್ರೇರಿತರಾಗಿ ದುಶ್ಚಟಗಳನ್ನು ತ್ಯಜಿಸಿದಾಗ ಮಾತ್ರ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ ಎಂದು ಹೇಳಿದರು.
ಗುಟ್ಕಾ, ಸಿಗರೇಟ್ ಹಾಗೂ ಮದ್ಯಪಾನದಿಂದ ಆರೋಗ್ಯ ಹದಗೆಡುವುದಲ್ಲದೆ ಕುಟುಂಬದ ಮೇಲೆ ಆರ್ಥಿಕ ಹೊರೆ ಹೆಚ್ಚಾಗಿ ಬಡತನ ಸೃಷ್ಟಿಯಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ದುಶ್ಚಟಗಳಿಂದ ದೂರವಿರಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ಚಿತ್ತರಗಿ ಶ್ರೀ ವಿಜಯ ಮಹಾಂತೇಶ್ವರ ಸಂಸ್ಥಾನ ಮಠದ ಗುರುಮಹಾಂತ ಸ್ವಾಮೀಜಿ ಮಾತನಾಡಿ, ಮದ್ಯಪಾನ ಮತ್ತು ಡ್ರಗ್ಸ್‌ನಂತಹ ದುಶ್ಚಟಗಳಿಗೆ ಯುವಕರು ಬಲಿಯಾಗಿ ಆರೋಗ್ಯ ಹಾಳುಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿ, ಮಹಿಳೆಯರು ವಿಧವೆಯರಾಗುವಂತಹ ದುಸ್ಥಿತಿ ನಿರ್ಮಾಣವಾಗುತ್ತಿದೆ. ಬಡತನ ಹೆಚ್ಚಾಗಿ ಸಾಲದ ಸುಳಿಯಲ್ಲಿ ಸಿಲುಕಿ ಇಡೀ ಕುಟುಂಬವೇ ಸರ್ವನಾಶವಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.
ಆರೋಗ್ಯಕರ ಜೀವನಕ್ಕಾಗಿ ದುಶ್ಚಟಗಳಿಂದ ದೂರವಿರಬೇಕು ಎಂದು ವಿದ್ಯಾರ್ಥಿಗಳಿಗೆ ಪ್ರತಿಜ್ಞೆ ಬೋಧಿಸಿದ ಅವರು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದ ಅಂಗನವಾಡಿ ಕಾರ್ಯಕರ್ತೆಯರನ್ನು ಅಭಿನಂದಿಸಿದರು. ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಕುಟುಂಬ ಮತ್ತು ಸಮಾಜವನ್ನು ಸರಿದಾರಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಹೇಳಿದರು.
ಬೆಂಗಳೂರಿನ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ. ನಿಶ್ಚಲಾನಂದನಾಥ ಮಹಾಸ್ವಾಮೀಜಿ ಆಶೀರ್ವಚನ ನೀಡಿ, ಯುವಜನತೆ ಮಾದಕ ವ್ಯಸನಗಳಿಗೆ ಬಲಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಸಮಾಜವನ್ನು ವ್ಯಸನಮುಕ್ತಗೊಳಿಸಲು ಎಲ್ಲರೂ ಹಂತ ಹಂತವಾಗಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.
ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷ ಶರಣಪ್ಪ ಸಲದಾಪುರ ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯಾದ್ಯಂತ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕಾಗಿ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಮದ್ಯ, ಬೀಡಿ, ಸಿಗರೇಟ್ ಹಾಗೂ ಗುಟ್ಕಾವನ್ನು ಸಂಪೂರ್ಣ ನಿಷೇಧಿಸಿ ವ್ಯಸನಮುಕ್ತ ಗ್ರಾಮವಾಗಿ ರೂಪುಗೊಂಡಿರುವ ಕೊಪ್ಪಳ ಜಿಲ್ಲೆಯ ಹಟ್ಟಿ ಗ್ರಾಮಕ್ಕೆ ಪ್ರಸಕ್ತ ಸಾಲಿನ ಸಂಯಮ ಪ್ರಶಸ್ತಿ ಲಭಿಸಿದ್ದು, ಆ.16ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಹಾಪುರ ತಾಲೂಕಿನ ಅಣಬಿ ಗ್ರಾಮದಲ್ಲಿ ಮದ್ಯಪಾನ ನಿಷೇಧ ಹೋರಾಟ ನಡೆಸಿದ ಶೈಲಜಾ ಹಾಗೂ ಅವರಿಗೆ ಬೆಂಬಲವಾಗಿ ನಿಂತ ಗ್ರಾಮ ಪಂಚಾಯಿತಿ ಪಿಡಿಒ ರಮೇಶ್ ನಾಯಕ ಅವರನ್ನು ವಿಶೇಷವಾಗಿ ಸನ್ಮಾನಿಸಲಾಯಿತು.
ಈ ಸಮಾರಂಭದ ವೇದಿಕೆಯ ಮೇಲೆ ಚರಬಸವೇಶ್ವರ ಸಂಸ್ಥಾನ ಗದ್ದುಗೆಯ ಬಸವಯ್ಯ ಶರಣರು, ಭೀಮರಾಯನಗುಡಿ ಕಾಡಾ ಅಧ್ಯಕ್ಷರಾದ ಬಾಬು ಹೊನ್ನಾ ನಾಯಕ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸಿದ್ದಣ್ಣ ಸಾಹು ಆರಬೋಳ, ತಹಸಿಲ್ದಾರರಾದ ಸಿದ್ಧಾರೂಡ ಬನ್ನಿಕೊಪ್ಪ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಶರಭೈ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು,ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು,ಅತಿಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದ ಪ್ರಾರಂಭದಲ್ಲಿ ಬೂದಯ್ಯ ಮತ್ತು ಮಲ್ಲಯ್ಯ ಹಿರೇಮಠ ತಂಡದಿಂದ ಪ್ರಾರ್ಥನೆ ಗೀತೆ ನೆರವೇರಿತು,ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಕಾರ್ಯದರ್ಶಿಗಳಾದ ಎನ್.ಎಸ್. ಮಹೇಶ್ ಸರ್ವರನ್ನು ಸ್ವಾಗತಿಸಿದರು,ಜ್ಯೋತಿ ಲತಾ ತಡಬಿಡಿಮಠ ನಿರೂಪಿಸಿದರು,ರಂಗನಾಥ ದೊರೆ ವಂದಿಸಿದರು.






