ಶಹಾಪುರ | ಜ.31ರವರೆಗೆ ನಾಲೆಗಳಿಗೆ ನೀರು ಹರಿಸಲು ಆಗ್ರಹಿಸಿ ರಾಜ್ಯ ಹೆದ್ದಾರಿ ಬಂದ್

ಶಹಾಪುರ: ನಾರಾಯಣಪುರ ಜಲಾಶಯದ ಎಡ ಮತ್ತು ಬಲದಂಡೆ ನಾಲೆಗಳಿಗೆ ಜನವರಿ 31ರವರೆಗೆ ನೀರು ಹರಿಸುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಹಾಗೂ ಕರ್ನಾಟಕ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಬಿ.ಗುಡಿಯ ಬಾಪುಗೌಡ ದರ್ಶನಾಪುರ ವೃತ್ತದ ಬಳಿ ರಾಜ್ಯ ಹೆದ್ದಾರಿ ಬಂದ್ ಮಾಡಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿ ಆಕ್ರೋಶಗೊಂಡ ನೂರಾರು ರೈತರು ಸುಮಾರು ಆರು ಗಂಟೆಗಳ ಕಾಲ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಇದರಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡು ಕಿಲೋಮೀಟರ್‌ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಪ್ರಯಾಣಿಕರು ಹಾಗೂ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸಿದರು.
ಪ್ರತಿಭಟನೆಯ ನಡುವೆಯೂ ಪದವಿ ಪರೀಕ್ಷೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳು ಹಾಗೂ ತುರ್ತು ಸೇವೆಯಲ್ಲಿದ್ದ ಆಂಬುಲೆನ್ಸ್‌ಗಳ ಸಂಚಾರಕ್ಕೆ ರೈತರು ಮತ್ತು ಪೊಲೀಸರು ಅನುವು ಮಾಡಿಕೊಡುವ ಮೂಲಕ ಮಾನವೀಯತೆ ಮೆರೆದರು. ಈ ನಡೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು.
ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಮಲ್ಲಿಕಾರ್ಜುನ ಸತ್ಯಂಪೇಟ ಮಾತನಾಡಿ, ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯಗಳ ನೀರನ್ನು ನಂಬಿಕೊಂಡು ಕೃಷಿ ಮಾಡುತ್ತಿರುವ ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸುಮಾರು 60 ಸಾವಿರ ಎಕರೆ ಪ್ರದೇಶದಲ್ಲಿ ಮೆಣಸಿನಕಾಯಿ ಬೆಳೆ ಹಾಗೂ ಶೇಂಗಾ, ಸಜ್ಜೆ, ಜೋಳ, ತೊಗರಿ ಸೇರಿದಂತೆ ಒಟ್ಟು 80 ಸಾವಿರ ಎಕರೆ ಪ್ರದೇಶದ ಬೆಳೆಗಳು ನೀರಿಲ್ಲದೆ ಒಣಗುವ ಆತಂಕ ಎದುರಾಗಿದೆ. ಲಕ್ಷಾಂತರ ರೂಪಾಯಿ ಸಾಲ ಮಾಡಿ ಬಿತ್ತನೆ ಮಾಡಿರುವ ರೈತರು ಸಂಕಷ್ಟದಲ್ಲಿದ್ದು, ಸರ್ಕಾರ ಕೂಡಲೇ ನಾಲೆಗಳಿಗೆ ನೀರು ಹರಿಸಬೇಕು ಎಂದು ಒತ್ತಾಯಿಸಿದರು.
ರೈತ ಸಂಘದ ಜಿಲ್ಲಾಧ್ಯಕ್ಷ ಶರಣು ಮಂದಾರವಾಡ ಮಾತನಾಡಿ, ನಿಗದಿತ ಅವಧಿಗೂ ಮುನ್ನ ನಾಲೆಗಳಿಗೆ ನೀರು ಸ್ಥಗಿತಗೊಳಿಸುವ ನಿರ್ಧಾರದಿಂದ ರೈತರು ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಈಗಾಗಲೇ ಬೆಳೆಗಳಿಗೆ ನೀರಿನ ಅವಶ್ಯಕತೆ ಹೆಚ್ಚಿದ್ದು, ಈ ಹಂತದಲ್ಲಿ ನೀರು ಸ್ಥಗಿತಗೊಳಿಸಿದರೆ ಬೆಳೆಗಳು ಒಣಗಿ ರೈತರು ಆರ್ಥಿಕ ನಷ್ಟ ಅನುಭವಿಸಬೇಕಾಗುತ್ತದೆ. ಆದ್ದರಿಂದ ನೀರು ಹರಿಸುವ ಅವಧಿಯನ್ನು ವಿಸ್ತರಿಸಬೇಕು ಎಂದು ಆಗ್ರಹಿಸಿದರು.
ಕರ್ನಾಟಕ ಪ್ರಾಂತ ರೈತ ಸಂಘದ ಯಾದಗಿರಿ ಜಿಲ್ಲಾ ಉಪಾಧ್ಯಕ್ಷ ಎಸ್.ಎಂ. ಸಾಗರ ಮಾತನಾಡಿ, ನೀರಿನ ಅಭಾವದಿಂದ ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಬೆಳೆ ನಷ್ಟದ ಭೀತಿ ಆವರಿಸಿದೆ. ರೈತರಿಗೆ ಸಮರ್ಪಕವಾಗಿ ನೀರು ಒದಗಿಸುವುದು ಸರ್ಕಾರದ ಜವಾಬ್ದಾರಿಯಾಗಿದ್ದು, ಜನವರಿ 31ರವರೆಗೆ ನಾಲೆಗಳಿಗೆ ನೀರು ಹರಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ರೈತ ಸಂಘದ ರಾಯಚೂರು ಜಿಲ್ಲಾಧ್ಯಕ್ಷ ಪ್ರಭಾಕರ ಪಾಟೀಲ, ಹಸಿರು ಸೇನೆಯ ರಾಜ್ಯ ಕಾರ್ಯದರ್ಶಿ ಮಹೇಶ್ ಸುಬೇದಾರ್, ರೈತ ಮುಖಂಡರಾದ ಧರ್ಮಣ್ಣ ದೊರೆ, ತಮ್ಮಣ್ಣ ಜಾಗೀರ್ದಾರ್, ಭೀಮಣ್ಣ ಟಪ್ಪೇದಾರ್ ಸೇರಿದಂತೆ ನೂರಾರು ರೈತರು ಭಾಗವಹಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಅಪರ ಜಿಲ್ಲಾಧಿಕಾರಿಗೆ ರೈತ ಮುಖಂಡರು ಮನವಿ ಸಲ್ಲಿಸಿದರು. ರೈತರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಜನವರಿ 31ರವರೆಗೆ ನಾಲೆಗಳಿಗೆ ನೀರು ಹರಿಸುವ ಕುರಿತು ಅಧಿಕೃತ ಭರವಸೆ ನೀಡಬೇಕು. ಇಲ್ಲವಾದಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.






